ADVERTISEMENT

ಕೋಲಾರ: ವಾರಾಂತ್ಯಕ್ಕೆ 2 ದಿನ ಸಂಪೂರ್ಣ ಲಾಕ್‌ಡೌನ್‌

ಜನರು ಸಹಕರಿಸಬೇಕು: ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಮನವಿ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 13:51 IST
Last Updated 2 ಜೂನ್ 2021, 13:51 IST
ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಕೋಲಾರದ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಬುಧವಾರ ವೈದ್ಯಕೀಯ ಆಮ್ಲಜನಕ ಘಟಕಕ್ಕೆ ಚಾಲನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಕೋಲಾರದ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಬುಧವಾರ ವೈದ್ಯಕೀಯ ಆಮ್ಲಜನಕ ಘಟಕಕ್ಕೆ ಚಾಲನೆ ನೀಡಿದರು.   

ಕೋಲಾರ: ‘ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ವಾರಾಂತ್ಯದ 2 ದಿನ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಇಲ್ಲಿ ಬುಧವಾರ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಘಟಕ ಉದ್ಘಾಟಿಸಿ ಮಾತನಾಡಿ, ‘ಶನಿವಾರ (ಜೂನ್‌ 5) ಬೆಳಿಗ್ಗೆ 10 ಗಂಟೆಯಿಂದ ಸೋಮವಾರ (ಜೂನ್‌ 7) ಬೆಳಿಗ್ಗೆ 6ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ. ಜನರು ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಜಿಲ್ಲೆಯಲ್ಲಿ ಈ ಹಿಂದೆ 2 ಬಾರಿ ಸಂಪೂರ್ಣ ಲಾಕ್‌ಡೌನ್‌ ಜಾರಿ ಮಾಡಿದ್ದರಿಂದ ಕೊರೊನಾ ಸೋಂಕು ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಹೀಗಾಗಿ ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗುತ್ತಿದ್ದು, ಜನರು 2 ದಿನಕ್ಕೆ ಆಗುವಷ್ಟು ಅಗತ್ಯ ವಸ್ತುಗಳನ್ನು ಮುಂಚಿತವಾಗಿ ಖರೀದಿಸಬೇಕು. ಲಾಕ್‌ಡೌನ್‌ ವೇಳೆ ಅನಗತ್ಯವಾಗಿ ಮನೆಯಿಂದ ಹೊರ ಬಂದು ಓಡಾಡಬಾರದು. ಕೋವಿಡ್‌ ನಿಯಂತ್ರಣಕ್ಕೆ ಜನರ ಸಹಕಾರ ಮುಖ್ಯ’ ಎಂದು ಕೋರಿದರು.

ADVERTISEMENT

‘ಜಿಲ್ಲೆಯಲ್ಲಿ ಜನಪ್ರತಿನಿಧಿಗಳು, ಜಿಲ್ಲಾಡಳಿತ ಹಾಗೂ ಸಾರ್ವಜನಿಕರ ಸಹಕಾರದಿಂದಾಗಿ ದಿನದಿಂದ ದಿನಕ್ಕೆ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ರಾಜ್ಯ ಸರ್ಕಾರದ ಲಾಕ್‌ಡೌನ್‌ ಮಾರ್ಗಸೂಚಿಯಂತೆ ಶುಕ್ರವಾರ (ಜೂನ್‌ 4) ಬೆಳಿಗ್ಗೆ 6 ಗಂಟೆಯಿಂದ 10ರವರೆಗೆ ವಾಣಿಜ್ಯ ವಹಿವಾಟು ನಡೆಸಲು ಅನುಮತಿ ಇದೆ’ ಎಂದು ವಿವರಿಸಿದರು.

‘ಪೆಟ್ರೋಲ್‌ ಬಂಕ್‌ ಮತ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ವಾಣಿಜ್ಯ ಚಟುವಟಿಕೆ ನಿರ್ಬಂಧಿಸಲಾಗಿದೆ. ಹಾಲಿನ ಮಳಿಗೆಗಳು ಹಾಗೂ ನ್ಯಾಯಬೆಲೆ ಅಂಗಡಿಗಳನ್ನು ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ’ ಎಂದು ಸ್ಪಷ್ಟಪಡಿಸಿದರು.

‘ಎಸ್‌ಎನ್‌ಆರ್‌ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ಪೂರೈಕೆಯಾಗುತ್ತಿದ್ದ ವೈದ್ಯಕೀಯ ಆಮ್ಲಜನಕದ ಒತ್ತಡ ಕಡಿಮೆಯಿತ್ತು. ಇದರಿಂದ ಸೋಂಕಿತರಿಗೆ ಸಮಸ್ಯೆಯಾಗುತ್ತಿತ್ತು. ಇದೀಗ ಹೊಸದಾಗಿ 6.5 ಕೆ.ಎಲ್‌ ಸಾಮರ್ಥ್ಯದ ಆಮ್ಲಜನಕ ಘಟಕ ಅಳವಡಿಸಿರುವುದರಿಂದ ಮಕ್ಕಳ ವಾರ್ಡ್‌ಗೆ ಆಮ್ಲಜನಕ ಪೂರೈಸಲು ಅನುಕೂಲವಾಗುತ್ತದೆ’ ಎಂದು ಮಾಹಿತಿ ನೀಡಿದರು.

ಸಮರ್ಪಕ ಕಾರ್ಯ: ‘ಗ್ರಾಮೀಣ ಭಾಗದಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ರಚಿಸಿರುವ ಕಾರ್ಯಪಡೆ ಸಮಿತಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ ಸಾಕಷ್ಟು ಗ್ರಾಮಗಳು ಕೋವಿಡ್‌ ಮುಕ್ತವಾಗಿವೆ. ಸತತ ಒಂದು ತಿಂಗಳವರಗೆ ಕನಿಷ್ಠ ಒಂದೇ ಒಂದು ಕೊರೊನಾ ಸೋಂಕಿನ ಪ್ರಕರಣವಿಲ್ಲದಂತೆ ಕ್ರಮ ವಹಿಸುವ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾಡಳಿತದ ವತಿಯಿಂದ ಪ್ರೋತ್ಸಾಹಧನ ನೀಡಲಾಗುತ್ತದೆ. ಕಾರ್ಯಪಡೆ ಸಮಿತಿಗಳು ಕೋವಿಡ್‌ ನಿಯಂತ್ರಣಕ್ಕೆ ವಿಶೇಷ ಪ್ರಯತ್ನ ಮಾಡಬೇಕು’ ಎಂದು ಸೂಚಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಎಸ್‌ಎನ್‌ಆರ್‌ ಆಸ್ಪತ್ರೆಗೆ 5 ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಸಂಸದ ಎಸ್.ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ತಹಶೀಲ್ದಾರ್ ಶೋಭಿತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ, ನಗರಸಭೆ ಆಯುಕ್ತ ಆರ್.ಶ್ರೀಕಾಂತ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.