ADVERTISEMENT

ಯೋಜನೆ ಅನುಷ್ಟಾನದಲ್ಲಿ ನಿರ್ಲಕ್ಷ ತೋರಿದರೆ ಕ್ರಮ: ಶಾಸಕ ಕೆ.ಶ್ರೀನಿವಾಸಗೌಡ

​ಪ್ರಜಾವಾಣಿ ವಾರ್ತೆ
Published 1 ಜನವರಿ 2020, 12:49 IST
Last Updated 1 ಜನವರಿ 2020, 12:49 IST
ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆದ ಅಲ್ಪಸಂಖ್ಯಾತರ ಅಭಿವೃದ್ಧಿಯ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಮಾತನಾಡಿದರು.
ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆದ ಅಲ್ಪಸಂಖ್ಯಾತರ ಅಭಿವೃದ್ಧಿಯ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಮಾತನಾಡಿದರು.   

ಕೋಲಾರ: ‘ಯೋಜನೆಗಳ ಪ್ರಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಸಮರ್ಕವಾಗಿ ತಲುಪಿಸಲು ಅಧಿಕಾರಿಗಲು ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸೂಚಿಸಿದರು.

ನಗರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಸಂಜೆ ನಡೆದ ಅಲ್ಪಸಂಖ್ಯಾತರ ಅಭಿವೃದ್ಧಿಯ ಹೊಸ ೧೫ ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಅಲ್ಪ ಸಂಖ್ಯಾತರು ಗ್ರಾಮೀಣ ಭಾಗಗಳಲ್ಲೂ ವಾಸವಿದ್ದಾರೆ. ಅವರರಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಬೆಕು’ ಎಂದರು.

‘ಸಮಾಜದಲ್ಲಿನ ಯಾವುದೇ ಸಮುದಾಯದ ಮಕ್ಕಳು ಜೀವನ ರೂಪಿಸಿಕೊಳ್ಳಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ಅಲ್ಪ ಸಂಖ್ಯಾತರ ಮಕ್ಕಳಿಗೆ ಸರಿಯಾದ ಪ್ರೋತ್ಸಾಹ ದೊರೆಯದ ಕಾರಣ ಬಹುತೇಕ ಮಂದಿ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಗೆ ವಿದ್ಯಾಭ್ಯಾಸ ನಿಲ್ಲಿಸುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

ADVERTISEMENT

‘ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಅಲ್ಪ ಸಂಖ್ಯಾತರು ವಾಸ ಮಾಡುತ್ತಿದ್ದಾರೆ. ಇಲಾಖೆಯಿಂದ ಬಿಡುಗಡೆಯಾಗಿರುವ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಇದರಲ್ಲಿ ತಾರತಮ್ಯ ಮಾಡಿದರೆ ಅಪಾಯ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಮುಸ್ಲಿಂರು ಇತ್ತೀಚಿನ ದಿನಗಳಲ್ಲಿ ಮಕ್ಕಳನ್ನು ಉರ್ದು ಶಾಲೆಗಳ ಬದಲಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದಾಖಲು ಮಾಡುತ್ತಿದ್ದಾರೆ. ಅವರನ್ನು ಸರ್ಕಾರಿಗಳಿಗೆ ದಾಖಲು ಮಾಡಲು ಪೋಷಕರಿಗೆ ಸರ್ಕಾರದಿಂದ ದೊರೆಯುವ ಯೋಜನೆಗಳ ಬಗ್ಗೆ ಅರಿವು ಮೂಡಿಸಿ, ಮುಚ್ಚುವ ಹಂತದಲ್ಲಿರುವ ಉರ್ದು ಶಾಲೆಗಳನ್ನು ಪುನರಾರಂಭಿಸಬೇಕು’ ಎಂದು ತಾಕೀತು ಮಾಡಿದರು.

