ADVERTISEMENT

21ಕ್ಕೆ ಬೂತ್ ಕಾರ್ಯಕರ್ತರ ಸಮಾವೇಶ

ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಕಟ್ಟಾ ಸುಬ್ರಮಣ್ಯನಾಯ್ಡು ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2019, 15:56 IST
Last Updated 1 ಫೆಬ್ರುವರಿ 2019, 15:56 IST
ಕೋಲಾರದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಕಟ್ಟಾ ಸುಬ್ರಮಣ್ಯನಾಯ್ಡು ಮಾತನಾಡಿದರು.
ಕೋಲಾರದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಕಟ್ಟಾ ಸುಬ್ರಮಣ್ಯನಾಯ್ಡು ಮಾತನಾಡಿದರು.   

ಕೋಲಾರ: ‘ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಒಳಗೊಂಡಂತೆ ಚಿಕ್ಕಬಳ್ಳಾಪುರದಲ್ಲಿ ಫೆ.21ರಂದು ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಭಾಗವಹಿಸುತ್ತಾರೆ’ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಕಟ್ಟಾ ಸುಬ್ರಮಣ್ಯನಾಯ್ಡು ಹೇಳಿದರು.

ಇಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ಲೋಕಸಭಾ ಚುನಾವಣೆ ಸಿದ್ಧತೆಗಾಗಿ ಜಿಲ್ಲೆ, ಮಂಡಲ ಹಾಗೂ ವಿವಿಧ ಮೋರ್ಚಾ ಪದಾಧಿಕಾರಿಗಳ ಸಭೆ ನಡೆಸಿ ಸಮಾವೇಶದ ಯಶಸ್ವಿಗೊಳಿಸಲು ಸಂಬಂಧಪಟ್ಟವರಿಗೆ ಜವಾಬ್ದಾರಿ ವಹಿಸಲಾಗಿದೆ’ ಎಂದು ತಿಳಿಸಿದರು.

‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಮಾರ್ಚ್ 2ರವರೆಗೆ ವಿವಿಧ ಕಾರ್ಯಕ್ರಮ ನಡೆಸಲಾಗುತ್ತದೆ. ಫೆ.4ರಂದು ಕೋಲಾರದಲ್ಲಿ ಮಹಾಶಕ್ತಿ ಕೇಂದ್ರದ ಸಭೆಯಿದೆ. ಚಿಕ್ಕಬಳ್ಳಾಪುರದಲ್ಲಿ ನಡೆಯುವ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶಕ್ಕೆ ಕೋಲಾರ ಕ್ಷೇತ್ರದಿಂದ 8,500 ಕಾರ್ಯಕರ್ತರನ್ನು ಕರೆದುಕೊಂಡು ಹೋಗಲಾಗುತ್ತದೆ’ ಎಂದು ವಿವರಿಸಿದರು.

ADVERTISEMENT

‘ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಜನರ ಮನೆ ಮನೆಗೆ ತಲುಪಿಸಲು ಫೆ.10ರಿಂದ 28ರವರೆಗೆ ಬಿಜೆಪಿ ಮನೆ ಮನೆ ಸಂಪರ್ಕ ಕಾರ್ಯಕ್ರಮ ನಡೆಸಲಾಗುವುದು. ಕ್ಷೇತ್ರದಲ್ಲಿ 2 ಸಾವಿರ ಯುವಕರನ್ನು ಒಗ್ಗೂಡಿಸಿ ಆಡಳಿತ ಮತ್ತು ಪ್ರತಿಪಕ್ಷದ ನಡುವಿನ ಸಂವಾದ ಮಾದರಿ ಕುರಿತು ಯುವ ಸಂಸತ್ ಕಾರ್ಯಕ್ರಮ ನಡೆಸುತ್ತೇವೆ. ಕಮಲ ಜ್ಯೋತಿ ಕಾರ್ಯಕ್ರಮದಡಿ ಮಹಿಳೆಯರಿಗೆ ಕೇಂದ್ರದ ಸಾಧನೆಗಳ ಮಾಹಿತಿ ನೀಡುತ್ತೇವೆ’ ಎಂದರು.

