
ಮಡಿಕೇರಿ: ಶ್ರೀರಂಗಪಟ್ಟಣದಿಂದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿವರೆಗೆ ನಡೆಯುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿ ಇನ್ನು 2 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯಲ್ಲಿ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಮಾಹಿತಿ ನೀಡಿ, ‘ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಕುಶಾಲನಗರದಿಂದ ಸಂಪಾಜೆವರೆಗೆ ಹೆದ್ದಾರಿಯಲ್ಲಿ ಅಪಘಾತ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ‘ಕಾಮಗಾರಿ ನಡೆಯುತ್ತಿರುವುದರಿಂದ, ಬಸವನಹಳ್ಳಿಯಿಂದ ಸಂಪಾಜೆವರೆಗೆ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸುಗಮ ಸಾರಿಗೆ ಸಂಚಾರಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು.
‘ರಸ್ತೆ ಉಬ್ಬುಗಳ ನಿರ್ಮಾಣ, ಅಗತ್ಯವಿರುವ ಕಡೆಗಳಲ್ಲಿ ಜೀಬ್ರಾ ಕ್ರಾಸ್ ಬರೆಸುವುದು, ‘ಬ್ಲಾಕ್ ಸ್ಪಾಟ್’ ಗುರುತಿಸುವುದು, ತಿರುವುಗಳಲ್ಲಿ ಸೂಚನಾ ಫಲಕ ಅಳವಡಿಸುವುದು ಸೇರಿ ಅಗತ್ಯ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು’ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ‘ಕುಶಾಲನಗರದಿಂದ ಸಂಪಾಜೆವರೆಗೆ ರಸ್ತೆ ಸುರಕ್ಷತೆ ಸಂಬಂಧಿಸಿ ಹೆಚ್ಚಿನ ಗಮನಹರಿಸಬೇಕು. ಈ ಭಾಗದ ರಸ್ತೆಯಲ್ಲಿ ದೀಪ ಅಳವಡಿಸಬೇಕು, ರಸ್ತೆ ಬದಿ ಗಿಡಗಂಟಿಗಳನ್ನು ತೆರವುಗೊಳಿಸಬೇಕು, ಅಗತ್ಯವಿರುವೆಡೆ ಸೂಚನಾ ಫಲಕ ಅಳವಡಿಸಬೇಕು’ ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಮಾತನಾಡಿ, ‘ರಸ್ತೆ ಕಾಮಗಾರಿ ಯೋಜನೆ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವ ವೇಳೆ ಅರಣ್ಯ ಇಲಾಖೆ ಗಮನಕ್ಕೆ ತರಬೇಕು’ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಮಾತನಾಡಿ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯಿತಿಯ ಕಾರ್ಯಪಾಲಕ ಎಂಜಿನಿಯರ್ ನಾಯಕ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ, ಪೊಲೀಸ್ ಅಧಿಕಾರಿ ಮೇದಪ್ಪ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳು ಭಾಗವಹಿಸಿದ್ದರು.
ಮಡಿಕೇರಿಯಲ್ಲಿ ನಡೆಯಿತು ‘ಕೊಡಗು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ ರಸ್ತೆ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಲು ಸೂಚನೆ ಹಲವು ಅಧಿಕಾರಿಗಳ ಸಭೆಯಲ್ಲಿ ಭಾಗಿ
ಮಡಿಕೇರಿಯಿಂದ ಬೋಯಿಕೇರಿವರೆಗೆ ನಿಗಾ ವಹಿಸಿ; ಎಸ್.ಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ ‘ಮಡಿಕೇರಿಯಿಂದ ಬೋಯಿಕೇರಿವರೆಗೆ ಒಂದು ರೀತಿ ಒತ್ತಡದ ರಸ್ತೆಯಾಗಿದ್ದು ಈ ಭಾಗದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಮತ್ತಷ್ಟು ನಿಗಾವಹಿಸಬೇಕು’ ಎಂದು ಸೂಚಿಸಿದರು. ಹೆದ್ದಾರಿಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು. ಹಾಗೆಯೇ ಮೂರ್ನಾಡು ಗೋಣಿಕೊಪ್ಪಲುವಿನಲ್ಲಿ ವಾಹನ ನಿಲುಗಡೆಗೆ ಜಾಗ ಗುರುತಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.