
ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿಯ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಹಕಾರ, ಮೀನುಗಾರಿಕೆ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗಳು ದಾಪುಗಾಲಿಟ್ಟಿವೆ. ಅದರಲ್ಲೂ ಸಹಕಾರ ಇಲಾಖೆಯಲ್ಲಿ ಶೇ 100ರಷ್ಟು ಪ್ರಗತಿ ಸಾಧಿತವಾಗಿದೆ.
ಇನ್ನುಳಿದಂತೆ, ಕೌಶಲ್ಯಾಭಿವೃದ್ಧಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಡಿಮೆ ಪ್ರಗತಿ ಸಾಧಿತವಾಗಿರುವ ವಿಷಯ ಇಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೊತ್ತಾಯಿತು.
ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ‘ಎಲ್ಲ ಇಲಾಖೆಗಳು ತ್ವರಿತಗತಿಯಲ್ಲಿ ಪ್ರಗತಿ ಸಾಧಿಸಬೇಕು’ ಎಂದು ಸ್ಪಷ್ಟ ನಿರ್ದೇಶನ ನೀಡಿದರು.
ವಿವಿಧ ಇಲಾಖೆಗಳಲ್ಲಿ ವೈಯಕ್ತಿಕ ಮತ್ತು ಸಮುದಾಯ ಕಾರ್ಯಕ್ರಮಗಳನ್ನು ತಲುಪಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ವೆಂಕಟ್ ರಾಜಾ ಅವರು ಸೂಚಿಸಿದರು.
ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಇಂಧನ, ಸಹಕಾರ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪ್ರವಾಸೋದ್ಯಮ, ಬೃಹತ್ ಮತ್ತು ಸಣ್ಣ ನೀರಾವರಿ, ಶಾಲಾ ಶಿಕ್ಷಣ, ಕಾರ್ಮಿಕ, ಲೋಕೋಪಯೋಗಿ, ಕೈಮಗ್ಗ ಮತ್ತು ಜವಳಿ, ಅರಣ್ಯ, ನಗರಾಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡೆ, ಆಯುಷ್, ಕೌಶಲ್ಯಾಭಿವೃದ್ಧಿ, ಪಂಚಾಯತ್ ರಾಜ್, ಕೈಗಾರಿಕೆ, ನಗರಾಭಿವೃದ್ಧಿ, ಪದವಿ ಪೂರ್ವ ಶಿಕ್ಷಣ, ಹೀಗೆ ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕಾಗಿ ಇಂತಿಷ್ಟು ಹಣ ಮೀಸಲಿರಿಸಲಾಗಿದೆ. ಆದಷ್ಟು ಶೀಘ್ರ ಪ್ರಗತಿ ಸಾಧಿಸುವಂತೆ ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹೊನ್ನೇಗೌಡ ಅವರು ವಿವಿಧ ಇಲಾಖೆಗಳ ಪ್ರಗತಿ ಸಂಬಂಧ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಸಚಿನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಲೋಕೇಶ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ಶೀರಾಜ್ ಅಹಮ್ಮದ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಪಂಚಾಯತ್ ರಾಜ್ ಕಾರ್ಯಪಾಲಕ ಎಂಜಿನಿಯರ್ ಜಿ.ಕೆ.ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೆಳ್ಯಪ್ಪ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಸಂಬಂಧ ಮಾಹಿತಿ ನೀಡಿದರು.
ಆಹಾರ ಮತ್ತು ಪೌಷ್ಟಿಕ ಭದ್ರತೆ, ಸೂಕ್ಷ್ಮ ನೀರಾವರಿ ಯೋಜನೆ, ಕೃಷಿ ಯಾಂತ್ರೀಕರಣ ಉಪ ಅಭಿಯಾನ, ಜೇನು ಸಾಕಾಣಿಕೆ, ಮೀನುಗಾರಿಕೆ ಅಭಿವೃದ್ಧಿಗೆ ಸಹಾಯಧನ, ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ಕಾನೂನು ಪದವೀಧರರಿಗೆ ಪ್ರೋತ್ಸಾಹಧನ, ಕೌಶಲ್ಯಾಭಿವೃದ್ಧಿ ತರಬೇತಿ, ವಿದ್ಯಾರ್ಥಿಗಳ ಶುಲ್ಕ ಮರುಪಾವತಿ, ಯುವಕ ಸಂಘಗಳಿಗೆ ಕ್ರೀಡಾ ಕಿಟ್‍ಗಳ ವಿತರಣೆ, ಕ್ರೀಡಾ ತರಬೇತಿ, ಹೀಗೆ ವಿವಿಧ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಅಧಿಕಾರಿಗಳು ಸಭೆಯಲ್ಲಿ ಪ್ರಸ್ತಾಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.