ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ: ಕೇಂದ್ರದ ಮಾಜಿ ಸಚಿವ ಮುನಿಯಪ್ಪ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 17:50 IST
Last Updated 14 ಅಕ್ಟೋಬರ್ 2020, 17:50 IST

ಕೋಲಾರ: ‘ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆಯಿದ್ದು, ವಿಧಾನಸಭೆ ಉಪ ಚುನಾವಣೆ ಹಾಗೂ ವಿಧಾನ ಪರಿಷತ್‌ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ’ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದೆಲ್ಲೆಡೆ ಪ್ರವಾಸ ಕೈಗೊಂಡು ಪಕ್ಷ ಸಂಘಟಿಸುತ್ತಿದ್ದೇನೆ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಟೀಕಿಸಿದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರು ಸೇರಿದಂತೆ ಎಲ್ಲಾ ವರ್ಗದವರಿಗೆ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದರು. ಭವಿಷ್ಯದಲ್ಲಿ ಬೇರೆ ಯಾರೋ ಸಿದ್ದರಾಮಯ್ಯ ಅವರಂತೆ ಆಡಳಿತ ನೀಡಲು ಸಾಧ್ಯವಿಲ್ಲ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

‘ಜನರಿಗೆ ರಾಜಕೀಯವಾಗಿ ಕಾಂಗ್ರೆಸ್‌ ಪಕ್ಷ ಬಿಟ್ಟರೆ ಪರ್ಯಾಯ ಆಯ್ಕೆಯಿಲ್ಲ. ಇತರೆ ಪಕ್ಷಗಳ ಆಡಳಿತ ವೈಫಲ್ಯದಿಂದ ಬೇಸತ್ತಿರುವ ಜನರು ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುತ್ತಾರೆ. ಜನರು ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ತುಂಬಲಿದ್ದು, ಶಿರಾ ಮತ್ತು ರಾಜರಾಜೇಶ್ವರಿನಗರ ವಿಧಾನಸಭೆ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಖಂಡಿತ ಗೆಲ್ಲುತ್ತಾರೆ’ ಎಂದು ಹೇಳಿದರು.

ಭರವಸೆ ಹುಸಿ: ‘ರಾಜ್ಯದ ಜನ ಬಿಜೆಪಿಗೆ ಅಧಿಕಾರ ನೀಡಿ ಬೇಸತ್ತಿದ್ದಾರೆ. ಚುನಾವಣೆಗೂ ಮುನ್ನ ಬಿಜೆಪಿ ನಾಯಕರು ನೀಡಿದ್ದ ಭರವಸೆಗಳೆಲ್ಲಾ ಹುಸಿಯಾಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಡಿಸೆಂಬರ್‌ ವೇಳೆಗೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಸಂಘಟಿತರಾಗಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು’ ಎಂದು ಸಲಹೆ ನೀಡಿದರು.

‘ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್‌ಬಾಬು ಅವರ ಗೆಲುವಿಗೆ ಪಕ್ಷದ ಎಲ್ಲಾ ವಿಭಾಗಗಳ ಪದಾಧಿಕಾರಿಗಳು ಒಗ್ಗೂಡಿ ಶ್ರಮಿಸಬೇಕು. ಜಿಲ್ಲೆಯಲ್ಲಿ ಅವರಿಗೆ ಹೆಚ್ಚಿನ ಮತ ಕೊಡಿಸುವ ಮೂಲಕ ಪಕ್ಷದ ಅಸ್ತಿತ್ವ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದು ತಿಳಿಸಿದರು.

ಖಂಡಿತ ಗೆಲ್ಲುತ್ತೇನೆ: ‘ನಾನು ಹಿಂದೆ ವಿಧಾನ ಪರಿಷತ್‌ ಸದಸ್ಯನಾಗಿದ್ದ ಸಂದರ್ಭದಿಂದಲೂ ಆಗ್ನೇಯ ಪದವೀಧರರ ಕ್ಷೇತ್ರದ ಎಲ್ಲಾ ಜಿಲ್ಲೆಗಳ ಜತೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಈ ಬಾರಿ ಕ್ಷೇತ್ರದ ವ್ಯಾಪ್ತಿಯ 5 ಜಿಲ್ಲೆಗಳಲ್ಲೂ ಸಕಾರಾತ್ಮಕ ಬೆಂಬಲ ವ್ಯಕ್ತವಾಗಿದ್ದು, ಚುನಾವಣೆಯಲ್ಲಿ ಖಂಡಿತ ಗೆಲ್ಲುತ್ತೇನೆ’ ಎಂದು ರಮೇಶ್‌ಬಾಬು ಹೇಳಿದರು.

‘ನಗರಸಭೆಗಳು ಮತ್ತು ಪುರಸಭೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಬಗ್ಗೆ ಗಮನ ಹರಿಸಲಾಗಿದೆ. ಬಂಗಾರಪೇಟೆ, ಶ್ರೀನಿವಾಸಪುರ ಮತ್ತು ಮಾಲೂರು ಪುರಸಭೆ, ಕೆಜಿಎಫ್‌ ನಗರಸಭೆಯಲ್ಲಿ ಕಾಂಗ್ರೆಸ್‌ ಆಡಳಿತದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಕೋಲಾರ ಮತ್ತು ಮುಳಬಾಗಿಲು ನಗರಸಭೆಯಲ್ಲಿ ಕಾಂಗ್ರೆಸ್‌ ಪಕ್ಷೇತರ ಸದಸ್ಯರ ಬೆಂಬಲ ಪಡೆದು ಅಧಿಕಾರ ಹಿಡಿಯಲಿದೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ವಿವರಿಸಿದರು.

ಆಗ್ನೇಯ ಪಧವೀದರರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಮೇಶ್‌ಬಾಬು, ಮಾಜಿ ಸಚಿವ ನಿಸಾರ್‌ ಅಹಮ್ಮದ್, ಕಾಂಗ್ರೆಸ್‌ ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರಾದ ಉದಯ್‌ಶಂಕರ್, ಪ್ರಸಾದ್‌ಬಾಬು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.