ADVERTISEMENT

ವಿರಾಜಪೇಟೆ| ಮತದಾನ ಸಂವಿಧಾನದ ಆತ್ಮವಿದ್ದಂತೆ: ನ್ಯಾಯಾಧೀಶ ನಟರಾಜ್ ಎಸ್.

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 8:13 IST
Last Updated 26 ಜನವರಿ 2026, 8:13 IST
ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿರಾಜಪೇಟೆಯ ತಾಲ್ಲೂಕು ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ನಟರಾಜ್ ಎಸ್. ಅವರು ಮಾತನಾಡಿದರು.
ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿರಾಜಪೇಟೆಯ ತಾಲ್ಲೂಕು ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ನಟರಾಜ್ ಎಸ್. ಅವರು ಮಾತನಾಡಿದರು.   

ವಿರಾಜಪೇಟೆ: ಮತದಾನವು ಸಂವಿಧಾನದ ಆತ್ಮವಿದ್ದಂತೆ ಎಂದು ವಿರಾಜಪೇಟೆಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ನಟರಾಜ್ ಎಸ್. ಅವರು ಅಭಿಪ್ರಾಯಪಟ್ಟರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಭಾನುವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಮತದಾರರ ಜಾಗೃತಿ ಮೂಡಿಸುವುದು ರಾಷ್ಟ್ರೀಯ ಮತದಾರರ ದಿನಾಚರಣೆಯ ಮುಖ್ಯ ಧ್ಯೇಯವಾಗಿದ್ದು,  ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಅತೀ ಮುಖ್ಯವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವಂತೆ ಪ್ರಜಾಪ್ರಭುತ್ವವು ಯಶಸ್ವಿಯಾಗಬೇಕಾದರೆ ಮತದಾರರು ಜಾಗೃತರಾಗಬೇಕು. ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು’ ಎಂದರು.

ADVERTISEMENT

ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರು ಮತದಾರರ ದಿನಾಚರಣೆಯ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಹೊಸ ಮತದಾರರಿಗೆ ಈ ಸಂದರ್ಭ ಮತದಾರರ ಗುರುತಿನ ಚೀಟಿಯನ್ನು ವಿತರಿಸಲಾಯಿತು. ನಗರಾಭಿವೃದ್ಧಿ ಯೋಜನಾಧಿಕಾರಿ ಬಸಪ್ಪ ಅವರು ದಿನದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ನಾಚಪ್ಪ ಅವರು ಉಪಸ್ಥಿತರಿದ್ದರು.

ಕಂದಾಯ ಇಲಾಖೆಯ ಅಧಿಕಾರಿಗಳು, ವಿರಾಜಪೇಟೆ ತಾಲ್ಲೂಕು ಕಚೇರಿಯ ಸಿಬ್ಬಂದಿ, ಪುರಸಭಾ ಸಿಬ್ಬಂದಿ, ಪೊಲೀಸ್ ಇಲಾಖೆಯ ಸಿಬ್ಬಂದಿ, ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಹಾಜರಿದ್ದರು.

ವಿರಾಜಪೇಟೆಯ ತಾಲ್ಲೂಕು ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.