ಕುಶಾಲನಗರ: ‘ಶಿಕ್ಷಕ ವರ್ಗ ಜ್ಞಾನದಾಸೋಹದಂತಹ ಅತ್ಯಂತ ಶ್ರೇಷ್ಠ ಹುದ್ದೆಯನ್ನು ನಿರ್ವಹಿಸುತ್ತಿದ್ದು, ಸಮಾಜದಲ್ಲಿ ಅಜ್ಞಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅವರ ಸೇವೆ ಶ್ಲಾಘನೀಯ’ ಎಂದು ಕೊಡಗು ವಿವಿ ಕುಲಪತಿ ಡಾ.ಅಶೋಕ ಸಂಗಪ್ಪ ಆಲೂರ ಹೇಳಿದರು.
ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮದ ಸವಿನೆನಪಿಗಾಗಿ ಕಣಿವೆ ರಾಮಲಿಂಗೇಶ್ವರ ದೇವಾಲಯ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಶಿಕ್ಷಕ ಸಿರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ‘ಪೋಷಕರ ಋಣ, ದೈವ ಋಣ, ಗುರು ಋಣ ಸಂದಾಯಕ್ಕೆ ಎಲ್ಲರೂ ಬದ್ದರಾಗಬೇಕಿದೆ. ಈ ಹಿನ್ನಲೆಯಲ್ಲಿ ಶಿಕ್ಷಕರನ್ನು ಗುರುತಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ 50 ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಸಾಹಿತಿ ಕಣಿವೆ ಭಾರದ್ವಾಜ್ ಆನಂದತೀರ್ಥ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಚೇತನ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ಪದವಿಪೂರ್ವ ಉಪನ್ಯಾಸಕರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಫಿಲಿಪ್ ವಾಸ್, ಪ್ರಗತಿಪರ ರೈತ ಅಜಿರಂಗಳ ರಾಮಣ್ಣ, ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್, ಬಳಗದ ಮುಖಂಡರಾದ ಎಂ.ಡಿ. ರಂಗಸ್ವಾಮಿ, ಕೆ.ಕೆ. ನಾಗರಾಜಶೆಟ್ಟಿ, ಟಿ.ಕೆ. ಪಾಂಡುರಂಗ, ನಿವೃತ್ತ ಶಿಕ್ಷಕ ಉ.ರಾ ನಾಗೇಶ್, ಉಪನ್ಯಾಸಕ ನಾಗರಾಜು, ಶಿಕ್ಷಕ ಶಾಂತಕುಮಾರ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.