ADVERTISEMENT

ಕೋಮುಗಲಭೆ: ಬಿಜೆಪಿ ಸರ್ಕಾರಕ್ಕೆ ಮೊದಲ ಸ್ಥಾನ

ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಬಿಎಸ್‌ಪಿ ರಾಷ್ಟ್ರೀಯ ಘಟಕದ ಅಧ್ಯಕ್ಷೆ ಮಾಯಾವತಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 6 ಮೇ 2018, 11:46 IST
Last Updated 6 ಮೇ 2018, 11:46 IST

ಕೋಲಾರ: ‘ದೇಶದಲ್ಲಿ ಜಾತಿ ಪದ್ಧತಿ ಅನುಸರಿಸುತ್ತಿರುವುದು ರಾಷ್ಟ್ರೀಯ ಪಕ್ಷಗಳೇ ಹೊರತು ಪ್ರಾದೇಶಿಕ ಪಕ್ಷಗಳಲ್ಲ’ ಎಂದು ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ತೀವ್ರ ವಾಗ್ದಾಳಿ ನಡೆಸಿದರು.

ನಗರದಲ್ಲಿ ಶನಿವಾರ ನಡೆದ ಜೆಡಿಎಸ್‌ ಮತ್ತು ಬಿಎಸ್‌ಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಬಿಜೆಪಿ ಹಾಗೂ ಕಾಂಗ್ರೆಸ್‌ನವರು ತಪ್ಪು ಮಾಡಿ ಪ್ರಾದೇಶಿಕ ಪಕ್ಷಗಳ ಮೇಲೆ ಗೂಬೆ ಕೂರಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.

‘ಬಿಜೆಪಿ ಅಧಿಕಾರದಲ್ಲಿರುವ ಗುಜರಾತ್, ಮಧ್ಯಪ್ರದೇಶ ರಾಜ್ಯದಲ್ಲಿ ಜಾತಿ ಸಂಘರ್ಷ ಹೆಚ್ಚಿದೆ. ಆ ರಾಜ್ಯಗಳಲ್ಲಿ ಬಡವರು, ರೈತರು, ದಲಿತರು, ಅಲ್ಪಸಂಖ್ಯಾತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತರ ಹತ್ಯೆ ನಡೆಯುತ್ತಿದ್ದರೂ ರಕ್ಷಣೆ ನೀಡುವಲ್ಲಿ ಕೇಂದ್ರ ವಿಫಲವಾಗಿದೆ. ಕೋಮುಗಲಭೆ ಸೃಷ್ಟಿಸುವುದರಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದೆ’ ಎಂದು ಟೀಕಿಸಿದರು.

ADVERTISEMENT

‘ಜನಸಾಮಾನ್ಯರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆ ಜಾರಿಗೊಳಿಸುವಲ್ಲಿ ಕೇಂದ್ರ ವಿಫಲವಾಗಿದೆ. ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಕೇಂದ್ರವು ದಲಿತರಿಗೆ ರಕ್ಷಣೆ ನೀಡುವುದನ್ನು ಬಿಟ್ಟು ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿಯವರು ಅನೇಕ ರಾಜ್ಯಗಳಲ್ಲಿ ಒಳ ಒಪ್ಪಂದ ಮಾಡಿಕೊಂಡು ಅಧಿಕಾರ ನಡೆಸಿದ್ದಾರೆ. ಆದರೆ, ಪ್ರಾದೇಶಿಕ ಪಕ್ಷಗಳು ಎಲ್ಲೂ ರಾಷ್ಟ್ರೀಯ ಪಕ್ಷಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿಲ್ಲ’ ಎಂದರು.

ಮೀಸಲಾತಿ ಕಡಿತ: ‘ದಲಿತರು, ಹಿಂದುಳಿದ ವರ್ಗದವರು ಹಾಗೂ ಅಲ್ಪಸಂಖ್ಯಾತರ ಮೀಸಲಾತಿಯನ್ನು ಕಡಿತಗೊಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಇದನ್ನು ವಿರೋಧಿಸಿ ಪಕ್ಷವು ನಿರಂತರ ಹೋರಾಟ ನಡೆಸುತ್ತಿದೆ. ಸಂವಿಧಾನ ಬದಲಿಸಲು ಬಿಜೆಪಿಯವರು ಯಾರು?’ ಎಂದು ಪ್ರಶ್ನಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಜನರಿಗೆ ನೆಮ್ಮದಿ ಇಲ್ಲವಾಗಿದೆ. ನೋಟು ಅಮಾನ್ಯೋಕರಣದಿಂದ ಜನ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ. ಬ್ಯಾಂಕ್‌ಗಳಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ ನೀರವ್ ಮೋದಿಯಂತಹ ವಂಚಕರನ್ನು ಮೋದಿ ರಕ್ಷಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಘೋಷಣೆಗೆ ಸೀಮಿತ: ‘ಮೋದಿ ಯೋಜನೆಗಳು ಘೋಷಣೆಗಷ್ಟೇ ಸೀಮಿತವಾಗಿವೆ. ಮೋದಿ ತಮ್ಮ ಯೋಜನೆಗಳ ಕಡತಗಳನ್ನು ಬಚ್ಚಿಟ್ಟಿದ್ದಾರೆ. ದೇಶದಲ್ಲಿ ಸುದೀರ್ಧ ಆಡಳಿತ ನಡೆಸಿದ ಕಾಂಗ್ರೆಸ್ ಅಂಬೇಡ್ಕರ್‌ಗೆ ಭಾರತ ರತ್ನ ಪ್ರಶಸ್ತಿ ನೀಡಲಿಲ್ಲ. ಬಿಜೆಪಿಗೆ ದಲಿತರ ಬಗ್ಗೆ ಕಾಳಜಿಯಿಲ್ಲ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.