
ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ಷಷ್ಟಿಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮದ ಭಗವತಿ ದೇವಾಲಯದಲ್ಲಿ ವಿಶೇಷ ನಾಗನ ಪೂಜೆಯನ್ನು ನೆರವೇರಿಸಲಾಯಿತು.
ಬಲ್ಲಮಾವಟಿ, ನೆಲಜಿ, ಪುಲಿಕೋಟು ಗ್ರಾಮದ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಮಹಾಪೂಜೆ ನೆರವೇರಿಸಲಾಯಿತು. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಲಯದ ಆಡಳಿತ ಮಂಡಳಿ ಸದಸ್ಯರು, ತಕ್ಕ ಮುಖ್ಯಸ್ಥರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಸಮೀಪದ ಪಾಲೂರು ಗ್ರಾಮದ ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಅರ್ಚಕ ದೇವಿ ಪ್ರಸಾದ್ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ವಿವಿಧ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಸಮೀಪದ ಹಳೆತಾಲೂಕಿನ ಶಿವಚಾಳಿಯಂಡ ಕುಟುಂಬದ ನಾಗನ ಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಟಿ ಪೂಜೆ ಕಾರ್ಯಕ್ರಮನ್ನು ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.