ADVERTISEMENT

ಸರ್ಕಾರಿ ಜಮೀನು ಅಕ್ರಮ ಪರಭಾರೆ: ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿ ಧರಣಿ

ದಲಿತ ಸಂಘರ್ಷ ಸಮಿತಿ ಸದಸ್ಯರ ಆರೋಪ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2018, 14:05 IST
Last Updated 21 ಡಿಸೆಂಬರ್ 2018, 14:05 IST
ಸರ್ಕಾರಿ ಜಮೀನು ಅಕ್ರಮವಾಗಿ ಪರಭಾರೆ ಮಾಡಿರುವ ಕಂದಾಯ ಇಲಾಖೆ ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಕೋಲಾರ ತಾಲ್ಲೂಕು ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು.
ಸರ್ಕಾರಿ ಜಮೀನು ಅಕ್ರಮವಾಗಿ ಪರಭಾರೆ ಮಾಡಿರುವ ಕಂದಾಯ ಇಲಾಖೆ ಅಧಿಕಾರಿಗಳ ಅಮಾನತಿಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಕೋಲಾರ ತಾಲ್ಲೂಕು ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು.   

ಕೋಲಾರ: ಸರ್ಕಾರಿ ಜಮೀನು ಅಕ್ರಮವಾಗಿ ಪರಭಾರೆ ಮಾಡಿರುವ ಕಂದಾಯ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಇಲ್ಲಿ ಶುಕ್ರವಾರ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.

‘ಸರ್ಕಾರಿ ಜಮೀನು ರಕ್ಷಿಸಬೇಕಾದ ಕಂದಾಯ ಇಲಾಖೆ ಅಧಿಕಾರಿಗಳೇ ಭೂಗಳ್ಳರ ಜತೆ ಶಾಮೀಲಾಗಿದ್ದಾರೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಗೋಮಾಳ, ಗುಂಡು ತೋಪು, ಸ್ಮಶಾನ, ಕೆರೆ ಅಂಗಳ ಒತ್ತುವರಿಯಾಗಿವೆ. ಆದರೆ, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲೆಯ ವಿವಿಧೆಡೆ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ಅಧಿಕಾರಿಗಳೇ ಸರ್ಕಾರಿ ಜಮೀನುಗಳಿಗೆ ನಕಲಿ ದಾಖಲೆಪತ್ರ ಸೃಷ್ಟಿಸಿ ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡಿದ್ದಾರೆ’ ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿ.ನಾಗೇಶ್ ಆರೋಪಿಸಿದರು.

ADVERTISEMENT

‘ತಾಲ್ಲೂಕಿನ ಚಲುವನಹಳ್ಳಿ ಕೆರೆ ಅಂಗಳದ 43 ಎಕರೆ ಜಮೀನನ್ನು ವ್ಯಕ್ತಿಯೊಬ್ಬರು ಒತ್ತುವರಿ ಮಾಡಿದ್ದಾರೆ. ಗ್ರಾಮ ಲೆಕ್ಕಿಗ ಹಾಗೂ ರಾಜಸ್ವ ನಿರೀಕ್ಷಕರು ಆ ವ್ಯಕ್ತಿಗೆ ನಕಲಿ ದಾಖಲೆಪತ್ರ ಸೃಷ್ಟಿಸಿಕೊಟ್ಟಿದ್ದಾರೆ. ಈ ಸಂಬಂಧ ದಾಖಲೆಪತ್ರ ಸಮೇತ ಅಧಿಕಾರಿಗಳಿಗೆ ದೂರು ನೀಡಿದ್ದರೂ ಒತ್ತುವರಿ ತೆರವುಗೊಳಿಸಿಲ್ಲ’ ಎಂದು ಹೇಳಿದರು.

ಅಧಿಕಾರಿಗಳು ಶಾಮೀಲು: ‘ಕೋಡಿಕಣ್ಣೂರು ಹಾಗೂ ಮಲಿಯಪ್ಪನಹಳ್ಳಿಯಲ್ಲಿ ಸರ್ಕಾರಿ ಜಾಗವನ್ನು ಸ್ಮಶಾನ ಮತ್ತು ಅನಾಥಾಶ್ರಮಕ್ಕೆ ಮಂಜೂರು ಮಾಡಲು ತೀರ್ಮಾನಿಸಲಾಗಿದೆ. ಆದರೆ, ಕಂದಾಯ ನಿರೀಕ್ಷಕರು ಅಧಿಕಾರಿಗಳ ದಿಕ್ಕು ತಪ್ಪಿಸಿ ಬೇರೆಯವರಿಗೆ ಜಮೀನು ಪರಭಾರೆ ಮಾಡಲು ಪ್ರಯತ್ನಿಸುತ್ತಿದ್ದಾರೆ’ ಎಂದು ಧರಣಿನಿರತರು ಕಿಡಿಕಾರಿದರು.

‘ಬಗರ್‌ ಹುಕುಂ ಸಮಿತಿ ಮೂಲಕ ಅನರ್ಹರಿಗೆ ಸರ್ಕಾರಿ ಜಮೀನು ಮಂಜೂರು ಮಾಡಲಾಗಿದೆ. ಇದಕ್ಕೆ ಪ್ರತಿಯಾಗಿ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ಲಂಚ ಸಂದಾಯವಾಗಿದೆ. ತಾಲ್ಲೂಕು ಕಚೇರಿ, ಕಂದಾಯ ಹಾಗೂ ಭೂದಾಖಲೆ ಇಲಾಖೆ ಅಧಿಕಾರಿಗಳು ಶಾಮೀಲಾಗಿ ಭೂ ಅಕ್ರಮ ಎಸಗಿದ್ದಾರೆ’ ಎಂದು ದೂರಿದರು.

ಉನ್ನತ ತನಿಖೆ: ‘ಭೂಅಕ್ರಮದ ಸಂಬಂಧ ಉನ್ನತ ತನಿಖೆ ನಡೆಸಬೇಕು. ಭೂಗಳ್ಳರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಒತ್ತುವರಿ ಜಮೀನಿನ ಸರ್ವೆ ಮಾಡಿಸಿ ಜಿಲ್ಲಾಡಳಿತದ ವಶಕ್ಕೆ ತೆಗೆದುಕೊಳ್ಳಬೇಕು. ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಸಹಕರಿಸದ ಅಧಿಕಾರಿಗಳ ವಿರುದ್ಧ ನಗರಾಭಿವೃದ್ಧಿ ಇಲಾಖೆಯು ದೂರು ದಾಖಲಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ. ಅದೇ ರೀತಿ ಜಿಲ್ಲೆಯಲ್ಲೂ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಬೇಕು’ ಎಂದು ಒತ್ತಾಯಿಸಿದರು.

ಸಮಿತಿಯ ಜಿಲ್ಲಾ ಘಟಕದ ಖಜಾಂಚಿ ಎಂ.ರವಿಕುಮಾರ್, ಸದಸ್ಯರಾದ ಹನುಮಪ್ಪ, ಮಂಜು, ಯಲ್ಲಪ್ಪ, ನಾಗರಾಜ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.