ADVERTISEMENT

ಜನಜೀವನಕ್ಕೆ ತಟ್ಟದ ಮುಷ್ಕರದ ಬಿಸಿ

ಬಸ್‌– ಆಟೊ ಸೇವೆ ಅಬಾಧಿತ: ವಾಣಿಜ್ಯ ವಹಿವಾಟು ಸಹಜ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 14:49 IST
Last Updated 8 ಜನವರಿ 2020, 14:49 IST
ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಕೋಲಾರದಲ್ಲಿ ಬುಧವಾರ ಕೆಎಸ್‌ಆರ್‌ಟಿಸಿ ಬಸ್‌ ತಡೆಯಲೆತ್ನಿಸಿದ ಕಾರ್ಮಿಕ ಸಂಘಟನೆ ಸದಸ್ಯರನ್ನು ಪೊಲೀಸರು ಬಂಧಿಸಿ ಎಳೆದೊಯ್ದರು.
ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಕೋಲಾರದಲ್ಲಿ ಬುಧವಾರ ಕೆಎಸ್‌ಆರ್‌ಟಿಸಿ ಬಸ್‌ ತಡೆಯಲೆತ್ನಿಸಿದ ಕಾರ್ಮಿಕ ಸಂಘಟನೆ ಸದಸ್ಯರನ್ನು ಪೊಲೀಸರು ಬಂಧಿಸಿ ಎಳೆದೊಯ್ದರು.   

ಕೋಲಾರ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ನೀಡಿದ್ದ ಸಾರ್ವತ್ರಿಕ ಮುಷ್ಕರದ ಕರೆಗೆ ಜಿಲ್ಲೆಯಲ್ಲಿ ಬುಧವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಜನಜೀವನಕ್ಕೆ ಮುಷ್ಕರದ ಬಿಸಿ ತಟ್ಟಲಿಲ್ಲ.

ಬೆರಳೆಣಿಕೆ ಸಂಘಟನೆಗಳನ್ನು ಹೊರತುಪಡಿಸಿ ಇತರೆ ಸಂಘಟನೆಗಳ ಸದಸ್ಯರು ಹಾಗೂ ಜನರು ಮುಷ್ಕರಕ್ಕೆ ಬೆಂಬಲ ಸೂಚಿಸಲಿಲ್ಲ. ಕಾರ್ಮಿಕ ಸಂಘಟನೆಗಳ ಸದಸ್ಯರು ಕೆಲವೆಡೆ ರಸ್ತೆ ತಡೆ, ಮಾನವ ಸರಪಳಿ, ಬೈಕ್‌ ರ್‌್ಯಾಲಿ, ಪ್ರತಿಭಟನೆ ನಡೆಸಿದ್ದನ್ನು ಹೊರತುಪಡಿಸಿದರೆ ಎಲ್ಲಿಯೂ ಮುಷ್ಕರದ ಛಾಯೆ ಇರಲಿಲ್ಲ.

ವಾಣಿಜ್ಯ ವಹಿವಾಟು ಹಾಗೂ ವಾಹನ ಸಂಚಾರ ಎಂದಿನಂತೆಯೇ ಇತ್ತು. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು, ಆಟೊಗಳು ಪ್ರತಿನಿತ್ಯದಂತೆ ರಸ್ತೆಗಿಳಿದವು. ಹೀಗಾಗಿ ಜನಜೀವನಕ್ಕೆ ತೊಂದರೆಯಾಗಲಿಲ್ಲ. ಕೆಎಸ್‌ಆರ್‌ಟಿಸಿ ಮತ್ತು ಹಳೆ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ದಂಡೇ ಕಂಡುಬಂತು.

