ADVERTISEMENT

ಬಿಜೆಪಿಗೆ ಬಹುಮತ ದೊರಕಿಸಿ ಕೊಡಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2017, 7:51 IST
Last Updated 16 ಅಕ್ಟೋಬರ್ 2017, 7:51 IST

ಕೋಲಾರ: ‘ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ದೊರಕಿಸಿಕೊಡುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ’ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಜಯದೇವ ತಿಳಿಸಿದರು.

ನಗರದಲ್ಲಿ ಪರಿವರ್ತನಾ ಯಾತ್ರೆಯ ಅಂಗವಾಗಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪೂರಕವಾಗಿರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.

‘ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಪರಿವರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ನ.2ರಂದು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್‌ ಷಾ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ಹೇಳಿದರು.

ADVERTISEMENT

‘ಪ್ರತಿ ಬೂತ್‌ಮಟ್ಟದಿಂದ ಕನಿಷ್ಠ 30 ಮಂದಿಯನ್ನು ಯಾತ್ರೆಗೆ ಕರೆತರುವ ಕೆಲಸ ಕಾರ್ಯಕರ್ತರಿಂದ ಆಗಬೇಕು. ಇದಕ್ಕೆ ಬರುವವರ ಬೈಕ್ ಸಂಖ್ಯೆ ಮತ್ತು ವಿವರಗಳನ್ನು ಆಯಾ ತಾಲ್ಲೂಕಿನ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಲ್ಲಿಸಬೇಕು’ ಎಂದು ಸೂಚಿಸಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಜನ ಬದಲಾವಣೆ ಬಯಸುತ್ತಿದ್ದಾರೆ. ಇದರಿಂದ ಕಾರ್ಯಕರ್ತರು ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಿಸಿಕೊಂಡರೆ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ’ ಎಂದು ವಿಶ್ವಾಸವ್ಯಕ್ತಪಡಿಸಿದರು.

‘ಹಾಲು ಉತ್ಪಾದಿಸುವ ರೈತರನ್ನು ಹಾಲು ಒಕ್ಕೂಟ ಶೋಷಣೆ ಮಾಡುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸಬೇಕಾದ ಅಗತ್ಯವಿದೆ’ ಎಂದು ಮುಖಂಡ ಕೃಷ್ಣಯ್ಯಶೆಟ್ಟಿ ಹೇಳಿದರು. ‘ಕೆಎಂಎಫ್‌ ರೈತರಿಂದ ಒಂದು ಲೀಟರ್ ಹಾಲನ್ನು ₹ 23ಗೆ ಖರೀದಿಸಿ ₹ 48ಕ್ಕೆ ಗ್ರಾಹಕರಿಗೆ ಮಾರಾಟ ಮಾಡುತ್ತಿದೆ. ರೈತರನ್ನು ವಂಚಿಸಲಾಗುತ್ತಿದೆ. ಈ ಕುರಿತು ಅನೇಕ ಬಾರಿ ಒಕ್ಕೂಟದ ಗಮನಕ್ಕೆ ತಂದಿದ್ದರೂ   ಕ್ರಮಕೈಗೊಂಡಿಲ್ಲ’ ಎಂದು ದೂರಿದರು.

ಶಾಸಕಿ ವೈ.ರಾಮಕ್ಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ, ಮಾಜಿ ಶಾಸಕರಾದ ಎ.ನಾಗರಾಜ, ವೈ.ಸಪಂಗಿ, ಜಿಲ್ಲಾ ಪ್ರಭಾರ ಉಸ್ತುವಾರಿ ಸಚ್ಚಿದಾನಂದ, ಜಿಲ್ಲಾ ಪಂಚಾಯಿತಿ ಸದಸ್ಯೆ ಅಶ್ವಿನಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ, ನಗರ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.