ಕೋಲಾರ: ಭೂಪರಿವರ್ತನೆಗಾಗಿ ಅರ್ಜಿದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ ಡಿ.ಜಿ.ಚಂದ್ರಪ್ಪ ಅವರನ್ನು ಅಮಾನತುಗೊಳಿಸಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಆದೇಶ ಹೊರಡಿಸಿದ್ದಾರೆ.
ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು, ಬಂಧಿತರಾಗಿದ್ದ ಚಂದ್ರಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಭೂಪರಿವರ್ತನೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಬೆಂಗಳೂರಿನ ದೊಡ್ಡಬಿದರಕಲ್ಲು ನಿವಾಸಿ ಬಿ.ಮಂಜುನಾಥ್ ಎಂಬುವರು ಕೋಲಾರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮಾಲೂರಿನ ಸರ್ವೆ ನಂ. 198, 203, 204, 205, 206ರ ಜಮೀನುಗಳಿಗೆ ಸಂಬಂಧಿಸಿದಂತೆ ಭೂಪರಿವರ್ತನೆ ಆದೇಶ, ನಕ್ಷೆ ಮತ್ತು ಕಡತದ ಇತರೆ ದಾಖಲೆಗಳನ್ನು ದೃಢೀಕರಿಸಿ ನೀಡುವಂತೆ ಸಲ್ಲಿಸಿದ್ದ ಅರ್ಜಿ ಸಂಬಂಧ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಅರ್ಜಿದಾರ ಆರೋಪಿಸಿದ್ದರು.
ಈ ಸಂಬಂಧ ಜೂನ್ 10 ರಂದು ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಚಂದ್ರಪ್ಪ ಅವರನ್ನು ಬಂಧಿಸಿದ್ದರು. ಬಳಿಕ 48 ಗಂಟೆಗೂ ಮೀರಿದ ಅವಧಿ ನ್ಯಾಯಾಂಗ ಬಂಧನದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಜೂನ್ 1ರಿಂದಲೇ ಜಾರಿಗೆ ಬರುವಂತೆ ಅಮಾನತು ಆದೇಶ ಹೊರಡಿಸಿದ್ದಾರೆ.
ನೌಕರನ ಹಕ್ಕಿನ ಸ್ಥಾನಮಾನವನ್ನು ಉಪತಹಶೀಲ್ದಾರ್, ರಾಮಗಿರಿ ಹೋಬಳಿ, ಹೊಳಲ್ಕೆರೆ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.