ಮಾಲೂರು: ಜಿಲ್ಲೆಯಲ್ಲಿ ಬರಗಾಲ ತೀವ್ರವಾಗಿರುವ ಹಿನ್ನೆಲೆಯಲ್ಲಿ ಜನರ ಸಮಸ್ಯೆ ಪರಿಹರಿಸಲು ಗ್ರಾಮಮಟ್ಟದ ಅಧಿಕಾರಿಗಳು ಜನರಿಗೆ ಸದಾ ಲಭ್ಯವಿರಬೇಕು ಎಂದು ಸಚಿವ ಎಸ್.ಸುರೇಶ್‌ಕುಮಾರ್ ಸೂಚನೆ ನೀಡಿದರು.
ಬರ ಪರಿಸ್ಥಿತಿ ಅಧ್ಯಯನ ಮಾಡುವ ಸಲುವಾಗಿ ಜಿಲ್ಲೆಗೆ ಸಚಿವರ ತಂಡದೊಡನೆ ಮಂಗಳವಾರ ಭೇಟಿ ನೀಡಿದ ಅವರು ಬೆಳಿಗ್ಗೆಯಿಂದ ಸಂಜೆವರೆಗೂ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಬಳಿಕ ಮಾಲೂರು ತಾಲ್ಲೂಕಿನ ಕಡತ್ತೂರಿನಲ್ಲಿ ರಾತ್ರಿ 7ರ ವೇಳೆಗೆ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಹಳ್ಳಿಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವೆಡೆ ಮೇವು ಪೂರೈಕೆಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಯಾವ ಗ್ರಾಮಕ್ಕೂ ವಿಳಂಬ ಮಾಡಬಾರದು. ಜನರು ಸಂಪರ್ಕಿಸಿ ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿ ಸಮಸ್ಯೆ ಪರಿಹಾರಕ್ಕೆ ಯತ್ನಿಸಬೇಕು ಎಂದು ಸೂಚಿಸಿದರು.
ಭರವಸೆ: ಸಭೆಯಲ್ಲಿ ಜಿಲ್ಲೆಯ ಶಾಸಕರು ಹೊಸ ಕೊಳವೆಬಾವಿ ಅಗತ್ಯ ಒತ್ತಿ ಹೇಳಿದರು. ಆ ಹಿನ್ನೆಲೆಯಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಮನೋಜ್‌ಕುಮಾರ್ ಮೀನಾ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.
ಎರಡು ತಿಂಗಳು ಎಲ್ಲ ಅಧಿಕಾರಿಗಳೂ ಚುರುಕಾಗಿರಬೇಕು. ಮೇವು ಪೂರೈಸಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ಮಟ್ಟದಲ್ಲಿ ಬಾಕಿ ಇರುವ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಹಣವನ್ನು ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ ಎಂದು ಮೀನಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.