ADVERTISEMENT

ಕೊಡಗು: ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಅಧಿಕ

ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 11:23 IST
Last Updated 10 ನವೆಂಬರ್ 2022, 11:23 IST
ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕರಡು ಮತದಾರರ ಪಟ್ಟಿಯನ್ನು ಬುಧವಾರ ಮಡಿಕೇರಿಯ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಬಿಜೆಪಿ ಮುಖಂಡ ಅಪ್ಪಣ್ಣ, ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ಇದ್ದಾರೆ
ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕರಡು ಮತದಾರರ ಪಟ್ಟಿಯನ್ನು ಬುಧವಾರ ಮಡಿಕೇರಿಯ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಬಿಜೆಪಿ ಮುಖಂಡ ಅಪ್ಪಣ್ಣ, ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ಇದ್ದಾರೆ   

ಮಡಿಕೇರಿ: ಜಿಲ್ಲೆಯಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಿದೆ. ಒಟ್ಟು ಮತದಾರರ ಸಂಖ್ಯೆಯಲ್ಲಿ 4,322 ಮಹಿಳಾ ಮತದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಿದ್ದರೆ, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 3,500 ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ 822 ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬುಧವಾರ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಲ್ಲಿ ಈ ಅಂಶ ಕಂಡು ಬಂತು.

ನಂತರ ಮಾತನಾಡಿದ ಅವರು, ‘ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಯನ್ನು ಚುನಾವಣಾ ಆಯೋಗದ ನಿರ್ದೇಶನ ದಂತೆ ಕೈಗೊಳ್ಳಲಾಗಿದೆ. ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.ಡಿ. 8ರವರೆಗೆ ಆಕ್ಷೇಪಣೆ ಸಲ್ಲಿಸಬಹುದು’ ಎಂದು ಹೇಳಿದರು.

ADVERTISEMENT

ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ 1 ರಂದು 18 ವರ್ಷ ಪೂರ್ಣಗೊಳ್ಳುವ ಯುವ ಜನರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ಇದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತಪಟ್ಟಿದ್ದಲ್ಲಿ, ಸ್ಥಳಾಂತರಗೊಂಡಿದ್ದಲ್ಲಿ ಅಥವಾ ಪುನರಾವರ್ತನೆ ಆಗಿದ್ದಲ್ಲಿ ನಮೂನೆ 7 ರಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಪಕ್ಷಗಳ ಪ್ರಮುಖರು ತಮ್ಮ ತಮ್ಮ ವಾರ್ಡ್ ಮತ್ತು ಗ್ರಾಮಗಳಲ್ಲಿ ಈ ಬಗ್ಗೆ ಗಮನಹರಿಸಬೇಕು ಮನವಿ ಮಾಡಿದರು.

ಮತದಾರರ ನಿವಾಸ ಬದಲಾವಣೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿ ನಮೂದುಗಳ ತಿದ್ದುಪಡಿಗಾಗಿ, ಬದಲಿ ಮತದಾರರ ಗುರುತಿನ ಚೀಟಿ ನೀಡುವುದು ಮತ್ತು ಅಂಗವಿಕಲರ ಗುರುತಿಸುವುದಕ್ಕೆ ನಮೂನೆ 8 ರಲ್ಲಿ ಅರ್ಜಿ ಸಲ್ಲಿಸಬಹುದು. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ 6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದರು.

ನ. 9ರಿಂದ ಡಿ. 8ರವರೆಗೆ ಆಯಾಯ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ತಾಲ್ಲೂಕು ಕಚೇರಿಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೇ, ಮತದಾರರೇ https://www.nvsp.in ಮತ್ತು https://voterportal.eci.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಮತ್ತು ‘ವಿಎಚ್‍ಎ’ ಮೊಬೈಲ್ ಆ್ಯಪ್ ಮೂಲಕ ನಮೂನೆ 6ಎ, ನಮೂನೆ 7 ಮತ್ತು ನಮೂನೆ 8 ನ್ನು ಸಲ್ಲಿಸಬಹುದು ಎಂದು ಹೇಳಿದರು.

ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಾರ್ಯದಲ್ಲಿ ಕೊಡಗು ಜಿಲ್ಲೆಯಲ್ಲಿ ಶೇ 75.43 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅವರು ತಿಳಿಸಿದರು.

ಅಭಿಯಾನ ಸಂದರ್ಭದಲ್ಲಿ ಮನೆ ಮನೆಗೆ ಮತಗಟ್ಟೆ ಅಧಿಕಾರಿಗಳು ಭೇಟಿ ನೀಡಿದಾಗ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಸ್ಥಳಾಂತರ, ತೆಗೆಯುವುದು ಮತ್ತಿತರ ಕಾರ್ಯಕ್ಕೆ ಸಹಕರಿಸುವಂತೆ ಅವರು ಕೋರಿದರು.

ಬಳಿಕ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ಹಾಗೂ ಬಿಜೆಪಿಯ ಅಪ್ಪಣ್ಣ ಭಾಗವಹಿಸಿದ್ದರು.

4 ಮತಗಟ್ಟೆ; ನೋಂದಣಿಯೇ ಇಲ್ಲ!

‘ಕೊಡಗು ಜಿಲ್ಲೆಯ 4 ಮತಗಟ್ಟೆಯಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಹೊಸದಾಗಿ ಒಬ್ಬರೂ ನೋಂದಣಿಯಾಗಿಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.

ವಿಶೇಷ ಅಭಿಯಾನ: ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸಂಬಂಧ ನ. 12, 20, ಡಿ. 3 ಮತ್ತು 4 ರಂದು ಜಿಲ್ಲೆಯ 542 ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟವರೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಕೋರಿದರು’

ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಕುರಿತು ಖಾತರಿಪಡಿಸಿಕೊಳ್ಳಬೇಕು. ನೋಂದಣಿಯಾಗದೆ ಇದ್ದಲ್ಲಿ ನಮೂನೆ 6ರಲ್ಲಿ ಅರ್ಜಿಯನ್ನು ಸ್ಥಳದಲ್ಲಿಯೇ ನೀಡಬಹುದು. ಅಂತಿಮ ಮತದಾರರ ಪಟ್ಟಿಯನ್ನು ಜ. 5ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ; ಜಾಗೃತಿ ಜಾಥಾ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಸ್ಥಳಾಂತರ, ಹೆಸರು ತೆಗೆಯುವುದು ಮತ್ತಿತರ ಸಂಬಂಧ ಇದೇ ನವೆಂಬರ್, 12, 20, ಡಿ.3 ಮತ್ತು 4 ರಂದು ಜಿಲ್ಲೆಯಲ್ಲಿನ 542 ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಅಭಿಯಾನ ನಡೆಯುವ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಡಳಿತದ ವತಿಯಿಂದ ಕಾಲ್ನಡಿಗೆ ಜಾಥವು ಬುಧವಾರ ನಡೆಯಿತು.

ನಗರದ ಗಾಂಧಿ ಮಂಟಪದಿಂದ ಮಂಗೇರಿರ ಮುತ್ತಣ್ಣ ವೃತ್ತ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮಾರ್ಗದಲ್ಲಿ ಜಾಥಾ ನಡೆಯಿತು.

ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರ ನೇತೃತ್ವದಲ್ಲಿ ನಡೆದ ಜಾಥಾದಲ್ಲಿ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಆನ್‌ಲೈನ್‌ನಲ್ಲಿ ನೋಂದಣಿ ಸಾಧ್ಯ

https://www.nvsp.in

https://voterportal.eci.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.