ADVERTISEMENT

ಕೋಲಾರ: ಮತ್ತೆ 59 ಮಂದಿಗೆ ಸೋಂಕು

ಜಿಲ್ಲೆಯಲ್ಲಿ 777ಕ್ಕೆ ಏರಿದ ಸಕ್ರಿಯ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 14:04 IST
Last Updated 21 ಆಗಸ್ಟ್ 2020, 14:04 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 59 ಮಂದಿಗೆ ಕೊರೊನಾ ಹರಡಿರುವುದು ಶುಕ್ರವಾರ ದೃಢಪಟ್ಟಿದ್ದು. ಸಕ್ರಿಯ ಸೋಂಕಿತರ ಸಂಖ್ಯೆ 777ಕ್ಕೆ ಏರಿಕೆಯಾಗಿದೆ.

ವಿಷಮ ಶೀತ ಜ್ವರವು ಜಿಲ್ಲೆಗೆ ಆತಂಕಕಾರಿಯಾಗಿ ಪರಿಣಮಿಸಿದೆ. ವಿಷಮ ಶೀತ ಜ್ವರವಿರುವ 49 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ 7 ಮಂದಿಗೆ ಸೋಂಕು ಬಂದಿದೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ 3 ಮಂದಿಗೆ ಸೋಂಕು ತಗುಲಿದೆ.

ಕೋಲಾರ: ತಾಲ್ಲೂಕಿನಲ್ಲಿ ಅತಿ ಹೆಚ್ಚು 40 ಮಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ವಿಷಮ ಶೀತ ಜ್ವರಪೀಡಿತ 35 ಮಂದಿ, ಸೋಂಕಿತರ ಸಂಪರ್ಕದಿಂದ 3 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಇಬ್ಬರಿಗೆ ಸೋಂಕು ಹರಡಿದೆ.

ADVERTISEMENT

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 4 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಬಂದಿದೆ. ಬಂಗಾರಪೇಟೆ ತಾಲ್ಲೂಕಿನ 3 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇವರೆಲ್ಲರೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ.

ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 6 ಮಂದಿ ಮತ್ತು ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಹರಡಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.