ಮಡಿಕೇರಿ: ಸಂತ್ರಸ್ತರ ವಿಷಯದಲ್ಲಿ ಉದಾರತೆ ತೋರಿಸಿ, ತ್ವರಿತವಾಗಿ ಪರಿಹಾರ ವಿತರಿಸಬೇಕು ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಪೊನ್ನಂಪೇಟೆಯ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯಸೌಧದ ಸಭಾಂಗಣದಲ್ಲಿ ಸೋಮವಾರ ನಡೆದ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಹೆಚ್ಚಿನ ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳ ಬಗ್ಗೆ ಉದಾರವಾಗಿ ವರದಿ ನೀಡಿ ಮನೆ ಪರಿಹಾರ ಹಣ ಬಿಡುಗಡೆಗೆ ಕ್ರಮ ವಹಿಸುವಂತೆ ಕಂದಾಯ, ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಂಪೂರ್ಣ ಮನೆ ಹಾನಿಯಾದ ಕುಟುಂಬಗಳಿಗೆ ಸರ್ಕಾರ ನೀಡುವುದು ₹ 1.20 ಲಕ್ಷ ಮಾತ್ರ. ಆದ್ದರಿಂದ ಮನೆ ಹಾನಿ ವರದಿ ನೀಡುವಾಗ ಅಧಿಕಾರಿಗಳು ಉದಾರತೆ ತೋರಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಈ ಬಾರಿ ಮೇ ತಿಂಗಳಲ್ಲಿ ದಾಖಲೆಯ ಮಳೆಯಾಗಿದೆ. ವ್ಯಾಪಕ ಮಳೆ ಹಾಗೂ ಬಿರುಗಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರ ವಹಿಸಬೇಕು. ರಸ್ತೆ ಬದಿ ಹಳೆ ಹಾಗೂ ಶಿಥಿಲವಾಗಿರುವ ಮರಗಳನ್ನು ತೆರವುಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ವಿದ್ಯುತ್ ಕಂಬಗಳ ಬಗ್ಗೆಯೂ ಎಚ್ಚರ ವಹಿಸಬೇಕು. ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು. ಪ್ರವಾಹ ಪೀಡಿತ ಹಾಗೂ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಕುಗ್ರಾಮಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆಯೂ ತಾಕೀತು ಮಾಡಿದರು.
‘ಈ ಬಾರಿ 28 ಹಳೇ ಮರಗಳನ್ನು ತೆರವುಗೊಳಿಸಲಾಗಿದೆ. ಹಳೇ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಆಕ್ಷೇಪ ಇಲ್ಲ’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ತಿಳಿಸಿದರು.
ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುರೇಶ್, ‘ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ತಲಾ 300ಕ್ಕೂ ಹೆಚ್ಚು ಕಂಬಗಳಿಗೆ ಹಾನಿಯಾಗಿದ್ದು, ಅವುಗಳನ್ನು ದುರಸ್ತಿ ಪಡಿಸಲಾಗಿದೆ. ಹಾತೂರು, ತೆರಾಲು, ಹೊಸ್ಕೇರಿ, ಬಿ.ಶೆಟ್ಟಿಗೇರಿಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸರಿಪಡಿಸಲಾಗುವುದು’ ಎಂದರು.
ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಎರಡು ಗ್ರಾಮ ಪಂಚಾಯಿತಿಗೆ ಒಬ್ಬ ಪಿಡಿಒ ಕಾರ್ಯನಿರ್ವಹಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಪೊನ್ನಣ್ಣ ಈ ಕುರಿತು ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ, ಸಮಗ್ರ ಗಿರಿಜನ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ತೇಜರಾಜ, ಸ್ವಚ್ಛ ಭಾರತ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಸೂರಜ್, ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಬಿಂದು, ಲೋಕೋಪಯೋಗಿ ಇಲಾಖೆಯ ಎಇಇ ಲಿಂಗರಾಜು, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಯತಿರಾಜು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಪ್ರಶಾಂತ್ ಭಾಗವಹಿಸಿದ್ದರು.
ಶಾಸಕರ ಸೂಚನೆಗಳು:
* ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಗಮನಹರಿಸಬೇಕು.
* ಅಂಗನವಾಡಿ ಮತ್ತು ಶಾಲಾ-ಕಾಲೇಜು ಕಟ್ಟಡಗಳು ಸುಸ್ಥಿತಿಯಲ್ಲಿವೆಯೇ ಎಂದು ಗಮನಹರಿಸಬೇಕು.
* ಪುರಸಭೆ ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಸ ವಿಲೇವಾರಿಗೆ ಜಾಗ ಕಾಯ್ದಿರಿಸಬೇಕು.
* ರಸ್ತೆ ಬದಿ ಕಸ ಎಸೆಯಬಾರದು. ರಸ್ತೆ ಬದಿ ಕಸ ಬಿಸಾಡುವವರಿಗೆ ದಂಡ ವಿಧಿಸಬೇಕು.
* ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರತಿ ಹಾಡಿಗೂ ಭೇಟಿ ನೀಡಿ ಆದಿವಾಸಿ ಜನರ ಕುಂದುಕೊರತೆ ಆಲಿಸಬೇಕು. ಗುಣಮಟ್ಟದ ಪೌಷ್ಟಿಕ ಆಹಾರ ವಿತರಿಸಬೇಕು.
* ಕಾಡಾನೆ ಹಾವಳಿ ತಡೆಯಬೇಕು. ಕಾಡಂಚಿನ ಪ್ರದೇಶಗಳಲ್ಲಿ ಯಾರೂ ಜೀವ ಭಯದಿಂದ ಬದುಕಬಾರದು. ನಾಗರಿಕರ ರಕ್ಷಣೆ ಆಗಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.