ಮಡಿಕೇರಿ: ಇಲ್ಲಿಗೆ ಸಮೀಪದ ಕಾಟಕೇರಿಯಲ್ಲಿರುವ ಹರ್‌ಮಂದಿರ್ ಶಾಲೆಯಲ್ಲಿ ಉಂಟಾದ ಅಗ್ನಿ ಅವಘಡದಲ್ಲಿ ಮೃತಪಟ್ಟ ಬಾಲಕ ಪುಷ್ಪಕ್ ಅವರ ಪೋಷಕರಿಗೆ ₹ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಇನ್ನಷ್ಟು ಪರಿಹಾರ ನೀಡಲು ಮನವಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ತಿಳಿಸಿದರು.
ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸೇರಿದ ಬೋಧನಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇಬ್ಬರು ವಿದ್ಯಾರ್ಥಿಗಳು ಹಾಗೂ ವಾರ್ಡನ್ ಒಬ್ಬರ ಯೋಗಕ್ಷೇಮ ವಿಚಾರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಎಂಬುದು ಕಂಡು ಬಂದಿದೆ. ಆದರೆ, ತನಿಖೆಯಲ್ಲಿ ಲೋಪಗಳು ಅಥವಾ ನಿರ್ಲಕ್ಷ್ಯ ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ಹರ್ ಮಂದಿರ್ ವಸತಿ ಶಾಲೆಗೆ ಒಳ್ಳೆಯ ಹೆಸರಿದ್ದು, ವಿದ್ಯುತ್ ಅವಘಡ ಬಗ್ಗೆ ಸೂಕ್ತ ತನಿಖೆ ಮಾಡಿಸಲಾಗುವುದು. ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ವಸತಿ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳು ಓದುತ್ತಿದ್ದು, ಹೊರ ಜಿಲ್ಲೆಯಿಂದಲೂ ವಿದ್ಯಾರ್ಥಿಗಳು ವಸತಿ ಶಾಲೆಯಲ್ಲಿ ಕಲಿಯುತ್ತಿರುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಮುಖಂಡರಾದ ಮುನೀರ್ ಅಹಮ್ಮದ್, ತೆನ್ನಿರ ಮೈನಾ, ಸೂರಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ತಹಶಿಲ್ದಾರ್ ಶ್ರೀಧರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.