ADVERTISEMENT

ಕೊಳವೆ ಬಾವಿ: ಕಾಮಗಾರಿ ಹಣ ಬಿಡುಗಡೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2021, 13:51 IST
Last Updated 23 ಡಿಸೆಂಬರ್ 2021, 13:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲಾರ: ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕೊಳವೆ ಬಾವಿ ಕೊರೆಯಲಾಗಿದೆ. ಇತರೆ ಕಾಮಗಾರಿಗಳಿಗೆ, ತಾಲ್ಲೂಕು ಕಾರ್ಯಪಡೆ ಸಮಿತಿಗಳಲ್ಲಿ, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ 1,371 ಕಾಮಗಾರಿಗಳಿಗೆ ಘಟನೋತ್ತರ ಮಂಜೂರಾತಿ ಪಡೆಯಲಾಗಿದೆ’ ಎಂದು ಹೇಳಿದರು.

‘ಈ ಕಾಮಗಾರಿಗಳು ಯಾವುದೇ ಕ್ರಿಯಾಯೋಜನೆಯಲ್ಲಿ ಸೇರ್ಪಡೆಗೊಂಡಿಲ್ಲ. ಕಾಮಗಾರಿಗಳನ್ನು ನಿರ್ವಹಿಸಿರುವ ಏಜೆನ್ಸಿ ಹಾಗೂ ಗುತ್ತಿಗೆದಾರರಿಗೆ ಹಣ ಪಾವತಿಸದಿದ್ದರೆ ಮುಂದೆ ಯಾವುದೇ ಕಾಮಗಾರಿ ನಿರ್ವಹಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಎದುರಾಗಲಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳಲ್ಲಿ ಕೋಲಾರ ತಾಲ್ಲೂಕಿನ 132, ಮಾಲೂರು 183, ಬಂಗಾರಪೇಟೆ 139, ಕೆಜಿಎಫ್ 153, ಮುಳಬಾಗಿಲು 246, ಶ್ರೀನಿವಾಸಪುರ 518 ಕಾಮಗಾರಿಗಳ ಅಂದಾಜು ಮೊತ್ತ ₹ 42.84 ಕೋಟಿಯಾಗಿದೆ. ಇದರ ಅನುಮೋದನೆಗಾಗಿ ಜಿಲ್ಲಾ ಪಂಚಾಯಿತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರಿಗೆ ಫೆ.19ರಂದೇ ಪ್ರಸ್ತಾವ ಕಳುಹಿಸಿದ್ದು, ಈವರೆಗೂ ಅನುಮೋದನೆಯಾಗಿಲ್ಲ’ ಎಂದು ದೂರಿದರು.

‘ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಪ್ರಸ್ತಾವನೆಗೆ ಕೂಡಲೇ ಅನುಮೋದನೆ ನೀಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರನ್ನು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ‘ಸಂಬಂಧಪಟ್ಟ ಇಲಾಖೆಗೆ ಸೂಚಿಸಿ ತ್ವರಿತವಾಗಿ ಅನುಮೋದನೆ ಕೊಡಿಸುತ್ತೇವೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.