ಬಂಗಾರಪೇಟೆ: ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳ ಮೋಹದಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸದೆ, ಖಾಸಗಿ ಶಾಲೆಗಳಿಗೆ ದಾಖಲಾತಿ ಮಾಡುತ್ತಿದ್ದಾರೆ. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ದಾಖಲಾತಿ ಪ್ರಮಾಣವು ಕ್ಷೀಣಿಸುತ್ತಿದೆ. ಇದರ ಪರಿಣಾಮ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿರುವುದು ವಿಷಾದದ ಸಂಗತಿಯಾಗಿದೆ.
ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಪೇನಹಳ್ಳಿ ಸರ್ಕಾರಿ ಕನ್ನಡ ಶಾಲೆಯಲ್ಲಿ ಮಕ್ಕಳ ದಾಖಲಾತಿ ಇಲ್ಲದ ಕಾರಣ ಶಾಲೆ ಮುಚ್ಚುವಂತೆ ಡಿಡಿಪಿಐ ಸೂಚನೆ ನೀಡಿದ್ದಾರೆ ಎಂಬ ಸಂಗತಿ ಗೊತ್ತಾಗಿದೆ.
ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸದೆ ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗೆ, ಮಕ್ಕಳು ಕಡಿಮೆಯಾಗುವ ಶಾಲೆ ಅಥವಾ ಮಕ್ಕಳ ದಾಖಲಾತಿಯೇ ಆಗದ ಶಾಲೆಯನ್ನು ಮುಚ್ಚುವ ಅಥವಾ ಇತರ ಶಾಲೆಯೊಂದಿಗೆ ವಿಲೀನ ಮಾಡುವ ಅನಿವಾರ್ಯತೆ ಎದುರಾಗುತ್ತಿದೆ ಎಂದು ಶಿಕ್ಷಕರೊಬ್ಬರು ನೋವು ಹಂಚಿಕೊಂಡರು.
ಈ ಬೆಳವಣಿಗೆ ಕೇವಲ ಒಂದು ಶಾಲೆಗೆ ಸಂಬಂಧಪಟ್ಟ ವಿಷಯವಲ್ಲ. ಇಡೀ ರಾಜ್ಯಕ್ಕೆ ಸಂಬಂಧ ಪಟ್ಟ ವಿಚಾರವಾಗಿದೆ. ಇಡೀ ರಾಜ್ಯದ ಕನ್ನಡ ಮಾಧ್ಯಮದ ಬಹುತೇಕ ಶಾಲೆಗಳ ಪ್ರಸ್ತುತ ಪರಿಸ್ಥಿತಿ ಹೀಗೆಯೇ ಇದೆ. ಹೀಗೆ ಮುಂದುವರೆದರೆ ಮುಂದೊಂದು ದಿನ ಕನ್ನಡ ಭಾಷೆ, ಸಂಸ್ಕೃತಿ, ಕನ್ನಡತನ ನಾಪತ್ತೆಯಾಗುವ ಆತಂಕವಿದೆ. ಇಂಥ ಪರಿಸ್ಥಿತಿಯಿಂದ ರಾಜ್ಯವನ್ನು ರಕ್ಷಿಸಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರ ಒತ್ತಾಯವಾಗಿದೆ.
ಮುಖ್ಯವಾಗಿ ಕನ್ನಡ ಶಾಲೆಗಳ ಅಳಿವಿಗೆ ಕಾರಣಗಳೇನು ಎನ್ನುವುದನ್ನು ಮೊದಲು ಅರಿತುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿನ ದಾಖಲಾತಿ ಕಡಿಮೆಯಾಗಲು ಶಿಕ್ಷಣದ ಗುಣಮಟ್ಟದ ಕೊರತೆಯೇ ಅಥವಾ ಪೋಷಕರಿಗೆ ಇರುವ ಆಂಗ್ಲ ಭಾಷೆ ಮೇಲಿನ ವ್ಯಾಮೋಹವೇ ಇಂಬಿತ್ಯಾದಿಗಳನ್ನು ಗುರುತಿಸಿ, ಸರಿಪಡಿಸುವ ಕೆಲಸವಾಗಬೇಕು ಎಂದು ಜನರ ಒತ್ತಾಯವಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಶಿಕ್ಷಕರಿಗೆ ತರಬೇತಿ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ಕನಿಷ್ಠ 5ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪಡೆಯುವುದನ್ನು ಕಡ್ಡಾಯಗೊಳಿಸಬೇಕು. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಮೀಸಲಾತಿ ಹೆಚ್ಚಿಸುವುದು. ಉದ್ಯೋಗ ಸೇರಿದಂತೆ ಇನ್ನಿತರ ವಿಚಾರಗಳಲ್ಲಿ ಮೊದಲ ಆದ್ಯತೆ ನೀಡುವ ಮೂಲಕ ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸವಾಗಬೇಕು ಎಂಬುದು ಜನರ ಒಕ್ಕೊರಲಿನ ನಿಲುವಾಗಿದೆ.
ಸರ್ಕಾರಿ ಶಾಲೆ ಶಿಕ್ಷಕರೇ ಗ್ರಾಮಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ನಮ್ಮದೇ ಖಾಸಗಿ ಶಾಲೆಗೆ ಮಕ್ಕಳನ್ನು ದಾಖಲಿಸಿ, ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಹೀಗಿದ್ದಾಗ, ಸರ್ಕಾರಿ ಶಾಲೆಗಳ ಮೇಲೆ ಪೋಷಕರಿಗೆ ನಂಬಿಕೆ ಬರುವುದಾದರೂ ಹೇಗೆ ಎಂದು ಹೆಸರು ಹೇಳಲಿಚ್ಚಿಸದ ಪೋಷಕರೊಬ್ಬರು ಬೇಸರ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಇಲ್ಲ. ಇಂಥವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಹೀಗಾದರೆ ಉಳಿದವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಾದರೂ ಹೇಗೆ.– ಹುಣಸನಹಳ್ಳಿ ವೆಂಕಟೇಶ್, ಕರ್ನಾಟಕ ದಲಿತ ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ಮೊಟ್ಟೆ ಹಾಲು ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನಿಲ್ಲಿಸಬೇಕು. ಇದರ ಬದಲಿಗೆ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಾಲೆಗೆ ಅಗತ್ಯವಿರುವ ಮಾನವ ಸಂಪನ್ಮೂಲ ಸೇರಿ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.– ಬಾಲಚಂದ್ರ ಎಂ, ಎಸ್‌ಡಿಎಂಸಿ ಅಧ್ಯಕ್ಷ ಸಾಕರಸನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ
ಖಾಸಗಿ ಶಾಲೆಗಳ ಕಡಿವಾಣಕ್ಕೆ ಪತ್ರ
ನಾಯಿಕೊಡೆಗಳ ರೀತಿ ತಲೆ ಎತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ಮೂಲಕ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಖಾಸಗಿ ಅಥವಾ ಇಂಗ್ಲಿಷ್ ವ್ಯಾಮೋಹವಿರುವ ಪೋಷಕರ ಕುಟುಂಬಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕಡಿತಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಜೈ ಭುವನೇಶ್ವರಿ ಕರುನಾಡ ಸೇವೆ ಎಂಬ ಕನ್ನಡ ಹೋರಾಟ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಅವರು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದಾರೆ.
ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲೇ ದಾಖಲಿಸಬೇಕು ಎಂಬ ನಿಯಮ ರೂಪಿಸಬೇಕು ಎಂಬುದು ಸೇರಿದಂತೆ ಇನ್ನಿತರ ಕಠಿಣ ವಿಧಾನಗಳ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.