ಬೇತಮಂಗಲ: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ವೈ. ಸಂಪಂಗಿ ಆರೋಪ ಮಾಡಿದರು.
ಕಗ್ಗಲಹಳ್ಳಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಆರ್ಥಿಕ ಸಬಲೀಕರಣ ಮತ್ತು ಪರಿಶಿಷ್ಟರ ಕಾಲೊನಿಗಳ ಅಭಿವೃದ್ಧಿಗೆ ಮೀಸಲಿರುವ ಅನುದಾನವನ್ನು ರಾಜ್ಯ ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ದೂರಿದರು.
ನಿಗಮಗಳಿಗೆ ಇಲ್ಲ ಅನುದಾನ: ಬಿಜೆಪಿ ಸರ್ಕಾರದ ಅವಧಿಯ್ಲಿ ನಿಗಮಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುವ ಮೂಲಕ ಎಲ್ಲ ವರ್ಗದ ಜನರ ಏಳಿಗೆಗೆ ಒತ್ತು ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ನಿಗಮಗಳಿಗೆ ಅನುದಾನ ಸಿಗುತ್ತಿಲ್ಲ. ಬಡವರಿಗೆ ನಿಗಮಗಳಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಜನರಿಗೆ ರಕ್ಷಣೆ ನೀಡಬೇಕಾದ ಅಧಿಕಾರಿಗಳು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ ಎಂದರು.
ವಿದ್ಯುತ್ ಸಂಪರ್ಕದ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ ಇಂಧನ ಇಲಾಖೆಯು ದೊಡ್ಡ ಹಗರಣ ಮಾಡಲು ಹೊರಟಿದೆ. ನೆರೆಯ ರಾಜ್ಯಗಳಲ್ಲಿ ಕೇವಲ ₹900 ಇರುವ ಸ್ಮಾರ್ಟ್ ಮೀಟರ್ ದರವು ರಾಜ್ಯದಲ್ಲಿ ₹10,000 ಇದೆ ಎಂದು ಕಿಡಿಕಾರಿದರು.
ಗೋಷ್ಠಿಯಲ್ಲಿ ಟಿಎಪಿಸಿಎಂಎಸ್ ಉಪಾಧ್ಯಕ್ಷ ಲಕ್ಷ್ಮಿಪತಿ, ನಿರ್ದೇಶಕ ಕೃಷ್ಣಮೂರ್ತಿ, ಪುರುಷೋತ್ತಮ್, ನರಸಿಂಹಪ್ಪ, ಗಂಗುಲ ರೆಡ್ಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.