ADVERTISEMENT

ಬಿಜೆಪಿಗೆ ಪೂರಕ ವಾತಾವರಣ: ಗೆಲುವು ನಿಶ್ಚಿತ

ಸ್ವಂತ ಬಲದ ಮೇಲೆ ಗೆಲ್ಲುತ್ತೇವೆ: ಆರೋಗ್ಯ ಸಚಿವ ಸುಧಾಕರ್‌ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 14:31 IST
Last Updated 6 ಡಿಸೆಂಬರ್ 2021, 14:31 IST
ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಕೋಲಾರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು
ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಕೋಲಾರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು   

ಕೋಲಾರ: ‘ಕ್ಷೇತ್ರದಲ್ಲಿ ಮೂರೂ ಪಕ್ಷಗಳ ನಡುವೆ ನೇರ ಹಣಾಹಣಿಯಿದ್ದು, ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವು ನಿಶ್ಚಿತ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ, ‘ವಿಧಾನ ಪರಿಷತ್ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಅವಳಿ ಜಿಲ್ಲೆಯಲ್ಲಿ ಬಿಜೆಪಿಗೆ ಪೂರಕ ವಾತಾವರಣವಿದ್ದು, ನಮ್ಮ ಅಭ್ಯರ್ಥಿ ಸ್ವಂತ ಬಲದ ಮೇಲೆ ಗೆಲ್ಲುತ್ತಾರೆ. ಪಕ್ಷದ ಅಭ್ಯರ್ಥಿ ಬಗ್ಗೆ ಮತದಾರರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ’ ಎಂದು ಹೇಳಿದರು.

‘ನಮ್ಮ ಅಭ್ಯರ್ಥಿ ವೇಣುಗೋಪಾಲ್‌ ವೃತ್ತಿಯಿಂದ ವೈದ್ಯರಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ಸೇವೆ ಸಲ್ಲಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಜನಪರ ಯೋಜನೆಗಳನ್ನು ನೀಡಿವೆ. ಪ್ರಧಾನಿ ಮೋದಿ, ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಸರ್ಕಾರದ ಸಾಧನೆಯೇ ನಮಗೆ ಶ್ರೀರಕ್ಷೆ’ ಎಂದರು.

ADVERTISEMENT

‘ಕೋವಿಡ್‌ ಸಂಕಷ್ಟದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡಿವೆ. ಆರ್ಥಿಕ ಸಂಕಷ್ಟದ ನಡುವೆಯೂ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸಿಲ್ಲ. ನೌಕರರಿಗೆ ವೇತನ ಕಡಿತಗೊಳಿಸಿಲ್ಲ. ರಾಜ್ಯ ಸರ್ಕಾರವು ಅವಿಭಜಿತ ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ನೀರಾವರಿ ಯೋಜನೆಗಳಿಗೆ ಕೊಟ್ಟಿದೆ. ಎತ್ತಿನಹೊಳೆ ಯೋಜನೆಗೆ ವಿಶೇಷ ಅನುದಾನ ನೀಡಿ ಕಾಮಗಾರಿ ಚುರುಕುಗೊಳಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ’ ಎಂದು ವಿವರಿಸಿದರು.

ಕೈಗಾರಿಕಾ ಪ್ರದೇಶ: ‘ಸರ್ಕಾರ ಅವಳಿ ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶಕ್ಕೆ ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರು, ಕೆಜಿಎಫ್, ಮುಳಬಾಗಿಲು, ಕೋಲಾರ ಮತ್ತು ಮಾಲೂರು ತಾಲ್ಲೂಕಿನ ವಿವಿಧೆಡೆ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸಲು ಮುಂದಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಎರಡೂ ಜಿಲ್ಲೆಯ ವಿದ್ಯಾವಂತ ಯುವಕ ಯುವತಿಯರಿಗೆ ಭವಿಷ್ಯದಲ್ಲಿ ಉದ್ಯೋಗ ಸಿಗಲಿದೆ’ ಎಂದು ಮಾಹಿತಿ ನೀಡಿದರು.

‘ಗೋದಾವರಿ ಮತ್ತು -ಕೃಷ್ಣಾ ನದಿ ನೀರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಹರಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ತಿರುಪತಿಯಲ್ಲಿ ಆಂಧ್ರ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರೊಂದಿಗೆ ಚರ್ಚಿಸಿದ್ದಾರೆ. ಈ ಬಗ್ಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಸದ್ಯದಲ್ಲೇ ಅಧಿಕೃತವಾಗಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತಾರೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಎಸ್.ಮುನಿಸ್ವಾಮಿ, ರಾಜ್ಯ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಚ್.ನಾಗೇಶ್, ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ವರ್ತೂರು ಪ್ರಕಾಶ್, ಮಂಜುನಾಥ್‌ಗೌಡ, ವೈ.ಸಂಪಂಗಿ, ಅಭ್ಯರ್ಥಿ ಡಾ.ಕೆ.ಎನ್.ವೇಣುಗೋಪಾಲ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.