ADVERTISEMENT

ಬಡವರ ಮೇಲೆ ಶಾಸಕರ ದೌರ್ಜನ್ಯ

ಜೆಡಿಎಸ್ ಅಭ್ಯರ್ಥಿ ಮಲ್ಲೇಶ್‌ ಬಾಬು ಆರೋಪ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 11:13 IST
Last Updated 31 ಮಾರ್ಚ್ 2018, 11:13 IST

ಕೋಲಾರ: ಶಾಸಕ ಎಸ್.ಎನ್.ನಾರಾಯಣಸ್ವಾಮಿ ದುರಾಡಳಿತ ಹೆಚ್ಚಾಗಿ ಅಧಿಕಾರಿಗಳನ್ನು ಕಪಿಮುಷ್ಟಿಯಲ್ಲಿಟ್ಟುಕೊಂಡು ಬಡವರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಅಂತಹವರಿಗೆ ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸಬೇಕು ಎಂದು ಜೆಡಿಎಸ್ ಅಭ್ಯರ್ಥಿ ಮಲ್ಲೇಶ್‌ಬಾಬು ಸಲಹೆ ನೀಡಿದರು.ತಾಲ್ಲೂಕಿನ ಕುಂಬಾರಹಳ್ಳಿಯಲ್ಲಿ ಶುಕ್ರವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಬಂಗಾರಪೇಟೆ ಕ್ಷೇತ್ರದಲ್ಲಿ ಹಾಲಿ ಮತ್ತು ಮಾಜಿ ಶಾಸಕರು ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಳ್ಳುವ ಮೂಲಕ ತಮ್ಮ ಅಕ್ರಮಗಳನ್ನು ಬಹಿರಂಗ ಪಡಿಸಿಕೊಳ್ಳುತ್ತಿದ್ದಾರೆ’ ಎಂದರು.

ಹಾಲಿ ಮತ್ತು ಮಾಜಿ ಶಾಸಕರ ಮೇಲೆ ಒಂದಲ್ಲಾ ಒಂದು ಆರೋಪಗಳನ್ನು ಮಾಡುತ್ತಿದ್ದಾರೆ. ಇಬ್ಬರೂ ಸಹ ಅಕ್ರಮಗಳಲ್ಲಿ ಭಾಗಿಯಾಗಿರುವುದು ಅವರ ಬಾಯಿಯಿಂದಲೇ ಹೊರ ಬಂದಿದೆ. ಜನರು ದಡ್ಡರಲ್ಲ. ಎಲ್ಲವನ್ನು ನೋಡುತ್ತಿದ್ದಾರೆ. ಈ ಭಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಸೋಲು ಖಚಿತ’ ಎಂದು ವಿಶ್ವಾಸವ್ಯಕ್ತಪಡಿಸಿದರು. ಕ್ಷೇತ್ರದ ಜನ ಕಾಂಗ್ರೆಸ್, ಬಿಜೆಪಿಯನ್ನು ತಿರಸ್ಕಾರಮಾಡುತ್ತಿದ್ದಾರೆ. ಜೆಡಿಎಸ್ ಅಲೆಯು ಹೆಚ್ಚಾಗಿರುವುದರಿಂದ ಅನೇಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆಲುವು ಖಚಿತ ಎಂದು ಅವರು ಹೇಳಿದರು.

ಕಾಂಗ್ರೆಸ್‌ ಮತ್ತು ಬಿಜೆಪಿ ಭ್ರಷ್ಟಚಾರದಲ್ಲಿ ಒಂದೇ ನಾಣ್ಯದ ಎರಡು ಮುಖ ಇದ್ದಂತೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಂಗಮ್ಮಮುನಿಸ್ವಾಮಿ ಅಭಿಪ್ರಾಯಪಟ್ಟರು. ಬಂಗಾರಪೇಟೆ ಕ್ಷೇತ್ರದಲ್ಲಿ ಈಗಾಗಲೇ ಎಲ್ಲ ಮುಖಂಡರನ್ನು ಭೇಟಿ ಮಾಡಲಾಗಿದೆ. ಮಲ್ಲೇಶ್‍ಬಾಬು ಅವರು ಗೆಲುವು ಖಚಿತ’ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾದ ಮುಖಂಡರನ್ನು ಸ್ವಾಗತಿಸಲಾಯಿತು.

ADVERTISEMENT

ತಾಲ್ಲೂಕು ಪಂಚಾಯಿತಿ ಸದಸ್ಯ ರಮೇಶ್, ವಡಗೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬೈರೇಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಾಬುಮೌನಿ, ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಬಾಬು, ಮುಖಂಡ ದಯಾನಂದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.