ADVERTISEMENT

ಕೋಲಾರ: ಬ್ಯಾಲವಿವಾಹ ಬೆಂಬಲಿಸಿದ್ದಾರೆಂದು ಶಾಸಕ ನಂಜೇಗೌಡ ವಿರುದ್ಧ ಎಎಪಿ ದೂರು

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 16:13 IST
Last Updated 2 ಜುಲೈ 2025, 16:13 IST
ಕೋಲಾರದಲ್ಲಿ ಬುಧವಾರ ಆಮ್‌ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ವೆಂಕಟಾಚಲಪತಿ ನೇತೃತ್ವದಲ್ಲಿ ಮುಖಂಡರು ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಗಲ್‌ಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದರು
ಕೋಲಾರದಲ್ಲಿ ಬುಧವಾರ ಆಮ್‌ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ವೆಂಕಟಾಚಲಪತಿ ನೇತೃತ್ವದಲ್ಲಿ ಮುಖಂಡರು ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಗಲ್‌ಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದರು   

ಕೋಲಾರ: ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನೆ (ಕೆಡಿಪಿ) ಸಭೆಯಲ್ಲಿ ಶಾಸಕ ಕೆ.ವೈ.ನಂಜೇಗೌಡ ಅವರು ಬಾಲ್ಯವಿವಾಹ ಪ್ರೋತ್ಸಾಹಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖಂಡರು ನಗರದ ಗಲ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದರು.

‘18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡಬಾರದೆಂದು ಪ್ರಬಲ ಕಾಯ್ದೆ ಇದೆ. ಆದರೆ, ನಂಜೇಗೌಡರು ಅದನ್ನು ಅಣಕಿಸುವಂತೆ ಕೆಡಿಪಿ ಸಭೆಯಲ್ಲಿ ಮಾತನಾಡಿದ್ದಾರೆ. ಹೀಗಾಗಿ, ಅವರ ವಿರುದ್ಧ ದೂರು ನೀಡಲು ಬಂದಿದ್ದೇವೆ. ಆದರೆ, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಎಎಪಿ ಜಿಲ್ಲಾ ಅಧ್ಯಕ್ಷ ವೆಂಕಟಾಚಲಪತಿ ಆರೋಪಿಸಿದರು.

‘ಬಾಲ್ಯವಿವಾಹ ಸಂಬಂಧ ಕ್ರಮ ಕೈಗೊಳ್ಳುತ್ತಿರುವ ಜಿಲ್ಲಾ ಮಹಿಳಾ ರಕ್ಷಣಾ ಘಟಕದ ಅಧಿಕಾರಿಗಳ ವಿರುದ್ಧ ನಂಜೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾಖಲೆ ಸರಿಯಾಗಿ ಪರಿಶೀಲಿಸದೆ ಜೈಲಿಗೆ ಕಳಿಸುತ್ತಿರುವೆ ಎಂದು ಬೈಯ್ದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಬಾಲ್ಯವಿವಾಹ ಸಮರ್ಥಿಸುವ ರೀತಿ ಮಾತನಾಡಿದ್ದಾರೆ’ ಎಂದು ದೂರಿದರು.

ADVERTISEMENT

‘ಕೂಡಲೇ ಪ್ರಕರಣ ದಾಖಲಿಸಿಕೊಂಡು ಕ್ರಮ ವಹಿಸಬೇಕು’ ಎಂದು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.