‘ಶಾಲೆಗಳಲ್ಲಿ ಕಡಿಮೆ ಮಕ್ಕಳಿದ್ದರೆ ಅಂತಹ ಶಾಲೆಗಳನ್ನು ಗುರುತಿಸಿ, ಮಕ್ಕಳಿಗೆ ಒಂದು ಕಡೆ ವ್ಯವಸ್ಥೆ ಮಾಡಬೇಕು. ಶಿಕ್ಷಕರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕು. ಕಾಲೇಜು ವೃತ್ತ, ಹೋಟೆಲ್‌ಗಳಲ್ಲಿ ಟೈಂ ಪಾಸ್ ಮಾಡಿಕೊಂಡಿರುವ ಶಿಕ್ಷಕರಿಗೆ ಕೆಲಸವಿಲ್ಲವೇನು’ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ‘ವರ್ಗಾವಣೆ ಸಮಯದಲ್ಲಿ ಅಧಿಕಾರಿಗಳಿಗೆ ಕೆಲ ಶಿಕ್ಷಕರು ಬೆದರಿಕೆ ಹಾಕಿದ್ದಾರೆ. ಮತ್ತೊಂದು ಕಡೆ ವರ್ಗಾವಣೆ ಮಾಡಿದರೆ ಒತ್ತಡ ಹಾಕಿ ಸ್ಥಳದಲ್ಲೆ ಉಳಿದುಕೊಳ್ಳುತ್ತಾರೆ’ ಎಂದು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.

ಇದಕ್ಕೆ ಗರಂ ಅದ ಶಾಸಕ ಕೆ.ಶ್ರೀನಿವಾಸಗೌಡ ಮಾತನಾಡಿ, ‘ಶಿಕ್ಷಕರಲ್ಲಿ ಗುಂಪುಗಳು ಹೆಚ್ಚಾಗಿವೆ, ಇಲಾಖೆ ಅಧಿಕಾರಿಗಳು ಅವರಿಂದ ಕೆಲಸ ಮಾಡಿಸಿಕೊಳ್ಳಲು ಯಾಕೆ ಸಾಧ್ಯವಾಗುತ್ತಿಲ್ಲ’ ಎಂದು ಆಕ್ರೋಶವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾತನಾಡಿ, ‘ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ’ ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ ಒಟ್ಟು 2.29 ಲಕ್ಷ ಅಲ್ಪಸಂಖ್ಯಾತರಿದ್ದಾರೆ. ಅಲ್ಪಸಂಖ್ಯಾತರ ಹಾಸ್ಟೆಲ್‌ಗಳು, ಶಾಲಾ ಕಾಲೇಜುಗಳ ನಿರ್ಮಾಣಕ್ಕೆ ಜಾಗವನ್ನು ನೀಡಲಾಗಿದೆ. ನಿರ್ಮಾಹಂತದಲ್ಲಿರುವ ಶಾಲಾ ಕೊಠಡಿಗಳು, ಹಾಸ್ಟೆಲ್‌ಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು’ ಎಂದು ತಾಕೀತು ಮಾಡಿದರು.

‘ಜಿಲ್ಲೆಯಲ್ಲಿ 102 ಅಲ್ಪಸಂಖ್ಯಾತರ ಅಂಗನವಾಡಿಗಳಿದ್ದು, ಇದರಲ್ಲಿ 60ಕ್ಕೆ ಸ್ವತಃ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನ ನೀಡಲಾಗುವುದು. ಇವುಗಳ ನಿರ್ಮಾಣವನ್ನು ನರೇಗಾ ಯೋಜನೆಯಡಿ ನಿರ್ಮಿಸಲು ಕ್ರಮ ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ’ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ವಿ.ದರ್ಶನ್, ಉಪಕಾರ್ಯದರ್ಶಿ ಸಂಜೀವಪ್ಪ, ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕ ರವಿಚಂದ್ರನ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮೈಲೇರಪ್ಪ ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.