ADVERTISEMENT

ಸಮಾಜ ಕಲ್ಯಾಣ ಇಲಾಖೆ: ದಲ್ಲಾಳಿ ಕಚೇರಿ ಆಗುವುದು ಬೇಡ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 8:30 IST
Last Updated 13 ಮಾರ್ಚ್ 2018, 8:30 IST
ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಸಮಾಜ ಕಲ್ಯಾಣ ಇಲಾಖೆ ಕಚೇರಿ ಉದ್ಘಾಟಿಸಿದರು
ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಸಮಾಜ ಕಲ್ಯಾಣ ಇಲಾಖೆ ಕಚೇರಿ ಉದ್ಘಾಟಿಸಿದರು   

ಬಂಗಾರಪೇಟೆ: ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಕಚೇರಿಯಾಗಿಯೇ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅದನ್ನು ದಲ್ಲಾಳಿ
ಗಳ ಕಚೇರಿಯಾಗಿ ಬದಲಾಯಿಸಿಕೊಳ್ಳಬಾರದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.

ಪಟ್ಟಣದಲ್ಲಿ ಸೋಮವಾರ ₹ 25 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಉದ್ಘಾಟಿಸಿ ಮಾತನಾಡಿ, ಯಾರೇ ಮುಖಂಡರು ಕಚೇರಿಗೆ ಬಂದರೂ ಕೆಲಸ ಮುಗಿದ ನಂತರ ಇತರರ ಕೆಲಸಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಬೇಕು. ಅದು ಬಿಟ್ಟು ಅವರೊಂದಿಗೆ ಸಭೆ ನಡೆಸುವ ಅಭ್ಯಾಸ ರೂಢಿಸಿಕೊಳ್ಳಬಾರದು. ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ನಿರ್ವಹಣೆ ಮಾಡುವ ಬಹಳಷ್ಟ ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಡೆಗಣಿಸಲಾಗಿದೆ ಎನ್ನುವ ಆರೋಪಗಳಿವೆ. ಇನ್ನು ಮುಂದೆ ಅದಕ್ಕೆ ಅವಕಾಶ ಮಾಡಿಕೊಡಬಾರದು. ಕಚೇರಿಯ ಪ್ರಮುಖ ಸ್ಥಳಗಳಲ್ಲಿ ಕ್ಯಾಮೆರಾ ಅಳವಡಿಸಿ, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿ ರಾಜಣ್ಣ ಅವರಿಗೆ ಸೂಚಿಸಿದರು.

ADVERTISEMENT

ಅಡುಗೆ ಮಾಡುವ ಸಂದರ್ಭ ಏಪ್ರಾನ್ ಮತ್ತು ತಲೆ ಮತ್ತು ಕೈ ಕವಚ ಹಾಕಿಕೊಳ್ಳಬೇಕು. ಶುಚಿ ಮತ್ತು ರುಚಿಯಾದ ಆಹಾರವನ್ನು ಮಕ್ಕಳಿಗೆ ಬಡಿಸಬೇಕು. ಕಡೆಗಣಿಸಿದರೆ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು.

ಪರಿಶಿಷ್ಟ ಜಾತಿ, ಪಂಗಡದ ಮಕ್ಕಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಒತ್ತು ನೀಡಿದ್ದು, ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸಿರುವುದು ಸಂತಸ ತಂದಿದೆ ಎಂದರು.

ಕೃಷಿ ಇಲಾಖೆ ಸೇರಿದಂತೆ ಬಹುತೇಕ ಇಲಾಖೆಗಳಿಗೆ ಸ್ವಂತ ಕಟ್ಟಡ ಇಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಮೂರು ವರ್ಷದ ಒಳಗೆ ಆ ಎಲ್ಲ ಇಲಾಖೆಗಳಿಗೆ ಸ್ವಂತ ಕಟ್ಟಡ ಒದಗಿಸುವುದು ನನ್ನ ಅಭಿಲಾಷೆಯಾಗಿದೆ ಎಂದು ಅವರು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ಅಧ್ಯಕ್ಷೆ ಭಾಗ್ಯಲಕ್ಷ್ಮಿ, ತಾ.ಪಂ ಸದಸ್ಯೆ ಕಲಾವತಿ, ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜಣ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.