ADVERTISEMENT

ಬಂಗಾರಪೇಟೆ: ಕಾರಹಳ್ಳಿ ಗ್ರಾ.ಪಂ ಕಚೇರಿ ಮುಂದೆ ಪ್ರತಿಭಟನೆ

ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಪ್ರತಿಭಟನಕಾರರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 5:26 IST
Last Updated 10 ಜುಲೈ 2025, 5:26 IST
ಬಂಗಾರಪೇಟೆ ತಾಲ್ಲೂಕಿನ ಕಾರಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ನೆರ್ನಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಬಂಗಾರಪೇಟೆ ತಾಲ್ಲೂಕಿನ ಕಾರಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ನೆರ್ನಹಳ್ಳಿ ಗ್ರಾಮಸ್ಥರ ಪ್ರತಿಭಟನೆ   

ಬಂಗಾರಪೇಟೆ: ನೆರ್ನಹಳ್ಳಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಬುಧವಾರ ಕಾರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಾಲ್ಕು ದಿನಗಳಿಂದ ಗ್ರಾಮಕ್ಕೆ ನೀರು ಪೂರೈಕೆಯಾಗದಿದ್ದರೂ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಂದಾಗಲಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. 

ಗ್ರಾಮಸ್ಥರು ಹನಿ ನೀರಿಗೂ ಅಲೆದಾಡುವಂತಾಗಿದೆ. ಗ್ರಾಮದಲ್ಲಿ 200 ಕುಟುಂಬಗಳು ವಾಸಿಸುತ್ತಿದ್ದು, ಬೆಳಗ್ಗೆ ಎದ್ದರೆ ನೀರು ಹಿಡಿಯುವುದೇ ದೊಡ್ಡ ಉದ್ಯೋಗದಂತಾಗಿದೆ. ನೀರಿಗಾಗಿ ನಿತ್ಯ ಪಕ್ಕದ ಗ್ರಾಮಗಳಿಗೆ ಬಿಂದಿಗೆಗಳನ್ನು ಹಿಡಿದು ಅಲೆಯುವ ಅನಿವಾರ್ಯತೆ ಎದುರಾಗಿದೆ. ಗ್ರಾಮದಲ್ಲಿರುವ ಜಲಗಾರ ಕೃಷ್ಣಪ್ಪ ಗ್ರಾಮ ಪಂಚಾಯಿತಿ ಸದಸ್ಯರ ಮಾನಸಿಕ ಕಿರುಕುಳದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಪ್ರತಿಭಟಕಾರರು ದೂರಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜಲಗಾರರನ್ನು ನೇಮಿಸದ ಕಾರಣ ಸಮಸ್ಯೆ ಎದುರಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಜಲಗಾರರ ನಡುವಿನ ಮುಸುಕಿನ ಗುದ್ದಾಟದಿಂದ ಗ್ರಾಮಸ್ಥರು ಸಂಕಷ್ಟಕ್ಕೀಡಾಗಿದ್ದಾರೆ ಎಂದರು.

ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರು ಪಿಡಿಒ ಅವರ ಗಮನಕ್ಕೆ ತಂದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೀರಿನ ಸಮಸ್ಯೆಯನ್ನು ಸರಿಪಡಿಸದಿದ್ದರೆ, ಪ್ರತಿಭಟನೆಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. 

ಸ್ಥಳಕ್ಕೆ ಬಂದ ಪಿಡಿಒ ವೇಣು ನಾಳೆಯೇ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರಿಂದಾಗಿ ಗ್ರಾಮಸ್ಥರು ಪ್ರತಿಭಟನೆಯನ್ನು ಮೊಟಕುಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.