ADVERTISEMENT

ಯಡಿಯೂರಪ್ಪ ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲ: ಸಂಸದ ಎಸ್‌.ಮುನಿಸ್ವಾಮಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 15:02 IST
Last Updated 6 ಜೂನ್ 2021, 15:02 IST
ಸಂಸದ ಎಸ್‌.ಮುನಿಸ್ವಾಮಿ
ಸಂಸದ ಎಸ್‌.ಮುನಿಸ್ವಾಮಿ    

ಕೋಲಾರ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರ್ಥವಾಗಿ ಕೆಲಸ ಮಾಡುತ್ತಿದ್ದು, ಅವರನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ’ ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಯಡಿಯೂರಪ್ಪ ಕೋವಿಡ್‌ ಸಂಕಷ್ಟದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಅವರು ಯುವಕರು ನಾಚುವಂತೆ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿ ಸಾಕು ಎನಿಸಿಲ್ಲ’ ಎಂದು ತಿಳಿಸಿದರು.

‘ಯಡಿಯೂರಪ್ಪ ಅವರು ಹೈಕಮಾಂಡ್‌ ತಮ್ಮ ಮೇಲೆ ಇಟ್ಟಿರುವ ನಂಬಿಕೆ ಮತ್ತು ಪಕ್ಷದ ಶಿಸ್ತಿಗೆ ಬದ್ಧವಾಗಿರುವುದಾಗಿ ಹೇಳಿರುವುದು ಅವರ ದೊಡ್ಡತನ. ಕೋವಿಡ್‌ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಯಡಿಯೂರಪ್ಪ ಅವರು ಸೇರಿದಂತೆ ಎಲ್ಲರೂ ಬದ್ಧವಾಗಿರುತ್ತೇವೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಸಚಿವರು ಗುಂಪುಗಾರಿಕೆ, ಇನ್ನೊಂದು ಮತ್ತೊಂದು ಮಾಡುತ್ತಿರುವ ಬಗ್ಗೆ ಕೇಳಿದ್ದೇನೆ. ದೇಶದಲ್ಲಿ ಕೋವಿಡ್‌ ಸಂಕಷ್ಟವಿದ್ದು, ಜನರ ಆರೋಗ್ಯ ಕಾಪಾಡುವುದಕ್ಕೆ ಮೊದಲ ಆದ್ಯತೆ ನೀಡುವಂತೆ ಸಚಿವರಿಗೆ ಮನವಿ ಮಾಡುತ್ತೇನೆ’ ಎಂದರು

‘ಪಕ್ಷದ ಯುವ ನಾಯಕ ವಿಜಯೇಂದ್ರ ಅವರು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದರೆ ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಸಂಪುಟದಿಂದ ಕೈಬಿಡುವ ಸಂಗತಿ ನನ್ನ ಗಮನಕ್ಕೆ ಬಂದಿಲ್ಲ. ಹೈಕಮಾಂಡ್‌ ಯಾವುದೇ ತೀರ್ಮಾನ ಕೈಗೊಂಡರೂ ಪಕ್ಷದ ಎಲ್ಲರೂ ಅದಕ್ಕೆ ಬದ್ಧರಾಗಿರಬೇಕು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.