ADVERTISEMENT

ಕೋಲಾರ: ರೈತರ ರಕ್ಷಣೆಗೆ ನಿಲ್ಲಬೇಕೆಂದು ಮನವಿ

​ಪ್ರಜಾವಾಣಿ ವಾರ್ತೆ
Published 13 ಮೇ 2020, 14:23 IST
Last Updated 13 ಮೇ 2020, 14:23 IST

ಕೋಲಾರ: ಸರ್ಕಾರವು ಕಾರ್ಪೊರೇಟ್ ಕಂಪನಿಗಳು ಹಾಗೂ ವರ್ತಕರನ್ನು ಉದ್ಧಾರ ಮಾಡುವ ಉದ್ದೇಶಕ್ಕೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಹಿರಿಯ ಉಪಾಧ್ಯಕ್ಷ ಕೆ.ಬಿ.ಗೋಪಾಲಕೃಷ್ಣ ಖಂಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕೃಷಿ ಉತ್ಪನ್ನಗಳ ಬೆಲೆ ಕುಸಿದು ರೈತರು ಕಂಗಾಲಾಗಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆಯೇ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಪ್ರಶ್ನಿಸಿದ್ದಾರೆ.

ಸರ್ಕಾರ ಸಂಕಷ್ಟದಲ್ಲಿರುವ ರೈತರ ಕೈಹಿಡಿಯುವ ಬದಲು ಎಪಿಎಂಸಿ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ಧಾರ ಬಂಡವಾಳಶಾಹಿಗಳ ಪರವಾಗಿದೆ. ಬಿಜೆಪಿಯು ದೈತ್ಯ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶಕ್ಕಾಗಿ ತೆರೆಮರೆಯಲ್ಲಿ ಎಪಿಎಂಸಿ ತಿದ್ದುಪಡಿ ಮಸೂದೆ ಜಾರಿಗೊಳಿಸಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ದೇಶದ ಎಪಿಎಂಸಿಗಳು ಜಾಗದ ಕೊರತೆ ಹಾಗೂ ಮೂಲಸೌಕರ್ಯ ಸಮಸ್ಯೆಯಿಂದ ಸೊರಗಿವೆ. ಮಾರುಕಟ್ಟೆಯಲ್ಲಿ ರೈತರ ಆರೋಗ್ಯ ರಕ್ಷಣೆಗೂ ಸೌಲಭ್ಯಗಳಿಲ್ಲ. ಸರ್ಕಾರ ಈ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ಕಾಯ್ದೆಗೆ ತಿದ್ದುಪಡಿ ತಂದು ರೈತರನ್ನು ಹಾಳು ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಮಾವು, ಟೊಮೆಟೊ ಸಂಸ್ಕರಣಾ ಘಟಕ ಹಾಗೂ ಜ್ಯೂಸ್‌ ಕೈಗಾರಿಕೆಗಳನ್ನು ಆರಂಭಿಸಿ ರೈತರ ಹಿತ ಕಾಯಬೇಕಾದ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ತಿದ್ದುಪಡಿ ಮಸೂದೆ ಜಾರಿಯಾದರೆ ಕಾರ್ಪೊರೇಟ್ ಕಂಪನಿಗಳು ಹಾಗೂ ವರ್ತಕರಿಗೆ ಅನುಕೂಲವಾಗುತ್ತದೆ. ಇದರಿಂದ ರೈತರ ರಕ್ಷಣೆ ಅಸಾಧ್ಯ. ಈ ಮಸೂದೆಗೆ ಸಮಾಜದ ಪ್ರತಿಯೊಬ್ಬರೂ ವಿರೋಧ ವ್ಯಕ್ತಪಡಿಸಿ ರೈತರ ರಕ್ಷಣೆಗೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.