ADVERTISEMENT

44 ಮಂದಿಗೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 16:23 IST
Last Updated 21 ಸೆಪ್ಟೆಂಬರ್ 2020, 16:23 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 44 ಮಂದಿಗೆ ಕೊರೊನಾ ಸೋಂಕು ಹರಡಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 787ಕ್ಕೆ ಏರಿಕೆಯಾಗಿದೆ.

ಮುಖ್ಯವಾಗಿ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಮಂದಿಗೆ ಸೋಂಕು ತಗುಲಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವ 8 ಮಂದಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 35 ಮಂದಿಗೆ ಸೋಂಕು ಬಂದಿದೆ.

ಕೆಜಿಎಫ್‌ ತಾಲ್ಲೂಕಿನಲ್ಲಿ 14 ಮಂದಿಗೆ ಮತ್ತು ಬಂಗಾರಪೇಟೆ ತಾಲ್ಲೂಕಿನಲ್ಲಿ 9 ಮಂದಿಗೆ ಸೋಂಕು ಬಂದಿದೆ. ಇವರೆಲ್ಲರಿಗೂ ಸೋಂಕಿತರ ಸಂಪರ್ಕದಿಂದ ಸೋಂಕು ಹರಡಿರುವುದು ಖಚಿತವಾಗಿದೆ.

ADVERTISEMENT

ಕೋಲಾರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 5 ಮಂದಿಗೆ, ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ ಒಬ್ಬರಿಗೆ ಹಾಗೂ ಸೋಂಕಿತರ ಸಂಪರ್ಕದಿಂದ 11 ಮಂದಿಗೆ ಸೋಂಕು ಹರಡಿದೆ.

ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದ್ದು, ಇವರಿಬ್ಬರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

82 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣ ಕೊಂಚ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 82 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 31 ಮಂದಿ, ಮಾಲೂರು ತಾಲ್ಲೂಕಿನ 15, ಬಂಗಾರಪೇಟೆ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 8, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 10 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.