ADVERTISEMENT

ಪೋಷಕರು ಆರೋಗ್ಯವಂತ ಸಮಾಜ ನಿರ್ಮಿಸಿ: ಜಿಲ್ಲಾಧಿಕಾರಿ ಮಂಜುನಾಥ್‌

​ಪ್ರಜಾವಾಣಿ ವಾರ್ತೆ
Published 7 ಜನವರಿ 2020, 13:46 IST
Last Updated 7 ಜನವರಿ 2020, 13:46 IST
ಕೋಲಾರದಲ್ಲಿ ಮಂಗಳವಾರ ನಡೆದ ಪೋಲಿಯೊ ಲಸಿಕೆ ಅಭಿಯಾನದ ಚಾಲನಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹಾಗೂ ಅಧಿಕಾರಿಗಳು ಅಭಿಯಾನದ ಪೋಸ್ಟರ್‌ ಬಿಡುಗಡೆ ಮಾಡಿದರು.
ಕೋಲಾರದಲ್ಲಿ ಮಂಗಳವಾರ ನಡೆದ ಪೋಲಿಯೊ ಲಸಿಕೆ ಅಭಿಯಾನದ ಚಾಲನಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹಾಗೂ ಅಧಿಕಾರಿಗಳು ಅಭಿಯಾನದ ಪೋಸ್ಟರ್‌ ಬಿಡುಗಡೆ ಮಾಡಿದರು.   

ಕೋಲಾರ: ‘ಪೋಷಕರು 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಕಿವಿಮಾತು ಹೇಳಿದರು.

ಇಲ್ಲಿ ಮಂಗಳವಾರ ನಡೆದ ಪೋಲಿಯೊ ಲಸಿಕೆ ಅಭಿಯಾನದ ಚಾಲನಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಜ.19ರಿಂದ ಪೋಲಿಯೊ ಲಸಿಕೆ ಅಭಿಯಾನ ಆರಂಭವಾಗಲಿದ್ದು, ಅಭಿಯಾನದ ಯಶಸ್ಸಿಗೆ ಪ್ರತಿ ಇಲಾಖೆ ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

‘ವೈದ್ಯಕೀಯ ಸಿಬ್ಬಂದಿಯು ಪ್ರತಿ 2 ಲಕ್ಷ ಮಕ್ಕಳ ಪೈಕಿ ಇಬ್ಬರು ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿ ಪೋಲಿಯೊ ವೈರಸ್ ಪತ್ತೆ ಹಚ್ಚುತ್ತಾರೆ. ಮಕ್ಕಳಲ್ಲಿ ಯಾವುದೇ ನ್ಯೂನತೆ ಇಲ್ಲದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ. ದೇಶದಲ್ಲಿ 2011ರ ನಂತರ ಪೋಲಿಯೊ ಪ್ರಕರಣ ವರದಿಯಾಗಿಲ್ಲ. ವಿಶ್ವಸಂಸ್ಥೆಯು 2016ರಲ್ಲೇ ಭಾರತವನ್ನು ಪೋಲಿಯೊ ಮುಕ್ತ ರಾಷ್ಟ್ರವಾಗಿ ಘೋಷಿಸಿದೆ’ ಎಂದರು.

ADVERTISEMENT

‘ಇತರೆ ಇಲಾಖೆ ಸಿಬ್ಬಂದಿಯು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು. ಮಕ್ಕಳ ಆರೋಗ್ಯಕರ ಬೆಳವಣಿಗೆ ಹಾಗೂ ಬಾಲ್ಯಾವಸ್ಥೆಯಲ್ಲಿ ಯಾವುದೇ ದೈಹಿಕ ನ್ಯೂನತೆ ಬಾರದಂತೆ ತಡೆಯಲು ಸರ್ಕಾರ ಉಚಿತವಾಗಿ ಈ ಅಭಿಯಾನ ನಡೆಸುತ್ತಿದೆ’ ಎಂದು ಮಾಹಿತಿ ನೀಡಿದರು.

744 ತಂಡ

‘ಜಿಲ್ಲೆಯಲ್ಲಿ 1,02,821 ಮಕ್ಕಳು 5 ವರ್ಷದೊಳಗಿನವರಾಗಿದ್ದಾರೆ. ಇವರಿಗೆ ಪೋಲಿಯೊ ಲಸಿಕೆ ನೀಡಲು 744 ತಂಡ ರಚನೆ ಮಾಡಿದ್ದು, ನಗರದಲ್ಲಿ 74 ತಂಡ ಕಾರ್ಯ ನಿರ್ವಹಿಸುತ್ತವೆ. ಲಸಿಕೆ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲು ಶಾಲಾ ವಿದ್ಯಾರ್ಥಿಗಳ ಜಾಥಾ ನಡೆಸಲಾಗುತ್ತದೆ. ಜತೆಗೆ ಕರಪತ್ರ ಹಂಚಿ ಪ್ರಚಾರ ನಡೆಸಲಾಗುವುದು’ ಎಂದು ತಾಯಿ ಮತ್ತು ಮಕ್ಕಳ ಆರೋಗ್ಯ ಯೋಜನಾಧಿಕಾರಿ (ಆರ್‌ಸಿಎಚ್‌) ಡಾ.ಚಂದನ್‌ ವಿವರಿಸಿದರು.

‘ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಅಭಿಯಾನದ ಬಗ್ಗೆ ಅರಿವು ಮೂಡಿಸಲಾಗುವುದು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅಭಿಯಾನ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ಜಾಗೃತಿ ಮೂಡಿಸಿ

‘ಜಂತು ಹುಳು ಕಾಯಿಲೆ ನಿಮೂರ್ಲನೆಗೆ ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಖಾಸಗಿ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಜಂತು ಹುಳು ನಿರ್ಮೂಲನೆ ಮಾತ್ರೆ ನೀಡಬೇಕು. ಜಂತು ಹುಳು ಕಾಯಿಲೆಯಿಂದ ಮಕ್ಕಳ ದೈಹಿಕ ಬೆಳವಣಿಗೆ ಮೇಲಾಗುವ ದುಷ್ಪರಿಣಾಮದ ಬಗ್ಗೆ ಪೋಷಕರಿಗೆ ಜಾಗೃತಿ ಮೂಡಿಸಿ. ಪ್ರತಿ ತಾಲ್ಲೂಕಿನಲ್ಲೂ ಜಾಗೃತಿ ಜಾಥಾ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ವಿಶ್ವ ಆರೋಗ್ಯ ಸಂಸ್ಥೆ ನೋಡಲ್ ಅಧಿಕಾರಿ ಮಿಸ್ಬಾ ಅಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎಸ್‌.ವಿಜಯ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪಾಲಿ, ನಗರಸಭೆ ಆಯುಕ್ತ ಶ್ರೀಕಾಂತ್, ರೆಡ್‌ಕ್ರಾಸ್ ಜಿಲ್ಲಾ ಅಧ್ಯಕ್ಷ ಸೋಮಶೇಖರ್, ಬೆಸ್ಕಾಂ ಕಿರಿಯ ಎಂಜಿನಿಯರ್‌ ಸುಬ್ರಮಣಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.