ಸಿದ್ದಾಪುರ: ಆಹಾರ ಅರಸಿ ಬಂದಿದ್ದ ಮಖನ ಕಾಡಾನೆಯೊಂದು ಕಾಫಿ ತೋಟದಲ್ಲಿ ಸಾವನ್ನಪ್ಪಿರುವ ಘಟನೆ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಡೆದಿದೆ.
ಹುಂಡಿಯ ನಿವಾಸಿ ನಂದ ಅಪ್ಪಯ್ಯ ಎಂಬವರ ಕಾಫಿ ತೋಟದ ಕಾರ್ಮಿಕರು ಎಂದಿನಂತೆ ಕೆಲಸಕ್ಕೆ ತೆರಳಿದ್ದ ಸಂದರ್ಭ ಕಾಡಾನೆ ಸಾವನ್ನಪ್ಪಿರುವುದು ತಿಳಿದುಬಂದಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವನ್ಯಜೀವಿ ವೈದ್ಯಾಧಿಕಾರಿ ಡಾ.ಚಿಟ್ಟಿಯಪ್ಪ ಆಗಮಿಸಿ ಪರಿಶೀಲಿಸಿದ್ದು, ಆನೆಯ ಎರಡು ಕಣ್ಣು ದೃಷ್ಟಿ ಕಳೆದುಕೊಂಡಿದ್ದು, ಸಮರ್ಪಕವಾಗಿ ಆಹಾರ ಸೇವಿಸದೇ ಸಾವನ್ನಪ್ಪಿದೆ ಎಂದು ಮಾಹಿತಿ ನೀಡಿದ್ದಾರೆ.
ಕಾಡಾನೆಗಳ ಕಾದಾಟದಲ್ಲಿ ಮಖನ ಆನೆ ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕಾಡಾನೆಯ ಕಳೇಬರವನ್ನು ಮಾಲ್ದಾರೆಯ ಅರಣ್ಯ ಪ್ರದೇಶಕ್ಕೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಅರಣ್ಯ ವ್ಯಾಪ್ತಿಯಲ್ಲಿ ಹೂಳಲಾಯಿತು. ಸ್ಥಳಕ್ಕೆ ವಿರಾಜಪೇಟೆ ಡಿಸಿಎಫ್ ಜಗನ್ನಾಥ್, ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಡಗ ಬಾಣಂಗಾಲ ಗ್ರಾಮದಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಕಾಡಾನೆಗಳನ್ನು ಕಾಡಿಗೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.