ADVERTISEMENT

ಒಂದೇ ದಿನ 100 ಮಂದಿ ಮನೆಗೆ

ಸೋಂಕಿತರು ದಾಖಲೆ ಪ್ರಮಾಣದಲ್ಲಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 30 ಜುಲೈ 2020, 16:18 IST
Last Updated 30 ಜುಲೈ 2020, 16:18 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ದಾಖಲೆ ಪ್ರಮಾಣದಲ್ಲಿ ಗುಣಮುಖರಾಗಿದ್ದು, ಗುರುವಾರ ಒಂದೇ ದಿನ 100 ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಮೇ 12ರಂದು ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದವು. ಈವರೆಗೆ ಪ್ರತಿನಿತ್ಯ ಪತ್ತೆಯಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾಗುವವರ ಸಂಖ್ಯೆ ಕಡಿಮೆಯಿತ್ತು.

ಜುಲೈ 22ರಂದು ಅತಿ ಹೆಚ್ಚು 64 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ವಾಪಸ್‌ ಹೋಗಿದ್ದರು. ಅದನ್ನು ಹೊರತುಪಡಿಸಿದರೆ ಗುಣಮುಖರಾಗಿ ಒಂದೇ ದಿನ ಮನೆಗೆ ಮರಳಿದವರ ಸಂಖ್ಯೆ 100ರ ಗಡಿ ದಾಟಿರಲಿಲ್ಲ. ಆದರೆ, ಇದೇ ಮೊದಲ ಬಾರಿಗೆ ಒಂದೇ ದಿನ 100 ಮಂದಿ ಗುಣಮುಖರಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ADVERTISEMENT

ಕೋಲಾರ ತಾಲ್ಲೂಕಿನ 50 ಮಂದಿ, ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ 13 ಮಂದಿ, ಕೆಜಿಎಫ್‌ ತಾಲ್ಲೂಕಿನ ಮೂವರು, ಮುಳಬಾಗಿಲು ತಾಲ್ಲೂಕಿನ 12 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 9 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.

ಸೋಂಕಿತ ಸಾವು: ಕೋಲಾರ ತಾಲ್ಲೂಕಿನ 66 ವರ್ಷದ ಸೋಂಕಿತ ವ್ಯಕ್ತಿಯು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಮೂಲತಃ ಮೈಸೂರು ಜಿಲ್ಲೆಯ ಇವರು ಇತ್ತೀಚೆಗೆ ಕೋಲಾರದ ಸಂಬಂಧಿಕರ ಮನೆಗೆ ಬಂದಿದ್ದರು. ನಂತರ ಇವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಜಿಲ್ಲಾ ಕೇಂದ್ರದ ಆರ್‌.ಎಲ್‌ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಜ್ವರ ಮತ್ತು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 32 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 797ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 20 ಮಂದಿಗೆ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯ ಸಂಖ್ಯೆ1,22,447ರ ಸಂಪರ್ಕದಿಂದ 9 ಮಂದಿಗೆ ಸೋಂಕು ಹರಡಿದೆ. ಉಳಿದಂತೆ ಸೋಂಕಿತ ವ್ಯಕ್ತಿಗಳ ಸಂಪರ್ಕದಿಂದ ಮೂವರಿಗೆ, ವಿಷಮ ಶೀತ ಜ್ವರದಿಂದ ಬಳಲುತ್ತಿರುವ 7 ಮಂದಿಗೆ ಹಾಗೂ ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ ಸೋಂಕು ತಗುಲಿದೆ.

ಮಾಲೂರು ತಾಲ್ಲೂಕಿನಲ್ಲಿ ಒಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನಲ್ಲಿ ಇಬ್ಬರಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮೂವರಿಗೆ ಸೋಂಕು ಬಂದಿದೆ. ಈ 6 ಮಂದಿಯೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ.ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 3 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಹರಡಿದೆ. ಮುಳಬಾಗಿಲು ತಾಲ್ಲೂಕಿನಲ್ಲಿ ಸೋಂಕಿತ ವ್ಯಕ್ತಿ ಸಂಖ್ಯೆ 1,11,670ರ ಸಂಪರ್ಕದಿಂದ ಇಬ್ಬರಿಗೆ ಸೋಂಕು ಬಂದಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೇ, ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.