ADVERTISEMENT

ಕೋಲಾರ: ಜನವಿರೋಧಿ ನೀತಿ; ಆ.9ಕ್ಕೆ ಪ್ರತಿಭಟನೆ

ಸಭೆಯಲ್ಲಿ ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಜಿಕೃಷ್ಣ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 12:19 IST
Last Updated 20 ಜುಲೈ 2021, 12:19 IST
ಕೋಲಾರದಲ್ಲಿ ಮಂಗಳವಾರ ನಡೆದ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸಭೆಯಲ್ಲಿ ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವಿಜಿಕೃಷ್ಣ ಮಾತನಾಡಿದರು
ಕೋಲಾರದಲ್ಲಿ ಮಂಗಳವಾರ ನಡೆದ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸಭೆಯಲ್ಲಿ ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವಿಜಿಕೃಷ್ಣ ಮಾತನಾಡಿದರು   

ಕೋಲಾರ: ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ದೇಶದೆಲ್ಲೆಡೆ ರೈತ, ಕಾರ್ಮಿಕ, ಕೂಲಿಕಾರರ ಜಂಟಿ ಕ್ರಿಯಾ ಸಮಿತಿ ವತಿಯಿಂದ ಆ.9ರಂದು ಕ್ವಿಟ್ ಇಂಡಿಯಾ ಚಳವಳಿ ಭಾಗವಾಗಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವಿಜಿಕೃಷ್ಣ ತಿಳಿಸಿದರು.

ಇಲ್ಲಿ ಮಂಗಳವಾರ ನಡೆದ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸಭೆಯಲ್ಲಿ ಮಾತನಾಡಿ, ‘ಪ್ರತಿಭಟನೆಯ ಭಾಗವಾಗಿ ಜುಲೈ 25ರಿಂದ ಆಗಸ್ಟ್ 8ರವರೆಗೆ ತಾಲ್ಲೂಕಿನಾದ್ಯಂತ ಪ್ರಚಾರ ಆಂದೋಲನ ನಡೆಸಲಾಗುತ್ತದೆ’ ಎಂದು ಹೇಳಿದರು.

‘ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ರೈತರು, ಕಾರ್ಮಿಕರು ಹಾಗೂ ಕೃಷಿ ಕೂಲಿಕಾರರ ಹಿತ ಕಡೆಗಣಿಸಿ ಜನವಿರೋಧಿ ಕಾಯ್ದೆಗಳನ್ನು ರೂಪಿಸುತ್ತಿದೆ. ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕ ಪ್ರಚಾರ ನಡೆಸುವಂತೆ ಕೇಂದ್ರ ಸಮಿತಿಯ ಸಂಘಟನೆಗಳು ಕರೆ ನೀಡಿವೆ’ ಎಂದು ವಿವರಿಸಿದರು.

ADVERTISEMENT

‘ತಾಲ್ಲೂಕಿನಲ್ಲಿ ವ್ಯಾಪಕ ಪ್ರಚಾರ ನಡೆಸಿ ಜನರು ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಬೇಕು. ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಐತಿಹಾಸಿಕ ಹೋರಾಟವನ್ನು ಬೆಂಬಲಿಸಬೇಕು. ಸರ್ಕಾರಗಳು ಜನಪರ, ರೈತರ ಪರವಾದ ಕಾಯ್ದೆಗಳನ್ನು ರೂಪಿಸಬೇಕು’ ಎಂದು ಒತ್ತಾಯಿಸಿದರು.

‘ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಂತೆ ಮತ್ತು ನಿರ್ದಿಷ್ಟ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸಬೇಕು. ಪ್ರಚಾರದ ನಂತರ ಆ.9ರಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಸಂಘಟನೆಗಳು ಕರೆ ನೀಡಿವೆ. ಪ್ರತಿಭಟನೆ ವೇಳೆ ಕೋವಿಡ್‌ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆಯಾಗಬೇಕು’ ಎಂದರು.

‘ಸರ್ಕಾರಗಳು ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಉತ್ಪನ್ನಗಳಿಗೆ ಕಾನೂನುಬದ್ಧವಾಗಿ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಪಡಿತರ ವ್ಯವಸ್ಥೆಯಲ್ಲಿ ಆಹಾರಧಾನ್ಯಗಳನ್ನು ಉಚಿತವಾಗಿ ನೀಡಬೇಕು. ಆದಾಯ ತೆರಿಗೆ ಮಿತಿಗೆ ಒಳಪಟ್ಟು ಪ್ರತಿಯೊಬ್ಬರಿಗೂ ₹ 10 ಸಾವಿರ ಪರಿಹಾರ ನೀಡಬೇಕು. ಉಚಿತವಾಗಿ ಕೋವಿಡ್‌ ಲಸಿಕೆ ಕೊಡಬೇಕು’ ಎಂದು ಕೆಪಿಆರ್‌ಎಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಆಗ್ರಹಿಸಿದರು.

‘ಸಾರ್ವಜನಿಕ ಉದ್ಯಮೆಗಳ ಖಾಸಗೀಕರಣ ಕೈಬಿಡಬೇಕು. ರಾಜ್ಯದಲ್ಲಿನ ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಕೆಪಿಆರ್‌ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎನ್.ಶ್ರೀರಾಮ್, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಸದಸ್ಯರಾದ ಭೀಮರಾಜ್, ಮಂಜುಳಾ, ಆಶಾ, ಕೆ.ವಿ.ಮಂಜುನಾಥ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.