ಯುವಕರ ರ‍್ಯಾಲಿ: ‘ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಾರ್ಚ್‌ 2ರಂದು ಯುವಕರ ರ‍್ಯಾಲಿ ಆಯೋಜಿಸಲಾಗುತ್ತದೆ. 500 ವಾಹನಗಳಲ್ಲಿ 1 ಸಾವಿರ ಮಂದಿ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತಾರೆ. ಧಾರ್ಮಿಕ, ಶೈಕ್ಷಣಿಕ ವಿಭಾಗದಲ್ಲಿನ ಪ್ರಮುಖ ಮತದಾರರನ್ನು ತಲುಪಲು ಸಾಮಾಜಿಕ ಜಾಲತಾಣ, ಕಾನೂನು ವಿಭಾಗ ಸೇರಿದಂತೆ 4 ವಿಭಾಗ ರಚಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಸಂಪೂರ್ಣ ವಿಫಲ: ‘ರಾಜ್ಯದ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರಿಗೆ ಜನಪರ ಕೆಲಸ ಮಾಡಲು ಮನಸ್ಸಿಲ್ಲ. ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕುಮಾರಸ್ವಾಮಿ ಅವರು ಪ್ರತಿನಿತ್ಯ ತಮ್ಮ ವ್ಯಥೆ ಹೇಳಿಕೊಳ್ಳುತ್ತಿರುವುದನ್ನು ಗಮನಿಸಿದರೆ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದು ಗೊತ್ತಾಗುತ್ತದೆ. ಮುಖ್ಯಮಂತ್ರಿಯವರು ರಾಜೀನಾಮೆ ನೀಡಿ ಸರ್ಕಾರದಿಂದ ಹೊರಬಂದು ಪ್ರತಿಪಕ್ಷ ಸ್ಥಾನದಲ್ಲಿ ಕೂರುವುದು ಒಳ್ಳೆಯದು’ ಎಂದು ಟೀಕಿಸಿದರು.

‘ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದರೂ ಸರ್ಕಾರ ಎಲ್ಲಿಯೂ ಗೋಶಾಲೆ ತೆರೆದಿಲ್ಲ. ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್‌ ನೀರಿನ ವ್ಯವಸ್ಥೆ ಮಾಡಿಲ್ಲ. ಜಾನುವಾರುಗಳಿಗೆ ಮೇವು ವಿತರಣೆ ಮಾಡಿಲ್ಲ. ಕುಮಾರಸ್ವಾಮಿ ಅವರಿಗೆ ಜನ ಹಿತಕ್ಕಿಂತ ಮುಖ್ಯಮಂತ್ರಿಗಾದಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ’ ಎಂದು ವಾಗ್ದಾಳಿ ನಡೆಸಿದರು.

ದೊಡ್ಡ ಲಫಂಗ: ‘ಬಿಜೆಪಿ ಮುಖಂಡರನ್ನು ಲಫಂಗ ಎಂದು ಕರೆದಿರುವ ಸಿದ್ದರಾಮಯ್ಯ ಅವರೇ ದೊಡ್ಡ ಲಫಂಗ. ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿರುವ ಅವರು ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಅವರು ಎಷ್ಟು ಬಾರಿ ಸಮಿತಿಯ ಸಭೆ ಕರೆದಿದ್ದಾರೆ? ಕಾಂಗ್ರೆಸ್‌ ಹಿಡಿತದಲ್ಲಿರುವ ಪೊಲೀಸರು ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಮೀನಮೇಷ ಎಣಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.

ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ, ಬಿಜೆಪಿ ಜಿಲ್ಲಾ ಘಟಕದ ಆಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ, ಪ್ರಧಾನ ಕಾರ್ಯದರ್ಶಿ ಸಿ.ಡಿ.ರಾಮಚಂದ್ರ, ನಗರ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಶಾಸಕ ಎ.ನಾಗರಾಜ್, ಲೋಕಸಭಾ ಕ್ಷೇತ್ರದ ಸಂಚಾಲಕ ಕೃಷ್ಣಾರೆಡ್ಡಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.