ADVERTISEMENT

ಅಭಿವೃದ್ಧಿ ಕಾಮಗಾರಿಗೆ ₹ 125 ಕೋಟಿ

ಕಟ್ಟಡ ನಿರ್ಮಾಣ ಕಾಮಗಾರಿಗೆ ವಿಶೇಷ ಅನುದಾನ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 13:02 IST
Last Updated 29 ಮಾರ್ಚ್ 2018, 13:02 IST

ಶ್ರೀನಿವಾಸಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ₹ 125 ಕೋಟಿ ಪ್ರಗತಿ ನಿಧಿ ನೀಡಲಾಗಿದೆ ಎಂದು ಯೋಜನೆಯ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್‌ ಹೇಳಿದರು.

ತಾಲ್ಲೂಕಿನ ಹೂಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 75 ಸಾವಿರ ಪ್ರಗತಿ ನಿಧಿ ಚೆಕ್‌ ವಿತರಿಸಿ ಮಾತನಾಡಿದ ಅವರು, ‘ನಾಲ್ಕು ವರ್ಷಗಳಿಂದ ಕೋಲಾರ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ವಿಶೇಷ ಅನುದಾನ ನೀಡಿದ್ದಾರೆ. ಈ ಉದ್ದೇಶಕ್ಕಾಗಿ ತಾಲ್ಲೂಕಿನಲ್ಲಿ ಈವರೆಗೆ ₹ 15 ಲಕ್ಷ ಆರ್ಥಿಕ ನೆರವು ನೀಡಲಾಗಿದೆ. ಸ್ವ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸ್ವಚ್ಛತೆ ಯೋಜನೆಯಡಿ ಶೌಚಾಲಯ ನಿರ್ಮಿಸಲು 805 ಕುಟುಂಬಗಳಿಗೆ ತಲಾ ₹ 500 ರಂತೆ ₹ 4.25 ಲಕ್ಷ ನೀಡಲಾಗಿದೆ ಎಂದು ಹೇಳಿದರು.

ADVERTISEMENT

ತಾಲ್ಲೂಕಿನಲ್ಲಿ 26 ದೇವಾಲಯಗಳ ಜೀರ್ಣೋದ್ಧಾರಕ್ಕೆ ₹ 30 ಲಕ್ಷ ಅನುದಾನ ನೀಡಲಾಗಿದೆ. ಹೀಗೆ ಹಲವು ಅಭಿವೃದ್ಧಿ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಲಾಗಿದ್ದು, ಫಲಾನುಭವಿಗಳು ನೆರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಹೂಹಳ್ಳಿ ಸುರೇಶ್‌ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಮಾಜ ಸೇವೆ ಮಾದರಿಯಾಗಿದೆ. ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಬಡವರ ಸೇವೆಗೆ ಆರ್ಥಿಕ ನೆರವು ನೀಡುತ್ತಿದ್ದಾರೆ. ಮಾನವ ಸೇವೆಯೇ ಮಾಧವ ಸೇವೆ ಎಂದು ಅರಿತಿರುವ ಅವರು ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಜಿಲ್ಲೆಯ ಜನರು ಕೃತಜ್ಞರಾಗಿದ್ದಾರೆ ಎಂದು ಹೇಳಿದರು.

ತಾಲ್ಲೂಕು ಯೋಜನಾಧಿಕಾರಿ ಸುರೇಶ್ ಶೆಟ್ಟಿ, ವಲಯ ಮೇಲ್ವಿಚಾರಕರಾದ ನಾಗರಾಜ್‌ ಭಂಡಾರಿ, ಸೇವಾ ಪ್ರತಿನಿಧಿಗಳಾದ ದೀಪಾರಾಣಿ, ಮಂಜುಳಾ, ಮುಖಂಡರಾದ ವೆಂಕಟೇಶಗೌಡ, ಸೊಣ್ಣಪ್ಪ, ನಾಗರಾಜ್‌, ಗೊವಿಂದೇಗೌಡ, ನಾರಾಯಣಸ್ವಾಮಿ, ಜಯಣ್ಣ, ವೆಂಕಟಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.