ಮಾಲೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ, ಉದ್ಯೋಗ ಸೃಷ್ಟಿ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರ ಸಂಘ, ಅಕ್ಷರ ದಾಸೋಹ ಹಾಗೂ ಸಿಐಟಿಯು ಕಾರ್ಯಕರ್ತರು ಶುಕ್ರವಾರ ಪಟ್ಟಣದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ತಾಲ್ಲೂಕು ಸಿಐಟಿಯು ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಂಪಂಗಿ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ, ರಾಜ್ಯ ಸರ್ಕಾರದ ತಪ್ಪು ನೀತಿಗಳೇ ಕಾರಣ. ಮಾಲೀಕರ ಜತೆ ಒಪ್ಪಂದ ಮಾಡಿಕೊಂಡಿರುವ ಸರ್ಕಾರಗಳು ಬಡವರನ್ನು ಶೋಷಿಸುತ್ತಿವೆ. ಸರ್ಕಾರಗಳೇ ವಿವಿಧ ಯೋಜನೆಗಳ ಹೆಸರಿನಲ್ಲಿ ಲಕ್ಷಾಂತರ ಮಹಿಳೆಯರಿಗೆ ಸಕಾಲಕ್ಕೆ ವೇತನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗುತ್ತಿಗೆ ಪದ್ಧತಿ ರದ್ದುಪಡಿಸುವ ಅಗತ್ಯವಿದೆ. ಸಾಮಾಜಿಕ ಕಲ್ಯಾಣ ಕಾನೂನುಗಳ ಪಾಲನೆಯಾಗಬೇಕು. ಬಿಪಿಎಲ್ ಮತ್ತು ಎಪಿಎಲ್ ಎಂಬ ತಾರತಮ್ಯವಿಲ್ಲದೆ ಪಡಿತರ ವ್ಯವಸ್ಥೆ ಜಾರಿಯಾಗಬೇಕು. ನೇರ ನಗದು ವರ್ಗಾವಣೆ ಪದ್ಧತಿಯನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ರಾಷ್ಟ್ರದಾದ್ಯಂತ ಚಳವಳಿ ಕೈಗೊಳ್ಳಲಿವೆ ಎಂದು ಎಚ್ಚರಿಕೆ ನೀಡಿದರು.
ನಂತರ ಶಿರಸ್ತೆದಾರ್ ಗುಪ್ತಾ ಅವರಿಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಸ್.ನಾಗರತ್ನ, ಅಂಗನವಾಡಿ ನೌಕರರ ತಾಲ್ಲೂಕು ಘಟಕದ ಅಧ್ಯಕ್ಷೆ ಮೀನಾಕ್ಷಿ, ಖಜಾಂಚಿ ಪುಷ್ಪ, ಅಕ್ಷರ ದಾಸೋಹ ತಾಲ್ಲೂಕು ಘಟಕದ ಅಧ್ಯಕ್ಷೆ ಗಾಯತ್ರಮ್ಮ, ಕಾರ್ಯದರ್ಶಿ ಸುಜಾತ, ಎನ್.ಅಶೋಕ್, ಪಿ.ಸಿ.ಜಯಮ್ಮ, ಸಿ.ಲಕ್ಷ್ಮಮ್ಮ, ಸವಿತಾ ಮೊದಲಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.