ADVERTISEMENT

ಮಡಿಕೇರಿ: ನೆರೆ ಸಂತ್ರಸ್ತರ ಅಹವಾಲು ಆಲಿಸಿದ ಸಚಿವ ಎನ್.ಎಸ್.ಭೋಸರಾಜು

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 14:11 IST
Last Updated 20 ಜುಲೈ 2024, 14:11 IST
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಶನಿವಾರ ಸಿದ್ದಾಪುರದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಶನಿವಾರ ಸಿದ್ದಾಪುರದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು   

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಶನಿವಾರ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರಡಿಗೋಡಿನಲ್ಲಿ ನೀರಿನಲ್ಲಿ ನಿಂತು ನೆರೆ ಸಂತ್ರಸ್ಥರ ಅಹವಾಲು ಆಲಿಸಿದರು. ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಆಶ್ರಯಪಡೆದಿದ್ದವರ ಯೋಗಕ್ಷೇಮ ವಿಚಾರಿಸಿದರು.

ಇಡಿ ದಿನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಿದ ಅವರು ಪರಿಹಾರ ಕಾರ್ಯಾಚರಣೆ ಚುರುಕುಗೊಳ್ಳಬೇಕು, ಇನ್ನಷ್ಟು ಕಟ್ಟೆಚ್ಚರ ವಹಿಸಬೇಕು ಎಂಬ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ಮೊದಲಿಗೆ ಅವರು, ಸಿದ್ದಾಪುರದಲ್ಲಿ ಆರಂಭಿಸಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.
ಊಟೋಪಾಚಾರ, ಆರೋಗ್ಯ ಸೇವೆ ಇತರ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆಯೇ ಎಂದು ಮಾಹಿತಿ ಪಡೆದರು.
ಪ್ರವಾಹ ಪೀಡಿತ ಪ್ರದೇಶದಿಂದ ಸ್ಥಳಾಂತರವಾಗುತ್ತೀರ ಎಂದೂ ಅವರನ್ನು ಪ್ರಶ್ನಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಸಂತ್ರಸ್ತರು, ‘ಪ್ರತೀ ವರ್ಷ ಮಳೆಗಾಲ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜೀವನ ನಡೆಸುವುದು ದುಸ್ತರವಾಗಿದೆ. ಬದುಕು ಕಟ್ಟಿಕೊಳ್ಳಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ನಿವೇಶನ ಒದಗಿಸಿ ಸ್ಥಳಾಂತರಿಸಿ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆರೋಗ್ಯ ಸೇವೆ ಇತರೆ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಬಳಿಕ ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಅಲ್ಲಿನ ಸಂತ್ರಸ್ತರ ಅಹವಾಲು ಆಲಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಭೋಸರಾಜು, ‘ಸಂತ್ರಸ್ತರಿಗೆ ನಿವೇಶನ ಒದಗಿಸುವ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ‘ಸಂತ್ರಸ್ತರಿಗೆ ವಸತಿ ಸೇರಿದಂತೆ ಎಲ್ಲಾ ರೀತಿಯ ನೆರವು ನೀಡಲಾಗುವುದು’ ಎಂದು ಹೇಳಿದರು.

ಈ ವೇಳೆ ಸ್ಥಳೀಯರು ಕರಡಿಗೋಡು ನದಿ ದಡದಲ್ಲಿ ಸುಮಾರು 70ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.

ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ನಂತರ, ಅವರು ಮಡಿಕೇರಿ– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ತೋಜಿ ಎಂಬಲ್ಲಿ ಕುಸಿಯುತ್ತಿರುವ ಗುಡ್ಡವನ್ನು ಹಾಗೂ ಮಣ್ಣು, ಕಲ್ಲುಗಳು ಕುಸಿದಿದ್ದ ಕೊಯನಾಡಿನ ಶಾಲೆಯನ್ನು ವೀಕ್ಷಿಸಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಕೆಪಿಸಿಸಿ ಕಾರ್ಯದರ್ಶಿ ಎಂ.ಲಕ್ಷ್ಮಣ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಆಯುಷ್ಟಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಭಾಗವಹಿಸಿದ್ದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಮಣ್ಣು ಕಲ್ಲುಗಳು ಕುಸಿದು ಹಾನಿಗೀಡಾಗಿದ್ದ ಕೊಯನಾಡಿನ ಶಾಲೆಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಶನಿವಾರ ಮಡಿಕೇರಿ– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ತೋಜಿ ಎಂಬಲ್ಲಿ ಕುಸಿಯುತ್ತಿರುವ ಗುಡ್ಡವನ್ನು ಪರಿಶೀಲಿಸಿದರು

Highlights - ಇಡೀ ದಿನ ಸಂಚರಿಸಿದ ಸಚಿವ ವಿರಾಜಪೇಟೆ ಕ್ಷೇತ್ರದ ಹಾನಿ ಕುರಿತು ಪರಿಶೀಲನೆ ಮಡಿಕೇರಿ ಕ್ಷೇತ್ರದ ಹಾನಿ ಪರಿಶೀಲನೆ ಇಂದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.