ಮಡಿಕೇರಿ: ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅರ್ಜಿಗಳಿಗೆ ಕಾಲಮಿತಿಯಲ್ಲಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಸಂಬಂಧ ಅಧಿಕಾರಿಗಳ ಜೊತೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ತಮ್ಮ ಹಂತದಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು, ಅದನ್ನು ಹೊರತುಪಡಿಸಿ ಸತಾಯಿಸುವುದು ಬೇಡ ಎಂದು ಸ್ಪಷ್ಟ ನಿರ್ದೇಶನ ನೀಡಿದರು.
‘ಸಕಾಲ ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಯಾವ ರೀತಿ ಭಾವಿಸಿಕೊಳ್ಳಬೇಕು ಎಂಬ ಬಗ್ಗೆ ತಾವೇ ವಿಮರ್ಶೆ ಮಾಡಿಕೊಳ್ಳಬೇಕು. ಕಾಲಮಿತಿಯಲ್ಲಿ ಮಾಹಿತಿ ನೀಡದಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ’ ಎಂದೂ ಅವರು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಸಮಯವನ್ನು ವ್ಯರ್ಥ ಮಾಡದೆ ಕಚೇರಿ ಕೆಲಸವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಕರ್ತವ್ಯದ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಮಧ್ಯಾಹ್ನದ ಊಟದ ಸಮಯ ಹೊರತುಪಡಿಸಿ ಕಚೇರಿ ಕೆಲಸ ಮಾಡಿದ್ದಲ್ಲಿ ಎಷ್ಟೇ ಒತ್ತಡ ಇದ್ದರೂ ಸಹ ಸಾರ್ವಜನಿಕ ಕೆಲಸಗಳನ್ನು ಪೂರ್ಣಗೊಳಿಸಬಹುದು. ಈ ನಿಟ್ಟಿನಲ್ಲಿ ಇಚ್ಛಾಶಕ್ತಿ ಇರಬೇಕು ಎಂದು ಹೇಳಿದರು.
ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕು. ಸರ್ಕಾರ ಕೇಳುವ ಮಾಹಿತಿಯನ್ನು ಒದಗಿಸಬೇಕು ಎಂದು ಸೂಚಿಸಿದರು.
ಸರ್ಕಾರದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕು. ದಾಖಲಾತಿ ಸರಿಯಾಗಿ ನಿರ್ವಹಣೆ ಮಾಡಬೇಕು. ಮಹಾಲೇಖಪಾಲಕರ ಆಡಿಟ್ ಕಂಡಿಕೆಗಳಿಗೆ ಮಾಹಿತಿ ನೀಡಲು ಬಾಕಿ ಇದ್ದು, ಕೂಡಲೇ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಎಂದು ಅವರು ನಿರ್ದೇಶನ ನೀಡಿದರು.
ಹೊಸ ಆರ್ಥಿಕ ವರ್ಷ ಆರಂಭವಾಗಿದ್ದು, ವಿವಿಧ ಇಲಾಖೆಗಳು ಈಗಿನಿಂದಲೇ ಅಗತ್ಯ ಕಾರ್ಯಕ್ರಮ ರೂಪಿಸಬೇಕು. ಜೊತೆಗೆ ಪ್ರಗತಿಯನ್ನೂ ಸಾಧಿಸಬೇಕು ಎಂದರು.
ವಿವಿಧ ಇಲಾಖೆಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ನಿವೇಶನ ಗುರುತು ಸಂಬಂಧ ಅವರು ಮಾಹಿತಿ ಪಡೆದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ‘ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸಬೇಕು’ ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಬ್ದುಲ್ ನಬೀ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಕಾರ್ಮಿಕ ಅಧಿಕಾರಿ ಕಾವೇರಿ, ತಹಶೀಲ್ದಾರರಾದ ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಪಶುಪಾಲನೆ ಇಲಾಖೆಯ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಹೇಮಂತ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು.
ಮುಂಗಾರು ಪ್ರವೇಶ ಸನ್ನಿಹಿತ; ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
‘ಮೇ ಕೊನೆ ವಾರದಲ್ಲಿ ಜಿಲ್ಲೆಗೆ ‘ಮುಂಗಾರು’ ಪ್ರವೇಶಿಸುವ ಸಾಧ್ಯತೆ ಇದೆ. ಆದ್ದರಿಂದ ಮುಂಗಾರು ಸಂದರ್ಭದಲ್ಲಿ ಕಳೆದ ಬಾರಿಯಂತೆಯೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಬೇಕು’ ಎಂದು ವೆಂಕಟ್ ರಾಜಾ ನಿರ್ದೇಶನ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.