ADVERTISEMENT

ಕೋಲಾರ | ಬಾಡಿಗೆ ಕಟ್ಟಡದಲ್ಲಿ 462 ಅಂಗನವಾಡಿ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 16:52 IST
Last Updated 12 ಡಿಸೆಂಬರ್ 2023, 16:52 IST
ಕೋಲಾರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭೆ ನಡೆಯಿತು
ಕೋಲಾರದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭೆ ನಡೆಯಿತು   

ಕೋಲಾರ: ‘ಜಿಲ್ಲೆಯಲ್ಲಿ ಒಟ್ಟು 2,180 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ ‌ಬಾಡಿಗೆ ಕಟ್ಟಡದಲ್ಲಿ 462 ಅಂಗನವಾಡಿಗಳಿವೆ. ಹೀಗಾಗಿ, ಬಾಕಿ ಇರುವ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೇಗನೇ ಪೂರ್ಣಗೊಳಿಸಿ’ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ನಿವೇಶನ ಲಭ್ಯತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲ್ಲೂಕುವಾರು ನಿವೇಶನ, ಕಟ್ಟಡ ಇರುವ ಹಾಗೂ ಇಲ್ಲದೆ ಇರುವ ಅಂಗನವಾಡಿ ಕೇಂದ್ರಗಳ ಬಗ್ಗೆ ಮಾಹಿತಿ ಪಡೆದರು. ‌

ADVERTISEMENT

‘ತಮ್ಮ ಶಾಲಾ ವ್ಯಾಪ್ತಿಯಲ್ಲಿ ಇರುವ ಅಂಗನವಾಡಿ ಕಟ್ಟಡಗಳ ಬಗ್ಗೆ ಶಿಕ್ಷಣ ಇಲಾಖೆಯವರ ಜೊತೆ ಮಾತನಾಡಿ ತಮ್ಮ ಹಂತದಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ’ ಎಂದರು.

‘ನಗರ ಪ್ರದೇಶ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಹೊಸ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಖಾಲಿ ಸ್ಥಳವನ್ನು ನೀಡುವಂತೆ ಹಾಗೂ ಕಟ್ಟಡ ಕಾಮಗಾರಿಗಳು ಪೂರ್ಣಗೊಂಡಿರುವ ಹೊಸ ಕಟ್ಟಡಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಸ್ತಾಂತರಿಸಲು’ ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ ಶಾಸಕರು ಹಾಗೂ ಸಂಸದರ ಅನುದಾನದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ಪಟ್ಟಿ ಮಾಡಿ ಮುಂದಿನ ಸಭೆಗೆ ಬರುವ ಮುನ್ನ ವರದಿಯನ್ನು ಸಲ್ಲಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸವಂತಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಂಶಿಕೃಷ್ಣ, ಡಿಡಿ‌ಪಿಐ ಕೃಷ್ಣಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಇ‌ ಗಳು, ಸಿಡಿಪಿ‌ಒ‌ಗಳು, ನಗರಸಭೆ ಹಾಗೂ ಪುರಸಭೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.