
ಕುಶಾಲನಗರ: ‘ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಳ್ಳಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯಿಂದ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26ನೇ ಸಾಲಿನ ರಾಷ್ಟ್ರೀಯ ಆವಿಷ್ಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚು ಆಸಕ್ತಿ ಹಾಗೂ ಕುತೂಹಲ ಹೊಂದಬೇಕು. ಇದರಿಂದ ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ’ ಎಂದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ‘ಇಂತಹ ವಸ್ತು ಪ್ರದರ್ಶನವು ವಿದ್ಯಾರ್ಥಿಗಳನ್ನು ಗಣಿತ, ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ ಕುತೂಹಲ ಹೆಚ್ಚಿಸಿ ಅವರನ್ನು ಸಂಶೋಧನಾತ್ಮಕ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ’ ಎಂದು ಹೇಳಿದರು.
ಮುಖ್ಯಶಿಕ್ಷಕ ಬಿ.ಆರ್.ಸತ್ಯನಾರಾಯಣ ಮಾತನಾಡಿ, ‘ಈ ವಸ್ತು ಪ್ರದರ್ಶನವು ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ. ಮಕ್ಕಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.
ವಿಜ್ಞಾನ ಶಿಕ್ಷಕಿ ಬಿ.ಪಿ.ಸವಿತಾ ಮಾತನಾಡಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಟಿ.ಎಚ್.ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಅಣ್ಣಯ್ಯ, ಉಪಾಧ್ಯಕ್ಷೆ ಸುಷ್ಮಾ, ಸದಸ್ಯರಾದ ರವಿಚಂದ್ರ, ದಿನೇಶ್, ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯಲಕ್ಷ್ಮಿ, ಶಿರಂಗಾಲ ಸರ್ಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಶೈಲಜಾ, ಹೆಬ್ಬಾಲೆ ಶಾಲೆಯ ಶಿಕ್ಷಕಿ ರಮ್ಯಾ, ಚಿಕ್ಕ ಅಳುವಾರ ಶಾಲೆಯ ಶಿಕ್ಷಕಿ ರೇಖಾ, ಶಿಕ್ಷಕರು ಪಾಲ್ಗೊಂಡಿದ್ದರು. ಶಿಕ್ಷಕ ಜಿ.ಶ್ರೀಹರ್ಷ ನಿರ್ವಹಿಸಿದರು. ಶಿಕ್ಷಕ ಟಿ.ಬಿ.ಮಂಜುನಾಥ್ ವಂದಿಸಿದರು.
ಗಮನಸೆಳೆದ ವಿಜ್ಞಾನ ಪ್ರದರ್ಶನ: ಶಿಕ್ಷಕಿ ಬಿ.ಪಿ.ಸವಿತಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ನಾನಾ ರೀತಿಯ ಮಾದರಿಗಳನ್ನು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.