ADVERTISEMENT

26 ಗ್ರಾಮದಲ್ಲಿ ನೀರಿನ ಸಮಸ್ಯೆ

ಕೋಲಾರ ತಾಲ್ಲೂಕು ಪಂಚಾಯತಿ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2013, 5:05 IST
Last Updated 11 ಜೂನ್ 2013, 5:05 IST

ಕೋಲಾರ: ಕಳೆದ ವರ್ಷ ಜೂನ್ ತಿಂಗಳಲ್ಲಿ ತಾಲ್ಲೂಕಿನ 92 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತಲೆದೋರಿತ್ತು. ಈ ವರ್ಷ 26 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. 15 ದಿನದೊಳಗೆ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಇಲ್ಲಿವರೆಗೆ ತಾಲ್ಲೂಕಿನಲ್ಲಿ ಕಂಡು ಬಂದ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿರ್ವಹಿಸಲಾಗಿದೆ. ಇನ್ನು ಮುಂದೆಯೂ ಅದೇ ರೀತಿ ಕಾರ್ಯ ನಿರ್ವಹಿಸಲಾಗುವುದು ಎಂದರು.

12-13-14ನೇ ಸಾಲಿನಲ್ಲಿ ನೀರು ಪೂರೈಕೆಗೆ ಸಂಬಂಧಿಸಿದಂತೆ ಕ್ರಿಯಾಯೋಜನೆ ಸಿದ್ಧಪಡಿಸಲಾಗುತ್ತಿದೆ. ತಾಲ್ಲೂಕಿನ ಪ್ರತಿ ವ್ಯಕ್ತಿಗೆ ಪ್ರತಿ ದಿನ 25ರಿಂದ 50 ಲೀಟರ್ ನೀರನ್ನು ಪೂರೈಸುವ ಗುರಿ ಹಿನ್ನೆಲೆಯಲ್ಲಿ ರೂ. 22 ಕೋಟಿ ವೆಚ್ಚದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು, ಆನ್‌ಲೈನ್‌ನಲ್ಲಿ ಕಾಮಗಾರಿಗಳ ಗುತ್ತಿಗೆ ನೀಡಲಾಗುವುದು ಎಂದು ತಿಳಿಸಿದರು.

ಮುಂಗಾರು ಪೂರ್ವ ಅವಧಿಯಲ್ಲಿ ಸಾಕಷ್ಟು ಬಿತ್ತನೆ ಬೀಜ, ಗೊಬ್ಬರ ದಾಸ್ತಾನು ಇದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಣೆಯ ವ್ಯವಸ್ಥೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ ಮಾಹಿತಿ ನೀಡಿದರು.

ಕೋರಂ ಕೊರತೆ: ಬೆಳಿಗ್ಗೆ 11ಕ್ಕೆ ನಿಗದಿಯಾಗಿದ್ದ ಸಭೆಗೆ ಸಮಯಕ್ಕೆ ಸರಿಯಾಗಿ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸಭೆಯನ್ನು ಅರ್ಧ ಗಂಟೆ ಕಾಲ ಮುಂದೂಡಲಾಯಿತು. ಬೆರಳೆಣಿಕೆಯಷ್ಟು ಅಧಿಕಾರಿಗಳ ಹಾಜರಿಯಲ್ಲೇ ಸಭೆಯನ್ನು ನಡೆಸಲಾಯಿತು.

ಅಧ್ಯಕ್ಷೆ ಭಾಗ್ಯಮ್ಮ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸರಸ್ವತಿ, ಕಾರ್ಯ ನಿರ್ವಹಣಾಧಿಕಾರಿ ಕೆ.ಎಸ್.ಭಟ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.