ADVERTISEMENT

ಅನುದಾನಕ್ಕೆ ಶಿಕ್ಷಣ ಸಂಸ್ಥೆಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2012, 5:50 IST
Last Updated 23 ಫೆಬ್ರುವರಿ 2012, 5:50 IST

ಕೆಜಿಎಫ್:  ಪ್ರಾಥಮಿಕ ಶಿಕ್ಷಣಕ್ಕೆ ಸರ್ಕಾರ ವಿನಿಯೋಗಿಸುವ  ಕೋಟ್ಯಂತರ ರೂಪಾಯಿ ಹಣವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ವಿಸ್ತರಿಸಬೇಕು ಎಂದು ಕೋಲಾರ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಅಧ್ಯಕ್ಷ ಮುನಿಯಪ್ಪ ಒತ್ತಾಯಿಸಿದರು.

ರಾಬರ್ಟ್‌ಸನ್‌ಪೇಟೆ ವಾಣಿ  ವಿದ್ಯಾ ಸಂಸ್ಥೆಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗಿಂತ ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಸರ್ಕಾರದ ತಾರತಮ್ಯ ನೀತಿಯಿಂದಾಗಿ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳಿಂದ ವಂಚಿತರಾಗಿದ್ದಾರೆ ಎಂದರು.

ಖಾಸಗಿ ಶಾಲೆಗಳು ನೀಡುತ್ತಿರುವ ಉತ್ತಮ ಶಿಕ್ಷಣದಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯ ಪ್ರವತ್ತರಾಗದ ಅಧಿಕಾರಿಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಗೊಂದಲವನ್ನು ಉಂಟು ಮಾಡುತ್ತಿದ್ದಾರೆ ಎಂದು ಮುನಿಯಪ್ಪ ಆರೋಪಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಗೋಪಾಲರೆಡ್ಡಿ ಮಾತನಾಡಿ, ಮಹಾರಾಷ್ಟ್ರ ಮಾದರಿಯ ವೇತನ ಶ್ರೇಣಿ ವ್ಯವಸ್ಥೆಯನ್ನು ರಾಜ್ಯದಲ್ಲೂ ತರಬೇಕು. ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸರ್ಕಾರದಿಂದ ವಿವಿಧ ಯೋಜನೆಗಳನ್ನು ಪ್ರಕಟಿಸಬೇಕು ಎಂದರು.

ಶಿಕ್ಷಣ ತಜ್ಞ ಅರ್ಜುನನ್, ಮುಖ್ಯಶಿಕ್ಷಕಿ ರಾಜಶ್ರಿ ಭಾಗವಹಿಸಿದ್ದರು. ಕೃಷ್ಣಮೂರ್ತಿ ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರಭಾಕರ್ ಸ್ವಾಗತಿಸಿದರು. ಎಡ್ವಿನ್ ವಂದಿಸಿದರು. ಗೋಪಿನಾಥ್ ನಿರೂಪಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.