ADVERTISEMENT

ನಿವೇಶನ ರಹಿತರಿಗೆ, ಬಡವರಿಗೆ ವಸತಿ ನಿರ್ಮಿಸಿ ಹಂಚಿಕೆ

ಕೆಡಿಪಿ ಸಭೆಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭರವಸೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 5:55 IST
Last Updated 26 ನವೆಂಬರ್ 2025, 5:55 IST
ಬಂಗಾರಪೇಟೆ ನಗರದ ಪುರಸಭೆ ಕಚೇರಿಯಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿದರು
ಬಂಗಾರಪೇಟೆ ನಗರದ ಪುರಸಭೆ ಕಚೇರಿಯಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿದರು   

ಬಂಗಾರಪೇಟೆ: ವಾಸಿಸಲು ಯೋಗ್ಯವಾದಂತ ಸರ್ಕಾರಿ ಜಮೀನಿನಲ್ಲಿ ನಿವೇಶನ ಹೊಂದಿರದ ಹಾಗೂ ಬಡವರಿಗೆ ವಸತಿ ನಿರ್ಮಿಸಿ ಹಂಚಿಕೆ ಮಾಡುವುದಾಗಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭರವಸೆ ನೀಡಿದರು.

ನಗರದ ಪುರಸಭೆ ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ನಗರದ ಸಾರ್ವಜನಿಕ ಆಸ್ಪತ್ರೆ ಮತ್ತು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲ್ಲೂಕಿನಲ್ಲಿ ಈಗಾಗಲೇ ವಸತಿ ರಹಿತ ಫಲಾನುಭವಿಗಳ ಪಟ್ಟಿ ತಯಾರಿಸಲಾಗಿದ್ದು, ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಗೋಮಾಳ ಜಮೀನನ್ನು ಗುರುತಿಸಿ ಒಂದು ವರ್ಷದೊಳಗೆ ಹತ್ತು ಸಾವಿರ ಮನೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಅದಕ್ಕಾಗಿ ಸರ್ಕಾರಿ ಭೂಮಿ ಗುರುತಿಸಲು ತಹಶೀಲ್ದಾರ್ ಅವರಿಗೆ ಜವಾಬ್ದಾರಿ ನೀಡಲಾಗಿದೆ. ನಂತರ ಸರ್ವೆ ಹಾಗೂ ಸ್ಕೆಚ್ ಮಾಡಲು ಎಡಿಎಲ್‌ಆರ್ ಅವರಿಗೆ ವಹಿಸಲಾಗಿದೆ. ನಿವೇಶನ ರಹಿತರು ಇದುವರೆಗೂ ನೊಂದಾಯಿಸಿಕೊಂಡಿಲ್ಲವಾದರೆ, ಅಂತವರು ಆಯಾ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಬಹುದು ಎಂದರು.

ADVERTISEMENT

ಜೆಜೆಎಂ ಯೋಜನೆಗೆ ರಾಜ್ಯ ಸರ್ಕಾರದ ಅನುದಾನ ಬಿಡುಗಡೆಯಾಗಿದ್ದು, ಕೇಂದ್ರದಿಂದ ಅನುದಾನ ಬಿಡುಗಡೆಯಾಗಿಲ್ಲ. ಗ್ರಾಮಗಳಲ್ಲಿ ಕಾಮಗಾರಿ ನಡೆಸಲು ಗುತ್ತಿಗೆದಾರರು ಸಿಮೆಂಟ್ ರಸ್ತೆಗಳನ್ನು ಹಾಳುಮಾಡಿದ್ದು, ಅದನ್ನು ಸರಿಪಡಿಸಲು ಎಇಇ ಅವರಿಗೆ ನಿರ್ದೇಶನ ನೀಡಲಾಗಿದೆ. ಇದರೊಟ್ಟಿಗೆ ನರೇಗಾ ಯೋಜನೆಗೂ ಸಹ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಾಡುತ್ತಿಲ್ಲ, ಇದರಿಂದ ನರೇಗಾ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಎಲ್ಲಾ ಇಲಾಖೆಯಲ್ಲಿ ಮಧ್ಯವರ್ತಿಗಳಿಗೆ ಆಸ್ಪದ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಚೇರಿಗಳಲ್ಲಿ ಸಂಘಟನೆಗಳ ಹೆಸರು ಹೇಳಿಕೊಂಡು ಅಧಿಕಾರಿಗಳನ್ನು ಎದುರಿಸುತ್ತಿರುವವರಿಗೆ ಯಾವುದೇ ರೀತಿ ಭಯಪಡದೆ ನಿಯಮಾನುಸಾರ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆಲಸಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲ್ಲೂಕಿನಲ್ಲಿರುವ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇದರೊಟ್ಟಿಗೆ ಪಶು ವೈದ್ಯ ಇಲಾಖೆಯಲ್ಲಿಯೂ ಸಹ ಪ್ರಮಾಣಪತ್ರವಿಲ್ಲದೆ ವೈದ್ಯ ವೃತ್ತಿ ಮಾಡುತ್ತಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಕಡಿಮೆಯಾಗಿದ್ದು, ಅದನ್ನು ಹೆಚ್ಚಿಸಲು ಮುಖ್ಯೋಪಾಧ್ಯಯರ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ನಗರ ಮತ್ತು ಗ್ರಾಮೀಣ ಭಾಗದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ದೂರುಗಳು ಸಹ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದೆ. ಪುರಸಭೆಯಿಂದ ಬೀದಿನಾಯಿಗಳನ್ನು ಹಿಡಿಯಲು 4 ಭಾರಿ ಟೆಂಡರ್ ಕರೆಯಲಾಗಿತ್ತು, ಆದರೆ ಯಾರು ಮುಂದೆ ಬರಲಿಲ್ಲ. ಸರ್ಕಾರ ನೀಡುವಂತಹ ಅನುದಾನದೊಂದಿಗೆ, ನಾನು ಸಹ ಸ್ವಂತವಾಗಿ ₹20 ಲಕ್ಷ ಹಣ ನೀಡಲಿದ್ದು, ಅಧ್ಯಕ್ಷರು ಮುತುವರ್ಜಿಯಿಂದ ನಾಯಿ ಹಿಡಿಯುವವರನ್ನು ಕರೆತಂದು ಬೀದಿನಾಯಿಗಳನ್ನು ಹಿಡಿದು ಸಮಸ್ಯೆ ಬಗೆಹರಿಸುತ್ತಾರೆ ಎಂದರು.

ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಎನ್.ಸುಜಾತ, ಗ್ರೇಡ್-2 ತಹಶೀಲ್ದಾರ್ ಗಾಯಿತ್ರಿ, ಇಓ ಎಚ್.ರವಿಕುಮಾರ್, ಎಇಇ ರವಿ ಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಪಾರ್ಥಸಾರಥಿ, ಪುರಸಭೆ ಅಧ್ಯಕ್ಷ ಗೋವಿಂದ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.