ADVERTISEMENT

ಬಡತನ ನಿರ್ಮೂಲನೆ, ಶಿಕ್ಷಣಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2012, 6:05 IST
Last Updated 13 ಜೂನ್ 2012, 6:05 IST

ಕೋಲಾರ: ವಿಶ್ವದಲ್ಲಿ 21.50 ಕೋಟಿ ಬಾಲ ಕಾರ್ಮಿಕರಿದ್ದಾರೆ. ಅದಕ್ಕೆ ಮೂಲ ಕಾರಣ ಬಡತನ ಮತ್ತು ಶಿಕ್ಷಣದ ಕೊರತೆ. ಹೀಗಾಗಿ ಬಡತನ ನಿರ್ಮೂಲನೆ ಮತ್ತು ಶಿಕ್ಷಣ ಸೌಲಭ್ಯವನ್ನು ವಿಸ್ತರಿಸುವುದು ಅತ್ಯಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ  ವೀರಣ್ಣ ಜಿ.ತಿಗಡಿ ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ವಕೀಲರ ಸಂಘದ ವತಿಯಿಂದ ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಶಿಕ್ಷಣ ನೀಡುವುದು ಕಡ್ಡಾಯ. ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿ ಹಲವು ಸೌಲಭ್ಯ ನೀಡಿ ಬಡಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಆದರೂ ಬಾಲಕಾರ್ಮಿಕರು ಹೆಚ್ಚಾಗುತ್ತಿದ್ದಾರೆ.  ಮಾದಕ ವಸ್ತು ವ್ಯಸನಿಗಳಾಗುತ್ತಿದ್ದಾರೆ ಎಂದು ವಿಷಾದಿಸಿದರು.

ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಅಪರಾಧ. ಅನಿಷ್ಟ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಅವಶ್ಯಕ.  ಎಲ್ಲರೂ ಬಾಲ ಕಾರ್ಮಿಕರ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪಣ ತೊಡಬೇಕಾಗಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಹತ್ತು ಬಾಲಕಾರ್ಮಿಕರ ವಸತಿ ಶಾಲೆಗಳನ್ನು ತೆರೆಯಲಾಗಿದೆ.  800 ಬಾಲಕಾರ್ಮಿಕರನ್ನು ಗುರುತಿಸಲಾಗಿದೆ. ಮಕ್ಕಳಿಗೆ ವಸತಿ ಸೌಲಭ್ಯ ನೀಡಿ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಎ.ವಿಜಯನ್ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಟಿ.ಎಂ.ಶಿವಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್‌ನಿವಾಸ್ ಸಪೆಟ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಡಿ.ಗೋವಿಂದಯ್ಯ ಮಾತನಾಡಿದರು.   ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್.ರೇವಣ್ಣ ಸ್ವಾಗತಿಸಿದರು.  ಕಾನೂನು ಸೇವೆಗಳ ಆಡಳಿತ ಕಾರ್ಯದರ್ಶಿ ಸುಬ್ರಹ್ಮಣಿ ವಂದಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.