
ಸೋಮವಾರಪೇಟೆ: ‘ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಅಭಿವೃದ್ಧಿಗಾಗಿ ₹20 ಕೋಟಿ ವೆಚ್ಚದಲ್ಲಿ ಯೋಜನೆ ತಯಾರಿಸಿ ಮುಂದಿನ ಆಯವ್ಯಯದಲ್ಲಿ ಮಂಡಿಸಲಾಗುವುದು’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಹೇಳಿದರು.
ಸೋಮವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ 2026-27ನೇ ಸಾಲಿನ ಆಯವ್ಯಯ ತಯಾರಿಸುವ ಬಗ್ಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂದಿನ ಸಾಲಿನ ಬಜೆಟ್‌ನಲ್ಲಿ ರಸ್ತೆ, ಕುಡಿಯುವ ನೀರು, ಚರಂಡಿ, ಪಾರ್ಕ್ ಸೇರಿದಂತೆ ವಿವಿಧ ಸೌಲಭ್ಯಗಳು ಹಾಗೂ ಅಭಿವೃದ್ಧಿಗಾಗಿ ವಿವಿಧ ಯೋಜನೆ ಗುರುತಿಸಲಾಗಿದೆ. ಸರ್ಕಾರ ಮತ್ತು ಕಂದಾಯ ಸೇರಿದಂತೆ ವಿವಿಧ ಮೂಲಗಳಿಂದ ಹಣ ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ತಿಳಿಸಿದರು.
‘ಜಿಲ್ಲೆಯಲ್ಲಿ ಮಳೆ ಹೆಚ್ಚು ಬೀಳುವ ಪ್ರದೇಶವಾಗಿದ್ದು, ಮುಂದಿನ ಸಾಲಿನ ಬಜೆಟ್‌ನಲ್ಲಿ ರಸ್ತೆ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚಿನ ನಿಧಿ ಮೀಸಲಿಡುವಂತೆ’ ಪಂಚಾಯಿತಿ ಮಾಜಿ ಅಧ್ಯಕ್ಷೆ ಲೀಲಾ ನಿರ್ವಾಣಿ ಸಲಹೆ ನೀಡಿದರು.
‘ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎರಡು ಪಾರ್ಕ್‌ಗಳು ನಿರ್ವಹಣೆಯಿಲ್ಲದೆ ಪಾಳು ಬಿದ್ದಿವೆ. ಸರಿಯಾಗಿ ನೀರು ಸಿಗುತ್ತಿಲ್ಲ. ಇವುಗಳ ನಿರ್ವಹಣೆಗೆ ಹೆಚ್ಚಿನ ಹಣ ಇಡುವಂತೆ’ ಮಾಜಿ ಸದಸ್ಯೆ ಶೀಲಾ ಡಿಸೋಜ ತಿಳಿಸಿದರು.
‘ಪಂಚಾಯಿತಿಯನ್ನು ಮೇಲ್ದರ್ಜೆಗೆ ಏರಿಸಿ ಪುರಸಭೆಯನ್ನಾಗಿ ಮಾಡಬೇಕು. ಅಲ್ಲದೆ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಕಟ್ಟಡಗಳು ಬೇನಾಮಿಯಾಗಿ ನಿರ್ಮಿಸುತ್ತಿದ್ದು, ಪಂಚಾಯಿತಿಗೆ ನಷ್ಟವಾಗುತ್ತಿದೆ. ಅದನು ತಡೆಯಬೇಕೆಂದು’ ಸೂಡ ಅಧ್ಯಕ್ಷ ಕೆ.ಎ.ಆದಮ್ ಮನವಿ ಮಾಡಿದರು.
‘ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆನೆಕೆರೆ ಮತ್ತು ಕಟ್ಟೆ ಬಸವೇಶ್ವರ ದೇವಾಲಯದ ಬಳಿಯ ಕೆರೆಗಳು ಸಾರ್ವಜನಿಕರಿಂದ ಒತ್ತುವಾರಿಯಾಗಿವೆ. ಸರ್ವೆ ಮಾಡಿಸಿ, ಅಭಿವೃದ್ಧಿಪಡಿಸಬೇಕೆಂದು’ ಮಹೇಶ್ ಮುಖ್ಯಾಧಿಕಾರಿಗೆ ತಿಳಿಸಿದರು.
‘ಈಗಾಗಲೇ ತಾಲ್ಲೂಕಿನ 20 ಕೆರೆಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ₹20 ಕೋಟಿ ಸರ್ಕಾರದಿಂದ ಕೇಳಲಾಗಿದೆ. ಆನೆಕೆರೆ ಸರ್ವೆ ಮಾಡಿಸಿ, ಅಭಿವೃದ್ಧಿ ಪಡಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಹಾಗೆಯೇ ಕಟ್ಟೆ ಬಸವೇಶ್ವರ ದೇವಾಲಯ ಬಳಿಯ ಕೆರೆಯ ಒತ್ತುವರಿ ತೆರವುಗಳಿಸಿ ಅಭಿವೃದ್ಧಿಗೆ ಸೂಕ್ರ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಾಧಿಕಾರಿ ಉತ್ತರಿಸಿದರು.
‘ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಂಬೇಡ್ಕರ್ ಭವನ ಯಾವುದೇ ನಿರ್ವಹಣೆಯಿಲ್ಲದೆ, ಪಾಳುಬಿದ್ದಂತಾಗಿದೆ. ಅದನ್ನು ಯಾರು ನಿರ್ವಹಣೆ ಮಾಡುತ್ತಿದ್ದಾರೆ ಎಂದು ತಿಳಿದಿಲ್ಲ. ಸಭೆ ಸಮಾರಂಭಗಳಿಗೆ ಭವನ ನೀಡಿದರೂ, ಅದರಿಂದ ಬರುವ ಲಾಭದ ವಿಷಯ ಯಾರಿಗೂ ತಿಳಿಯುತ್ತಿಲ್ಲ. ಆದ್ದರಿಂದ ಕೂಡಲೇ ಅಂಬೇಡ್ಕರ್ ಭವನದ ಸಮಿತಿ ಮಾಡಿ ಸರಿಯಾಗಿ ನಿರ್ವಹಣೆ ಮಾಡಬೇಕು’ ಎಂದು ಮೀನಕುಮಾರಿ ಮತ್ತು ಎಸ್.ಆರ್.ವಸಂತ್ ತಿಳಿಸಿದರು.
‘ಮುಂದಿನ ದಿನಗಳಲ್ಲಿ ಸಮಿತಿ ರಚಿಸುವುದರೊಂದಿಗೆ ಅದರ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಾಧಿಕಾರಿ ಪ್ರತಿಕ್ರಿಯಿಸಿದರು.
ಸಭೆಯಲ್ಲಿ ಪಂಚಾಯಿತಿ ಲೆಕ್ಕಾಧಿಕಾರಿ ಭಾವನ, ಆರೋಗ್ಯ ನಿರೀಕ್ಷಕ ಜಾಸಿನ್ ಖಾನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.