ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಬಳಸಿಕೊಳ್ಳಬಾರದೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಆಮ್ ಆದ್ಮಿ ಪಾರ್ಟಿ ಜಿಲ್ಲಾ ಅಧ್ಯಕ್ಷ ವೆಂಕಟಾಚಲಪತಿ ಮಾತನಾಡಿ, ‘ಪ್ರಸ್ತುತ ಸಾಲಿನ ಬಜೆಟ್‍ನಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲು ಇಟ್ಟಿದ್ದ ₹ 42 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ಸುಮಾರು ₹ 11 ಸಾವಿರ ಕೋಟಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿರುವುದು ಖಂಡನೀಯ’ ಎಂದರು.
ಯಾವುದೇ ಕಾರಣಕ್ಕೂ ದಲಿತರಿಗೆ ಮೀಸಲು ಇಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು. ಸಂವಿಧಾನದ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ಗೌರವಿಸಿ ದಲಿತರಿಗೆ ಮೀಸಲು ಇಟ್ಟಿರುವ ಹಣವನ್ನು ದಲಿತ ಸಮುದಾಯಗಳ ಅಭಿವೃದ್ಧಿಗೆ ಮಾತ್ರ ಬಳಸಬೇಕೆಂದು ಒತ್ತಾಯಿಸಿದರು.
ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.
ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಬಾಲಕೃಷ್ಣ,ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರ್, ಮುಖಂಡರಾದ ಶೇಷನ್, ಗೋಪಾಲ್, ವೇಣು ಗೋಪಾಲ್, ಖಾದೀರ್ ಬಾಷಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.