ಮಡಿಕೇರಿ: ವ್ಯಕ್ತಿಗಿಂತ ಸಮಾಜ ಮುಖ್ಯ, ಸಮಾಜಕ್ಕಿಂತ ದೇಶ ಮುಖ್ಯ' ಎಂಬ ಧೈಯದೊಂದಿಗೆ, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತಾ ನಾವೆಲ್ಲರೂ ಮುನ್ನಡೆಯೋಣ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕರೆ ನೀಡಿದರು.
ಇಲ್ಲಿನ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.
ಸಂವಿಧಾನದ ಶ್ರೇಷ್ಠ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಕ್ಕೆ ನಿಜವಾದ ಅರ್ಥ ಸಿಗಬೇಕಾದರೆ, ನಾವೆಲ್ಲರೂ ಸಂವಿಧಾನಕ್ಕೆ ಬದ್ಧರಾಗಿ ಬದುಕುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.
1950ರ ಜನವರಿ 26 ರಂದು ನಮ್ಮ ಸಂವಿಧಾನ ಜಾರಿಗೆ ಬರುವ ಮೂಲಕ, ಭಾರತವು ವಿಶ್ವದ ಅತಿ ದೊಡ್ಡ ಪ್ರಜಾ ಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿತು. ಹಕ್ಕು ಮತ್ತು ಕರ್ತವ್ಯಗಳ ಸಮನ್ವಯವೇ ನಮ್ಮ ಸಂವಿಧಾನದ ಶಕ್ತಿ ಎಂದರು.
ನಂತರ ಅವರು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಿದೆ ಎಂದು ಹೇಳಿದರು
ಉಚಿತ 'ಶಕ್ತಿ' ಯೋಜನೆಯಡಿ 1,44,68,502 ಮಹಿಳೆಯರು ಪ್ರಯಾಣ ಮಾಡಿದ್ದು, ಸಂಸ್ಥೆಗೆ ₹ 63 ಕೋಟಿ ರೂಪಾಯಿಗಳಷ್ಟು ಆದಾಯ ಬಂದಿದೆ
ಕೊಡಗಿನಲ್ಲಿ ಶೇ.99.15 ರಷ್ಟು ಯಶಸ್ವಿ ನೋಂದಣಿ ಕಂಡಿರುವ 'ಗೃಹಜ್ಯೋತಿ' ಯೋಜನೆಯಡಿ, 1,99,610 ಕುಟುಂಬಗಳಿಗೆ ಈವರೆಗೆ ₹731.28 ಲಕ್ಷ ಸಹಾಯ ಧನ ಭರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಡಿಕೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕಿರುತಾರಾಲಯ ಸ್ಥಾಪನೆಗೆ ಒಟ್ಟು ₹ 1226.50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಪಶುಪಾಲನಾ ಇಲಾಖೆಯ 'ರಾಷ್ಟ್ರೀಯ ಜಾನು ವಾರು ಮಿಷನ್' ಅಡಿಯಲ್ಲಿ ₹2.64 ಲಕ್ಷ. ಅನುದಾನ ಒದಗಿಸಲಾಗಿದೆ. ಜಿಲ್ಲೆಯಲ್ಲಿ 41 ಜಾನುವಾರುಗಳಿಗೆ ವಿಮಾ ಸೌಲಭ್ಯ ಕಲ್ಪಿಸಲಾಗಿದೆ ಬಾಕಿ ಉಳಿದ ಜಾನುವಾರುಗಳಿಗೂ ವಿಮೆ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ರಾಜಾಸೀಟ್ ಉದ್ಯಾನದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ, ಉತ್ತಮ ಗುಣಮಟ್ಟದ ಆಹಾರ ಒದಗಿಸುವ ನಿಟ್ಟಿನಲ್ಲಿ ಫುಡ್ ಕೋರ್ಟ್ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ 'ಗೃಹಭಾಗ್ಯ' ಯೋಜನೆಯಡಿ 44 ಪೌರ ಕಾರ್ಮಿಕರಿಗೆ ಮನೆ ನಿರ್ಮಿಸಲು ₹ 264 ಲಕ್ಷ ಅನುದಾನ ಒದಗಿಸಲಾಗಿದೆ. ಈ ಪೈಕಿ 22 ಮನೆಗಳ ನಿರ್ಮಾಣ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ ನಡೆದಿರುವ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.