ADVERTISEMENT

ಹೆರಿಗೆ ಬಳಿಕ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ, ಪ್ರತಿಭಟನೆ

ವೈದ್ಯಕೀಯ ಸಿಬ್ಬಂದಿ ಅಮಾನತಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2021, 15:33 IST
Last Updated 9 ಡಿಸೆಂಬರ್ 2021, 15:33 IST
ಕೋಲಾರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮೃತಪಟ್ಟ ದಿವ್ಯಾ ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಕುಟುಂಬ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಆಸ್ಪತ್ರೆ ಎದುರು ಗುರುವಾರ ಪ್ರತಿಭಟನೆ ಮಾಡಿದರು
ಕೋಲಾರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮೃತಪಟ್ಟ ದಿವ್ಯಾ ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಕುಟುಂಬ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಆಸ್ಪತ್ರೆ ಎದುರು ಗುರುವಾರ ಪ್ರತಿಭಟನೆ ಮಾಡಿದರು   

ಕೋಲಾರ: ನಗರದ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ದಿವ್ಯಾ (22) ಎಂಬುವರು ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಸಂಬಂಧಿಕರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ದಿವ್ಯಾರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಆಸ್ಪತ್ರೆ ಎದುರು ಗುರುವಾರ ಪ್ರತಿಭಟನೆ ಮಾಡಿದರು.

ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಪೂಜಾರಹಳ್ಳಿ ನಿವಾಸಿ ಸುರೇಶ್‌ ಅವರ ಪತ್ನಿಯಾದ ದಿವ್ಯಾ ಅವರನ್ನು ಡಿ.7ರಂದು ಹೆರಿಗೆಗಾಗಿ ಎಸ್‌ಎನ್ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ದಿವ್ಯಾ ಅವರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದರು. ಶಸ್ತ್ರಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವವಾಗಿದ್ದರಿಂದ ದಿವ್ಯಾ ಅವರಿಗೆ ರಕ್ತ ಹಾಕಲಾಗಿತ್ತು.

‘ಹೆರಿಗೆ ಬಳಿಕ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಯು ದಿವ್ಯಾ ಅವರಿಗೆ ಸೂಕ್ತ ಚಿಕಿತ್ಸೆ ನೀಡದೆ ಮತ್ತು ಸರಿಯಾಗಿ ನೋಡಿಕೊಳ್ಳದೆ ನಿರ್ಲಕ್ಷ್ಯ ತೋರಿದರು. ಇದರಿಂದ ಅವರ ದೇಹಸ್ಥಿತಿ ಗಂಭೀರವಾಯಿತು. ಈ ಬಗ್ಗೆ ವೈದ್ಯಕೀಯ ಮಾಹಿತಿ ನೀಡದೆ ದಿವ್ಯಾರನ್ನು ಏಕಾಏಕಿ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆದರೆ, ದಿವ್ಯಾ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ನಸುಕಿನಲ್ಲಿ ಮೃತಪಟ್ಟರು’ ಎಂದು ಪ್ರತಿಭಟನಾನಿರತ ಸಂಬಂಧಿಕರು ಹೇಳಿದರು.

ADVERTISEMENT

‘ದಿವ್ಯಾ ಅವರ ವೈದ್ಯಕೀಯ ವೆಚ್ಚ ಸುಮಾರು ₹ 1.50 ಲಕ್ಷವಾಗಿದೆ. ಆದರೂ ಅವರು ಬದುಕಲಿಲ್ಲ. ಇಂತಹ ಸ್ಥಿತಿ ಯಾರಿಗೂ ಬರಬಾರದು. ಎಸ್‌ಎನ್‌ಆರ್‌ ಆಸ್ಪತ್ರೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ದಿವ್ಯಾ ಮೃತಪಟ್ಟಿದ್ದಾರೆ’ ಎಂದು ಆರೋಪಿಸಿದರು.

‘ದಿವ್ಯಾ ಸಾವಿನ ಸಂಬಂಧ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಬೇಕು. ಜತೆಗೆ ವೈದ್ಯಕೀಯ ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು. ಜತೆಗೆ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಬಳಿಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್‌ ಹಾಗೂ ಡಿವೈಎಸ್ಪಿ ರಮೇಶ್‌ ಅವರು ಪ್ರತಿಭಟನಾಕಾರರ ಮನವೊಲಿಸಿದರು.

ದಿವ್ಯಾರ ಪತಿ ಸುರೇಶ್ ಹಾಗೂ ಸಂಬಂಧಿಕರು, ದಲಿತಪರ ಸಂಘಟನೆಗಳ ಮುಖಂಡರಾದ ನಾಗನಾಳ ಮುನಿಯಪ್ಪ, ರಮೇಶ್, ಕೇಶವ, ಶ್ರೀನಿವಾಸ್, ಪಿ.ಎನ್.ರಮೇಶ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.