ಮಡಿಕೇರಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಹಾಗೂ ಮೊದಲ ಕಾರ್ಯಕ್ರಮವಾದ ‘ಶಕ್ತಿ’ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದರೆ, ಕೊಡಗು ಜಿಲ್ಲೆಯಲ್ಲಿ 1.21 ಕೋಟಿಗೂ ಹೆಚ್ಚು ಬಾರಿ ಮಹಿಳೆಯರು ಪ್ರಯಾಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲೆಯಲ್ಲೂ ಸೋಮವಾರ ಸಂಭ್ರಮಾಚರಣೆ ನಡೆಸಿತು.
ಇಲ್ಲಿನ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಲಂಕೃತಗೊಂಡಿದ್ದ ಬಸ್‍ಗೆ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಮಂದ್ರಿರ ಮೋಹನ್ ದಾಸ್ ಪೂಜೆ ಸಲ್ಲಿಸಿ, ಮಹಿಳಾ ಪ್ರಯಾಣಿಕರಿಗೆ ಹಾಗೂ ನೆರೆದಿದ್ದವರಿಗೆ ಸಿಹಿ ವಿತರಿಸಿ ಸಂತಸ ಹಂಚಿಕೊಂಡರು.
ಶಕ್ತಿ ಯೋಜನೆಗೆ ಸಂಬಂಧಿಸಿದ ಸಾಧನೆ ಬಿಂಬಿಸುವ ಭಿತ್ತಿಚಿತ್ರಗಳನ್ನು ಬಸ್ ನಿಲ್ದಾಣದ ಆವರಣದಲ್ಲಿ ಅಳವಡಿಸಲಾಗಿತ್ತು. ಹಲವು ಮಹಿಳೆಯರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದು ಕಂಡುಬಂತು.
‘ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಕೆಎಸ್‍ಆರ್‌ಟಿಸಿ ಬಸ್‍ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿದ್ದು, ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿದೆ’ ಎಂದು ಮಂದ್ರಿರ ಮೋಹನ್ ದಾಸ್ ಹೇಳಿದರು.
ನಾಡಿನ ಮಹಿಳೆಯರ ಸ್ವಾವಲಂಬನೆ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆಯು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಇದು ಗ್ಯಾರಂಟಿ ಯೋಜನೆ ಯಶಸ್ಸಿಗೆ ಹಿಡಿದ ಕೈಗನ್ನಡಿ ಎಂದರು.
ಶಕ್ತಿ ಯೋಜನೆ ಜಾರಿಯಾದ ನಂತರ ಈವರೆಗೆ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‍ನಲ್ಲಿ ಪ್ರಯಾಣ ಮಾಡಿದ್ದು, ಇದರ ಟಿಕೆಟ್ ಮೌಲ್ಯ ಒಟ್ಟು ₹ 12 ಸಾವಿರ ಕೋಟಿಗೂ ಮೀರಿದೆ ಎಂದು ತಿಳಿಸಿದರು.
ಕೆಎಸ್‍ಆರ್‌ಟಿಸಿ ವಾಹನ ಚಾಲಕರು ಮತ್ತು ನಿರ್ವಾಹಕರನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್, ಕೆಎಸ್‍ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕ ಮೆಹಬೂಬ್ ಅಲಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರಾ ಮೈನಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಸದಸ್ಯರಾದ ಪ್ರಭು ರೈ, ರಾಜೇಶ್ವರಿ, ಫ್ಯಾನ್ಸಿ ಪಾರ್ವತಿ, ಶೀರಾಜ್, ರಘು, ಇಬ್ರಾಹಿಂ, ದಯಾನಂದ, ರಂಗಪ್ಪ, ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಮುಖಂಡರಾದ ಕಾನೆಹಿತ್ಲು ಮೊಣ್ಣಪ್ಪ, ಉದಯಕುಮಾರ್, ಪ್ರಕಾಶ್ ಆಚಾರ್ಯ ಭಾಗವಹಿಸಿದ್ದರು.
ಬಸ್‌ನಲ್ಲಿ 500 ಕೋಟಿಗೂ ಹೆಚ್ಚು ಬಾರಿ ಪ್ರಯಾಣಿಸಿದ ಮಹಿಳೆಯರು ಒಟ್ಟು ಟಿಕೆಟ್ ಮೌಲ್ಯ ₹ 12 ಸಾವಿರ ಕೋಟಿಗೂ ಅಧಿಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.