ADVERTISEMENT

ಕೋಲಾರ: ಕೋವಿಡ್‌ 3ನೇ ಅಲೆ ನಿರ್ವಹಣೆಗೆ ಕ್ರಮ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 14:05 IST
Last Updated 2 ಆಗಸ್ಟ್ 2021, 14:05 IST

ಕೋಲಾರ: ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಪ್ರಾಥಮಿಕ ಆರೋಗ್ಯ ಕೇಂದ್ರವಾರು ಕ್ಷೇತ್ರ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯು 18 ವರ್ಷದೊಳಗಿನ ಮಕ್ಕಳ ಮನೆ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರತಿ ಮನೆಯ ಸಮೀಕ್ಷೆ ನಡೆಸಿ ಮಕ್ಕಳ ಪೂರ್ಣ ವಿವರ ಪಡೆದು ತೀವ್ರ ಅಪೌಷ್ಟಿಕ ಮತ್ತು ಇತರೆ ಅನಾರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್ 3ನೇ ಅಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಸ್ಪಷ್ಪಪಡಿಸಿದ್ದಾರೆ.

ADVERTISEMENT

ಜಿಲ್ಲೆಯ ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪ್ರತ್ಯೇಕ ಕೋವಿಡ್ ವಾರ್ಡ್ ತೆರೆಯಲಾಗಿದೆ. ಜತೆಗೆ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧ, ವೈದ್ಯಕೀಯ ಸಲಕರಣೆ ಕಾಯ್ದಿರಿಸಲಾಗಿದೆ. ಕೋವಿಡ್ ಲಸಿಕೆ ಪಡೆಯದ ಪೋಷಕರನ್ನು ಗುರುತಿಸಿ ಅವರಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಆದ್ಯತೆ ಮೇರೆಗೆ 2ನೇ ಡೋಸ್ ಪಡೆಯುವವರನ್ನು ಪ್ರತ್ಯೇಕಗೊಳಿಸಿ ಲಸಿಕೆ ಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಲಸಿಕೆ ನೀಡಲಾಗುತ್ತಿದೆ. ಕೆಜಿಎಫ್‌ ಮತ್ತು ಮುಳಬಾಗಿಲು ಗಡಿ ಭಾಗದ ಮೂಲಕ ಬರುವ ವಾಹನ ಸವಾರರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಬಂಗಾರಪೇಟೆ ಮತ್ತು ಕೆಜಿಎಫ್‌ ರೈಲು ನಿಲ್ದಾಣದಲ್ಲಿ ಪ್ರತಿ ಪ್ರಯಾಣಿಕರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

5ಕ್ಕಿಂತ ಹೆಚ್ಚು ಸೋಂಕಿನ ಪ್ರಕರಣ ವರದಿಯಾಗುವ ಪ್ರದೇಶವನ್ನು ನಿರ್ಬಂಧಿತ ಪ್ರದೇಶವಾಗಿ ಘೋಷಿಸಲಾಗುತ್ತಿದೆ. ಜಾತ್ರೆ, ಹೆಚ್ಚು ಜನ ಸೇರುವ ಸಮಾರಂಭಗಳ ಮಾಹಿತಿ ಪಡೆದು ಜನದಟ್ಟಣೆ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜನಸಂದಣಿ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಮಾಸ್ಕ್‌ ಧರಿಸದವರಿಗೆ ದಂಡ ವಿಧಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.