ADVERTISEMENT

ಎಪಿಎಂಸಿ, ರೇಷ್ಮೆಗೂಡು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ದಿನನಿತ್ಯದಂತೆ ವಹಿವಾಟು ನಡೆಯಿತು. ಪ್ರಮುಖ ವಾಣಿಜ್ಯ ಸ್ಥಳಗಳಾದ ಎಂ.ಜಿ.ರಸ್ತೆ, ಎಂ.ಬಿ.ರಸ್ತೆ, ಅಮ್ಮವಾರಿಪೇಟೆ, ದೊಡ್ಡಪೇಟೆ, ಹಳೆ ಬಸ್‌ ನಿಲ್ದಾಣ, ಕ್ಲಾಕ್‌ ಟವರ್‌, ಗೌರಿಪೇಟೆಯಲ್ಲಿನ ಅಂಗಡಿಗಳು ತೆರೆದಿದ್ದವು. ತರಕಾರಿ, ಹಾಲು, ದಿನಸಿ ಪದಾರ್ಥ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿಲ್ಲ.

ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಅಂಚೆ ಕಚೇರಿಗಳು ಇಡೀ ದಿನ ಕಾರ್ಯ ನಿರ್ವಹಿಸಿದವು. ಸರ್ಕಾರಿ ಕಚೇರಿಗಳು ಮತ್ತು ಬ್ಯಾಂಕ್‌ಗಳಲ್ಲಿ ಜನಸಂದಣಿ ಸ್ವಲ್ಪ ಕಡಿಮೆಯಿತ್ತು. ಹೋಟೆಲ್‌ಗಳು, ಆಸ್ಪತ್ರೆಗಳು ಮತ್ತು ಔಷಧ ಮಾರಾಟ ಮಳಿಗೆಗಳು ಸೇವೆ ಒದಗಿಸಿದವು. ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ನಡೆಯಿತು. ಪೆಟ್ರೋಲ್‌ ಬಂಕ್‌ಗಳಲ್ಲೂ ವಹಿವಾಟು ಸಹಜವಾಗಿತ್ತು. ವಾಹನ ಸವಾರರು ಸಾಲಿನಲ್ಲಿ ನಿಂತು ಪೆಟ್ರೋಲ್‌ ಮತ್ತು ಡೀಸೆಲ್‌ ಹಾಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.

ಹಾಜರಾತಿ ಕಡಿಮೆ: ಜಿಲ್ಲೆಯಾದ್ಯಂತ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಪ್ರತಿನಿತ್ಯದಂತೆ ತರಗತಿಗಳು ನಡೆದವು. ಜಿಲ್ಲಾಡಳಿತವು ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಮುಂಚಿತವಾಗಿ ತಿಳಿಸಿತ್ತು. ಆದರೂ ಮುಷ್ಕರದ ಗೊಂದಲದಿಂದಾಗಿ ಸಾಕಷ್ಟು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಗೈರಾಗಿದ್ದರಿಂದ ಹಾಜರಾತಿ ಕಡಿಮೆಯಿತ್ತು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು), ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ, ಸಿಪಿಎಂ, ಬೆಮಲ್ ನೌಕರರ ಸಂಘ, ರೈತ ಸಂಘ ಮತ್ತು ಹಸಿರು ಸೇನೆ, ಕರ್ನಾಟಕ ಪ್ರಾಂತ ರೈತ ಸಂಘ, ಅಂಗನವಾಡಿ ನೌಕರರ ಸಂಘ, ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್‌, ಸಿಐಟಿಯು, ವಿದ್ಯಾರ್ಥಿ ಸಂಘಟನೆಗಳು, ಮಹಿಳಾ ಸಂಘಟನೆಗಳು ವಿವಿಧೆಡೆ ಪ್ರತಿಭಟನೆ ಮಾಡಿ ಬೇಡಿಕೆಗಳ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪೊಲೀಸ್ ಭದ್ರತೆ: ಮುಷ್ಕರದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ರೈಲು ನಿಲ್ದಾಣ, ಸರ್ಕಾರಿ ಕಚೇರಿಗಳು, ಪ್ರಮುಖ ವೃತ್ತ, ಜಂಕ್ಷನ್‌ಗಳು ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಹಿರಿಯ ಪೊಲೀಸ್‌ ಅಧಿಕಾರಿಗಳು ಸೂಕ್ಷ್ಮ ಪ್ರದೇಶಗಳಲ್ಲಿ ನಿಯಮಿತವಾಗಿ ಗಸ್ತು ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.